ETV Bharat / state

ಗೋಹತ್ಯೆ ನಿಷೇಧ ಕಾಯ್ದೆ: ಆಕ್ಷೇಪಣೆ ಸಲ್ಲಿಸದಿದ್ದರೆ ಕಾಯ್ದೆಗೆ ತಡೆ ನೀಡ ಬೇಕಾಗುತ್ತದೆ..ಹೈಕೋರ್ಟ್ ಎಚ್ಚರಿಕೆ

author img

By

Published : May 27, 2021, 8:35 PM IST

Highcourt
ಹೈಕೋರ್ಟ್

ಕಾಯ್ದೆಯ ಸೆಕ್ಷನ್ 8ರ ಅಡಿ ಜಾನುವಾರು ಸಾಗಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತಿದೆ. ಈವರೆಗೆ 50ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿದೆ. ಆದ್ದರಿಂದ, ಸರ್ಕಾರಕ್ಕೆ ಮತ್ತೆ ಕಾಲಾವಕಾಶ ನೀಡಬಾರದು. ಜತೆಗೆ ಕಾಯ್ದೆಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಕೋರಿದರು.

ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ - 2020 ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ವಿಳಂಬ ಮಾಡಿರುವ ರಾಜ್ಯ ಸರ್ಕಾರಕ್ಕೆ ಅಂತಿಮ ಅವಕಾಶ ನೀಡಿರುವ ಹೈಕೋರ್ಟ್, ಮತ್ತಷ್ಟು ವಿಳಂಬ ಮಾಡಿದರೆ ಕಾಯ್ದೆಗೆ ತಡೆ ನೀಡಬೇಕೆಂಬ ಅಜಿರ್ದಾರರ ಮಧ್ಯಂತರ ಮನವಿ ಪರಿಗಣಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಕಾಯ್ದೆಯನ್ನು ಅಸಿಂಧುಗೊಳಿಸುವಂತೆ ಕೋರಿ ನಗರದ ಆರೀಫ್ ಜಮೀಲ್, ಕೆಲ ಕಸಾಯಿ ಖಾನೆ ಮಾಲೀಕರು ಮತ್ತು ಗೋಮಾಂಸ ಮಾರಾಟಗಾರರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಸರ್ಕಾರದ ಪರ ವಾದಿಸಿದ ವಕೀಲರು, ರಾಜ್ಯದಲ್ಲಿ ಕೋವಿಡ್ ಇರುವುದರಿಂದ ಆಕ್ಷೇಪಣೆಗಳನ್ನು ಅಂತಿಮಗೊಳಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲ ಅರ್ಜಿಗಳಿಗೆ ಸಮಗ್ರ ಆಕ್ಷೇಪಣೆ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್, ಸರ್ಕಾರ ಆಕ್ಷೇಪಣೆ ಸಲ್ಲಿಸಲು ಉದ್ದೇಶಪೂರ್ವಕ ವಿಳಂಬ ಮಾಡುತ್ತಿದೆ. ಕೋವಿಡ್ ನೆಪ ಹೇಳುವುದು ಸರಿಯಲ್ಲ. ಆಕ್ಷೇಪಣೆ ಸಲ್ಲಿಸಲಿಕ್ಕೆ ಯಾವ ತೊಂದರೆಯೂ ಇಲ್ಲ. ಈ ಹಿಂದೆ ಸರ್ಕಾರ ಜಾನುವಾರು ಸಾಗಿಸುವವರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ಕೋರ್ಟ್‌ಗೆ ಭರವಸೆ ನೀಡಿತ್ತು. ಆದರೆ, ಕಾಯ್ದೆಯ ಸೆಕ್ಷನ್ 8ರ ಅಡಿ ಜಾನುವಾರು ಸಾಗಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತಿದೆ. ಈವರೆಗೆ 50ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿದೆ. ಆದ್ದರಿಂದ, ಸರ್ಕಾರಕ್ಕೆ ಮತ್ತೆ ಕಾಲಾವಕಾಶ ನೀಡಬಾರದು. ಜತೆಗೆ ಕಾಯ್ದೆಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂದು ಕೋರಿದರು.

ವಾದ ಪ್ರತಿವಾದ ಆಲಿಸಿದ ಪೀಠ, ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಅಂತಿಮ ಅವಕಾಶ ನೀಡುತ್ತೇವೆ. ಮುಂದಿನ ವಿಚಾರಣೆ ವೇಳೆಗೆ ಸರ್ಕಾರ ಆಕ್ಷೇಪಣೆ ಸಲ್ಲಿಸಲು ವಿಫಲವಾದರೆ, ಕಾಯ್ದೆಗೆ ತಡೆ ನೀಡುವಂತೆ ಕೋರಿರುವ ಅರ್ಜಿದಾರರ ಮಧ್ಯಂತರ ಮನವಿಯನ್ನು ಪರಿಗಣಿಸಬೇಕಾಗುತ್ತದೆ ಎಂದು ತಿಳಿಸಿ, ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಿತು.

ಇದನ್ನೂ ಓದಿ: ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಅನುಮತಿ: ಕೆಎಸ್​​​ಪಿಸಿಬಿ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.