ETV Bharat / state

ಕಾಳ ಸಂತೆಯಲ್ಲಿ ರೆಮ್ಡೆಸಿವಿರ್ ಮಾರಾಟ : ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

author img

By

Published : May 19, 2021, 7:02 PM IST

ಜೀವ ರಕ್ಷಕ ಔಷಧಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಡಿ ಬಂಧಿತನಾಗಿರುವ ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್​​ ನಿರಾಕರಿಸಿದ್ದು, ಜೀವ ರಕ್ಷಕ ಔಷಧಗಳನ್ನು ಅಕ್ರಮವಾಗಿ ಮಾರಾಟ ಮಾಡುವುದನ್ನು ತಡೆಗಟ್ಟುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

highcourt
highcourt

ಬೆಂಗಳೂರು: ಕಾಳಸಂತೆಯಲ್ಲಿ ರೆಮ್ಡೆಸಿವಿರ್ ಮಾರಾಟ ಮಾಡಿದ ಆರೋಪದಡಿ ಬಂಧಿತನಾಗಿರುವ ವ್ಯಕ್ತಿಗೆ ಜಾಮೀನು ನೀಡಲು ನಿರಾಕರಿಸಿರುವ ಹೈಕೋರ್ಟ್, ಜೀವ ರಕ್ಷಕ ಔಷಧಗಳನ್ನು ಅಕ್ರಮವಾಗಿ ಮಾರಾಟ ಮಾಡುವುದನ್ನು ತಡೆಗಟ್ಟುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

ಕಾಳಸಂತೆಯಲ್ಲಿ ರೆಮ್ಡೆಸಿವಿರ್ ಮಾರಾಟ ಮಾಡಿದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಸೊಹೈಲ್ ಪಾಷಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಅರ್ಜಿದಾರರ ಪರ ವಾದಿಸಿದ ವಕೀಲರು, ಸೊಹೈಲ್ ಪಾಷಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಜಾಮೀನು ನೀಡುವಂತೆ ಮನವಿ ಮಾಡಿದರು. ಮನವಿ ತಿರಸ್ಕರಿಸಿದ ಪೀಠ, ಕೋವಿಡ್ ಉಲ್ಭಣಿಸುತ್ತಿದ್ದು, ಜನರು ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜೀವರಕ್ಷಕ ಔಷಧವನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ಆರೋಪಿಗೆ ಚುಚ್ಚುಮದ್ದು ಸಿಕ್ಕಿದ್ದೆಲ್ಲಿ ಎಂಬುದರ ಕುರಿತು ತನಿಖೆ ನಡೆಸಬೇಕಿದೆ. ಆದ್ದರಿಂದ ಅಂತಿಮ ತನಿಖಾ ವರದಿ ಸಲ್ಲಿಸಿದ ನಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿ, ಜಾಮೀನು ಅರ್ಜಿ ವಜಾ ಮಾಡಿ ಆದೇಶಿಸಿದೆ.

ಇದೇ ವೇಳೆ ಆರೋಪಿಯನ್ನು ಬಂಧಿಸಿದ ಅಧಿಕಾರಿಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿರುವ ಪೀಠ, ಇಂತಹ ದಂಧೆಗಳನ್ನು ನಿರ್ಮೂಲನೆ ಮಾಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. 5 ರೆಮ್ಡೆಸಿವಿರ್ ಚುಚ್ಚುಮದ್ದನ್ನು ತಲಾ ರೂ.7 ಸಾವಿರದಂತೆ ಮಾರಾಟ ಮಾಡಿದ ಆರೋಪದಡಿ ಆರೋಪಿ ಸೊಹೈಲ್ ನನ್ನು ಪೊಲೀಸರು ಬಂಧಿಸಿದ್ದರು. ಏ.17ರಿಂದ ಸೊಹೈಲ್ ಪಾಷಾ ನ್ಯಾಯಾಂಗ ಬಂಧನದಲ್ಲಿದ್ದಾನೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.