ಹೊರ ರಾಜ್ಯದ ಆರೋಪಿಗಳಿಗೆ ಜಾಮೀನು ನೀಡಿದಲ್ಲಿ ವಿಚಾರಣೆಗೆ ಅಡ್ಡಿ ಸಾಧ್ಯತೆ.. ಹೈಕೋರ್ಟ್​

author img

By

Published : Oct 5, 2022, 7:42 PM IST

High court

ಸರ್ಕಾರಿ ವಕೀಲರ ವಾದವನ್ನು ಪುರಸ್ಕರಿಸಿದ ನ್ಯಾಯಪೀಠ ಆರೋಪಿಗಳಿಗೆ ಜಾಮೀನು ನೀಡುವುದಕ್ಕೆ ನಿರಾಕರಿಸಿ ಅರ್ಜಿ ವಜಾಗೊಳಿಸಿದೆ. ಅಲ್ಲದೆ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುಂದಿನ ಮೂರು ತಿಂಗಳಲ್ಲಿ ಪ್ರಕರಣವನ್ನು ವಿಲೇವಾರಿ ಮಾಡಬೇಕು ಎಂದು ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.

ಬೆಂಗಳೂರು: ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯಿದೆ(ಎನ್​ಡಿಪಿಎಸ್​)ಯಲ್ಲಿ ಹೊರ ರಾಜ್ಯದ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದಲ್ಲಿ ಪ್ರಕರಣದ ವಿಚಾರಣೆಗೆ ಅಡ್ಡಿಯಾಗಲಿದೆ ಎಂದು ಅಭಿಪ್ರಾಯ ಪಟ್ಟಿರುವ ಹೈಕೋರ್ಟ್​ ಒಡಿಶಾ ಮೂಲದ ಇಬ್ಬರು ಆರೋಪಿಗಳಿಗೆ ಜಾಮೀನು ನಿರಾಕರಿಸಿದೆ.

ಒಡಿಶಾ ರಾಜ್ಯದ ಗಜಪತಿ ಜಿಲ್ಲೆ ಮೋಹನ ತಾಲೂಕಿನ ಸುನೀಲ್​ ಬೀರಾ ಮತ್ತು ರೋಹಿತ್​ ಬೀರ್​ ಎಂಬುವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ ಕೆ ನಟರಾಜನ್​ ಅವರಿದ್ದ ನ್ಯಾಯಪೀಠ ಜಾಮೀನು ನೀಡಲು ನಿರಾಕರಿಸಿದೆ. ಅರ್ಜಿದಾರರ ಪರ ವಕೀಲರು, ಆರೋಪಿಗಳು ಕಳೆದ ಆರೂವರೆ ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಪ್ರಕರಣದ ಕುರಿತ ತನಿಖೆ ಮುಗಿದಿದ್ದು, ಆರೋಪ ಪಟ್ಟಿ ಸಲ್ಲಿಸಲಾಗಿದೆ. ನ್ಯಾಯಾಲಯ ವಿಧಿಸುವ ಷರತ್ತುಗಳನ್ನು ಪಾಲಿಸುವುದಕ್ಕೆ ಸಿದ್ದರಿದ್ದು, ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸರ್ಕಾರದ ಪರ ವಕೀಲರು, ಅರ್ಜಿದಾರರ ಒಡಿಶಾ ರಾಜ್ಯದವರಾಗಿದ್ದಾರೆ. ಅವರಿಗೆ ಜಾಮೀನು ಮಂಜೂರು ಮಾಡಿದಲ್ಲಿ ಪ್ರಕರಣದ ವಿಚಾರಣೆಗೆ ಅಡ್ಡಿಯಾಗುವ ಸಾಧ್ಯತೆಗಳಿವೆ. ಜಾಮೀನು ಪಡೆದ ಬಳಿಕ ನಾಪತ್ತೆಯಾದಲ್ಲಿ ವಿಚಾರಣೆಗೆ ಹಾಜರು ಪಡಿಸಲು ಸಾಧ್ಯವಿರುವುದಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡದಂತೆ ಮನವಿ ಮಾಡಿದರು.

ಸರ್ಕಾರಿ ವಕೀಲರ ವಾದವನ್ನು ಪುರಸ್ಕರಿಸಿದ ನ್ಯಾಯಪೀಠ ಆರೋಪಿಗಳಿಗೆ ಜಾಮೀನು ನೀಡುವುದಕ್ಕೆ ನಿರಾಕರಿಸಿ ಅರ್ಜಿ ವಜಾಗೊಳಿಸಿದೆ. ಅಲ್ಲದೆ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುಂದಿನ ಮೂರು ತಿಂಗಳಲ್ಲಿ ಪ್ರಕರಣವನ್ನು ವಿಲೇವಾರಿ ಮಾಡಬೇಕು ಎಂದು ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.

ಪ್ರಕರಣದ ಹಿನ್ನೆಲೆ ಏನು?: 2022ರ ಮಾರ್ಚ್ 13ರಂದು ಮೈಸೂರು ರೈಲ್ವೆ ನಿಲ್ದಾಣದಲ್ಲಿ ಒಡಿಶಾದಿಂದ ಗಾಂಜಾ ತಂದು ಮಾರಾಟ ಮಾಡುತ್ತಿರುವುದಕ್ಕೆ ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯೊಂದಿಗೆ ದಾಳಿ ನಡೆಸಿದ ಮೈಸೂರಿನ ರೈಲ್ವೆ ಪೊಲೀಸರು ಆರೋಪಿಗಳಾದ ಸುನೀಲ್​ ಬೀರಾ ಮತ್ತು ರೋಹಿತ್​ ಬೀರ್ ಅವರನ್ನು ವಶಕ್ಕೆ ಪಡೆದು 40 ಕೆ.ಜಿ. ತೂಕದ ಗಾಂಜಾ ವಶಪಡಿಸಿಕೊಂಡಿದ್ದರು.

ಜತೆಗೆ, ಇಬ್ಬರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದರು. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ರದ್ದು ಪಡಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್​ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಮಾದಕ ವ್ಯಸನಿ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ : ಕುಖ್ಯಾತ ಸರಬರಾಜುಗಾರರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.