ETV Bharat / state

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ನೇಮಕ

author img

By

Published : Nov 23, 2020, 6:55 PM IST

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ನೇಮಕಗೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

Jayaprakash Hegde
Jayaprakash Hegde

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ನೇಮಕಗೊಂಡಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣಕ್ಕೆ ಜಾರಿಗೆ ಬರುವಂತೆ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧಿನಿಯಮ 1995ರ ಪರಿಚ್ಛೇದ 3 ಮತ್ತು 4(1) ಅಡಿಯಲ್ಲಿ ನೀಡಿರುವ ಅಧಿಕಾರದ ಅಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶ ಜಾರಿಯಾಗಲಿದ್ದು, ಮುಂದಿನ ಆದೇಶ ಹೊರ ಬೀಳುವವರೆಗೂ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.

ಜಯಪ್ರಕಾಶ್ ಅವರು ಮೂಲತಃ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ಹೆಗ್ಡೆಯವರು ವೃತ್ತಿಯಲ್ಲಿ ಉಚ್ಚ ನ್ಯಾಯಾಲಯದ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸಿದ್ದಾರೆ. 1997ರಲ್ಲಿ ಅವರು ಮೀನುಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 2004ರ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದ ಶಾಸಕರಾಗಿ ಬಿಜೆಪಿಯಿಂದ ಆಯ್ಕೆಯಾಗಿದ್ದರು.

2009ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಅವರು, 2012ರಲ್ಲಿ ನಡೆದ ಉಪಚುನಾವಣೆಯಲ್ಲಿ ಗೆದ್ದು ಲೋಕಸಭೆ ಪ್ರವೇಶಿಸಿದ್ದರು. ಇದಾದ ಬಳಿಕ ಬಿಜೆಪಿ ಪಕ್ಷ ಸೇರ್ಪಡೆಯಾಗಿ ಪಕ್ಷ ಸಂಘಟನೆಗಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರಿಗೆ ಹಿಂದುಳಿದ ವರ್ಗಗಳ ಆಯೋಗದ ಜವಾಬ್ದಾರಿ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.