ETV Bharat / state

ಮಂಗಳೂರು ಘನತ್ಯಾಜ್ಯ ನಿರ್ವಹಣೆ ಲೋಪ: ಮಂಗಳೂರು ಪಾಲಿಕೆ ಆಯುಕ್ತರಿಗೆ ಹೈಕೋರ್ಟ್ ಎಚ್ಚರಿಕೆ

author img

By

Published : Jan 19, 2022, 1:03 AM IST

ಮಂಗಳೂರು ಘನತ್ಯಾಜ್ಯ ನಿರ್ವಹಣೆ ಲೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪಾಲಿಕೆಯ ಈ ಟೆಂಡರ್ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಪರಿಗಣಿಸಬೇಕು‌. ಯಾವುದೇ ವಿಳಂಬ ಮಾಡದೆ ತ್ಯಾಜ್ಯ ವಿಲೇವಾರಿ ಕೆಲಸ ಆರಂಭವಾಗಬೇಕು. ಮುಂದಿನ ವಿಚಾರಣೆಗೆ ವೇಳೆಗೆ ಟೆಂಡರ್ ಅಂತಿಮಗೊಳಿಸಿ ತ್ಯಾಜ್ಯ ವಿಲೇವಾರಿ ಕಾರ್ಯ ಆರಂಭಿಸದಿದ್ದರೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿತು.

ಮಂಗಳೂರು ಪಾಲಿಕೆ ಆಯುಕ್ತರಿಗೆ ಹೈಕೋರ್ಟ್ ಎಚ್ಚರಿಕೆ
ಮಂಗಳೂರು ಪಾಲಿಕೆ ಆಯುಕ್ತರಿಗೆ ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು: ಮಂಗಳೂರಿನ ಪಚ್ಚನಾಡಿ ಭೂಭರ್ತಿ ಘಟಕದಲ್ಲಿ ಬಹಳ ದಿನಗಳಿಂದ ಉಳಿದಿರುವ ತ್ಯಾಜ್ಯ ವಿಲೇವಾರಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ವಿಲೇವಾರಿ ಕಾರ್ಯವನ್ನು ಶೀಘ್ರವಾಗಿ ಆರಂಭಿಸದಿದ್ದರೆ ಪಾಲಿಕೆ ಆಯುಕ್ತರು ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ನಿರ್ದೇಶಿಸಿದೆ.

ಮಂಗಳೂರಿನ ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದ ಅನಾಹುತಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.

ವಿಚಾರಣೆ ವೇಳೆ ಮಂಗಳೂರು ನಗರಪಾಲಿಕೆ ಪರ ಎಎಜಿ ಧ್ಯಾನ್ ಚಿನ್ನಪ್ಪ ವಾದ ಮಂಡಿಸಿ, ಘಟಕದಲ್ಲಿ ಬಹಳ ದಿನಗಳಿಂದ ಉಳಿದಿರುವ ತ್ಯಾಜ್ಯ ವಿಲೇವಾರಿಗೆ ಗುತ್ತಿಗೆದಾರನ್ನು ಗುರುತಿಸಲಾಗಿದ್ದು, ಮಾತುಕತೆ ಸಹ ನಡೆದಿದೆ. ಟೆಂಡರ್ ಪ್ರಕ್ರಿಯೆಯಷ್ಟೇ ಬಾಕಿ ಉಳಿದಿದೆ. 50 ಕೋಟಿಗಿಂತ ಹೆಚ್ಚಿನ ಮೊತ್ತದ ಟೆಂಡರ್​​ಗೆ ಹಣಕಾಸು ಇಲಾಖೆ ಅನುಮೋದನೆ ಬೇಕಾಗಿದ್ದು, ಈ ಸಂಬಂಧ ಕಡತವನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ. ಅನುಮೋದನೆ ದೊರೆಯುತ್ತಲೇ ಟೆಂಡರ್ ಪೂರ್ಣಗೊಳಿಸಿ ತ್ಯಾಜ್ಯ ವಿಲೇವಾರಿ ಕಾರ್ಯ ಆರಂಭಿಸಲಾಗುವುದು ಎಂದು ಪೀಠಕ್ಕೆ ಭರವಸೆ ನೀಡಿದರು‌.

ಇದನ್ನೂ ಓದಿ: ಚಿನ್ನದ ದರದಲ್ಲಿ 23 ರೂಪಾಯಿ ಇಳಿಕೆ, ಬೆಳ್ಳಿ ಬೆಲೆ ಸ್ಥಿರ

ಹೇಳಿಕೆ ಪರಿಗಣಿಸಿದ ಪೀಠ, ಮಂಗಳೂರು ನಗರ ಪಾಲಿಕೆಯ ಈ ಟೆಂಡರ್ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಪರಿಗಣಿಸಬೇಕು‌. ಯಾವುದೇ ವಿಳಂಬ ಮಾಡದೆ ತ್ಯಾಜ್ಯ ವಿಲೇವಾರಿ ಕೆಲಸ ಆರಂಭವಾಗಬೇಕು. ಮುಂದಿನ ವಿಚಾರಣೆಗೆ ವೇಳೆಗೆ ಟೆಂಡರ್ ಅಂತಿಮಗೊಳಿಸಿ ತ್ಯಾಜ್ಯ ವಿಲೇವಾರಿ ಕಾರ್ಯ ಆರಂಭಿಸದಿದ್ದರೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿತು.

ಇದೇ ವೇಳೆ ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದಿಂದ ಬಿಡುಗಡೆಯಾದ ನೀರು ಸಮೀಪದ ಫಲ್ಗುಣಿ ನದಿ ಹಾಗೂ ಮರವೂರು ಜಲಾಶಯ‌ ಸೇರುತ್ತಿರುವ ಕುರಿತು ಪ್ರಸ್ತಾಪಿಸಿದ ಪೀಠ, ನೀರಿನ ವಿಶ್ಲೇಷಣಾ ವರದಿ ಸಲ್ಲಿಸಲು ವಿಳಂಬವೇಕೆ. ವರದಿ ಸಲ್ಲಿಸಲು ಈಗಾಗಲೇ 4 ವಾರಗಳ ಕಾಲಾವಕಾಶ ನೀಡಲಾಗಿತ್ತು. ಈಗ ಮತ್ತೆ 4 ವಾರ ಕಾಲಾವಕಾಶ ಕೋರುತ್ತಿದ್ದೀರಿ. ವರದಿ ಸಲ್ಲಿಸಲು 2 ತಿಂಗಳು ಬೇಕೆ? ಅಲ್ಲಿವರೆಗೂ ಜನ ವಿಷಪೂರಿತ ನೀರು ಕುಡಿಯಬೇಕೆ? ಎಂದು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ತರಾಟೆಗೆ ತೆಗೆದುಕೊಂಡಿತು. ಅಲ್ಲದೇ, ಮುಂದಿನ ವಿಚಾರಣೆ ವೇಳೆ ತಪ್ಪದೇ ನೀರಿನ ವಿಶ್ಲೇಷಣಾ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.