ETV Bharat / state

ಪಿಎಫ್​ಐ ಸಂಘಟನೆ ನಿಷೇಧ ಕ್ರಮ ಪ್ರಶ್ನಿಸಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

author img

By

Published : Nov 28, 2022, 9:03 PM IST

high-court-reserved-verdict-of-petition-against-ban-of-pfi
ಪಿಎಫ್​ಐ ಸಂಘಟನೆ ನಿಷೇಧಿಸಿದ್ದ ಕ್ರಮ ಪ್ರಶ್ನಿಸಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ವಾದ ಮಂಡನೆಗೆ ಕಾಲಾವಕಾಶ ನೀಡದೇ ಏಕಾಏಕಿ ದಿಢೀರ್ ಪಿಎಫ್‌ಐ ನಿಷೇಧ ಆದೇಶ ಹೊರಡಿಸಲಾಗಿದೆ. ಯುಎಪಿಎ ಕಾಯಿದೆಗೆ ವಿರುದ್ಧವಾಗಿ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್​ಗೆ ಕೋರಿದರು.

ಬೆಂಗಳೂರು: ಪಾಪ್ಯುಲರ್‌ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಿಷೇಧ ಮಾಡಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪನ್ನು ಕಾಯ್ದಿರಿಸಿದೆ. ಬೆಂಗಳೂರಿನ ವಾಸಿ ಹಾಗೂ ಕರ್ನಾಟಕದ ಪಿಎಫ್‌ಐ ಅಧ್ಯಕ್ಷ ನಾಸಿರ್‌ಅಲಿ ಸಲ್ಲಿಸಿದ್ದ ಅರ್ಜಿ ಕುರಿತಂತೆ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಸೋಮವಾರ ವಿಚಾರಣೆ ಪೂರ್ಣಗೊಳಿಸಿದೆ.

ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಜಯಕುಮಾರ್ ಪಾಟೀಲ್, ದೇಶದ್ರೋಹ ಚಟುವಟಿಕೆಗಳ ನಿಯಂತ್ರಣ ಕಾಯಿದೆ(ಯುಎಪಿಎ) 1967, ಸೆಕ್ಷನ್ 3, ಉಪ ನಿಯಮ 3ರಡಿ ಪಿಎಫ್‌ಐ ನಿರ್ಬಂಧ ಮಾಡಿರುವುದು ಕಾನೂನು ಬಾಹಿರವಾಗಿದೆ. ಪಿಎಫ್‌ಐ ಸಂಘಟನೆಯನ್ನು ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸುವುದಕ್ಕೆ ಮತ್ತು ಆ ನಿಷೇಧ ತಕ್ಷಣದಿಂದಲೇ ಅನ್ವಯಿಸಿರುವುದಕ್ಕೆ ಪ್ರತ್ಯೇಕ ಕಾರಣವನ್ನು ಆದೇಶದಲ್ಲಿ ತಿಳಿಸಿಲ್ಲ ಎಂದರು.

ಪಿಎಫ್‌ಐಗೆ ವಾದ ಮಂಡನೆಗೆ ಕಾಲಾವಕಾಶ ನೀಡದೇ ಏಕಾಏಕಿ ದಿಢೀರ್ ನಿಷೇಧ ಆದೇಶ ಹೊರಡಿಸಲಾಗಿದೆ. ಯುಎಪಿಎ ಕಾಯಿದೆಗೆ ವಿರುದ್ಧವಾಗಿ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೋರಿದರು.

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪಿಎಫ್‌ಐ ಸಂಘಟನೆ ದೇಶವಿರೋಧಿ ಕೃತ್ಯಗಳನ್ನು ನಡೆಯುತ್ತಿದೆ. ಅದು ಭಯೋತ್ಪಾದಕ ಸಂಘಟನೆಗಳ ಕೈ ಜೋಡಿಸಿ ದೇಶದಲ್ಲಿ ಹಿಂಸಾತ್ಮಕ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಮತ್ತು ಅಂತಹ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದೆ. ಜೊತೆಗೆ ಸಂಘಟನೆಯ ಸದಸ್ಯರು ರಾಷ್ಟ್ರದಲ್ಲಿ ಭೀತಿಯ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ತಿಳಿಸಿದರು. ವಾದ ಆಲಿಸಿದ ನ್ಯಾಯಪೀಠವು ತೀರ್ಪು ಕಾಯ್ದಿರಿಸಿದೆ.

ಇದನ್ನೂ ಓದಿ: ಓಲಾ, ಉಬರ್​​ ಆಟೋ ಸೇವೆ ನಿರ್ಬಂಧ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.