ETV Bharat / state

ನಿರುದ್ಯೋಗ ನಿವಾರಣೆಗೆ ಶ್ರಮಿಸುವಂತೆ ಸಿಎಂಗೆ ನಿವೃತ್ತ ನ್ಯಾ.ಗೋಪಾಲಗೌಡ ಮನವಿ

author img

By ETV Bharat Karnataka Team

Published : Nov 2, 2023, 9:19 AM IST

ದುಡಿಯುವುದು ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ಹಲವು ಸಂದರ್ಭಗಳಲ್ಲಿ ತೀರ್ಪು ನೀಡಿದ್ದು, ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲ ಗೌಡ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ

ಬೆಂಗಳೂರು: ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ನಿರುದ್ಯೋಗ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದ್ದು, ದುಡಿಯುವುದು ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಜಾರಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲ ಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು.

ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಬುಧವಾರ ಕನ್ನಡ ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಬಳಿಕ, ಪ್ರಶಸ್ತಿ ಪುರಸ್ಕೃತರ ಪರವಾಗಿ ಅವರು ಮಾತನಾಡಿದರು.

ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಸರ್ಕಾರ ಮಹಿಳಾ ಸಬಲೀಕರಣ ಯೋಜನೆಗಳನ್ನು ಜಾರಿಗೆ ತಂದಿದ್ದು, ಬದ್ಧತೆಯ ಸರ್ಕಾರ ಎಂಬ ಹೆಗ್ಗಳಿಗೆಗೆ ಪಾತ್ರವಾಗಿದೆ. ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವುದು ವಿಶೇಷವಾಗಿದ್ದು, ಇದು ದೇಶದಲ್ಲಿ ಮೆಚ್ಚುಗೆಗೆ ಕಾರಣವಾಗಿದೆ ಎಂದರು.

ಹೆಣ್ಣುಮಕ್ಕಳಿಗೆ ಸಾಮಾಜಿಕ ನ್ಯಾಯ ನೀಡಬೇಕು ಸುಪ್ರೀಂ ಕೋರ್ಟ್ ಹಲವು ಬಾರಿ ತೀರ್ಪು ನೀಡಿದೆ. ಶೇ. 50ರಷ್ಟು ಮಹಿಳೆಯರಿದ್ದಾಗ ಅವರಿಗೆ ಸೌಲಭ್ಯ ನೀಡಿರುವುದನ್ನು ಟೀಕಿಸುತ್ತಿರುವವರಿಗೆ ಹೊಟ್ಟೆಕಿಚ್ಚಾಗಿದೆ. ಹಿಂದುಳಿದ, ಪರಿಶಿಷ್ಟ ಜಾತಿಯೇ ಆಗಲಿ ಅವರಿಗೆ ನ್ಯಾಯ ಕೊಡಿಸುವ ಸರ್ಕಾರವೇ ಜನಪರವಾದ ಸರ್ಕಾರ ಎಂದು ಗೋಪಾಲ ಗೌಡ ತಿಳಿಸಿದರು.

ಇಸ್ರೋ ಅಧ್ಯಕ್ಷ ಸೋಮನಾಥನ್ ಮಾತನಾಡಿ, ಚಂದ್ರಯಾನ 3 ಉಡಾವಣೆಯ ಯಶಸ್ಸಿಗಾಗಿ ನನಗೆ ದೊರೆತಿರುವ ಈ ಪ್ರಶಸ್ತಿ ಇಡೀ ಇಸ್ರೋ ಸಿಬ್ಬಂದಿಗೆ ಸಂದಿರುವ ಗೌರವ ಎಂದರು.

ರಾಜ್ಯದ ಶಾಲಾ, ಕಾಲೇಜುಗಳಲ್ಲಿ ವಚನಗಳ ಅಭಿಯಾನ ಮಾಡಬೇಕು. ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಣೆ ಮಾಡಬೇಕು ಎಂದು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದರು.

ಇದಕ್ಕೂ ಮುನ್ನ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಕರ್ನಾಟಕ ಎಂದು ಹೆಸರಾಗಿ 50 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಒಂದು ವರ್ಷ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ಗ್ರಾಮ, ತಾಲೂಕು ಪಂಚಾಯತ್ ಸೇರಿದಂತೆ ಎಲ್ಲ ಕಡೆಗಳಲ್ಲಿಯೂ ಆಚರಣೆ ಮಾಡಲಾಗುತ್ತಿದೆ. ಗುರುವಾರ ಹಂಪಿಯಿಂದ ಕನ್ನಡ ರಥಕ್ಕೆ ಚಾಲನೆ ನೀಡಿ ವರ್ಷಪೂರ್ತಿ ರಾಜ್ಯಾಧ್ಯಂತ ಸಂಚರಿಸಿ ಮುಂದಿನ ವರ್ಷ ಅಕ್ಟೋಬರ್ 30 ರಂದು ಬೆಂಗಳೂರಿಗೆ ಬಂದು ದೊಡ್ಡ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಪ್ರಸಕ್ತ ವರ್ಷ ಅರ್ಜಿ ಸಲ್ಲಿಸದವರನ್ನು ಹೊರತುಪಡಿಸಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸುತ್ತಿರುವ 22 ಜನರನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.

ಚುನಾವಣೆಗೂ ಮುನ್ನ ರಾಜ್ಯದ ಬಡವರ ಏಳಿಗೆ ಜತೆಗೆ ರಾಜ್ಯದ ಅಭಿವೃದ್ದಿ ಮಾಡುವ ಭರವಸೆ ನೀಡಲಾಗಿತ್ತು. ನಮ್ಮ ಕಾರ್ಯಕ್ರಮಗಳ ಬಗ್ಗೆ ಟೀಕೆಗಳು ಬರುತ್ತಿವೆ. ಅದರ ನಡುವೆಯೂ ಜನರ ಸೇವೆ ಮುಖ್ಯವಾಗಿದ್ದು, ಅದನ್ನೇ ಸರ್ಕಾರ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನುಡಿದರು.

ಕ್ರೀಡಾ ಕ್ಷೇತ್ರದಲ್ಲಿ ಅದಿತಿ ಆಶೋಕ್ ಗೈರಾದ ಹಿನ್ನೆಲೆಯಲ್ಲಿ ಅವರ ತಾಯಿ ಪ್ರಶಸ್ತಿ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಮಂತ್ರಿ ಡಾ.ಜಿ.ಪರಮೇಶ್ವರ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಉನ್ನತ ಶಿಕ್ಷಣ ಸಚಿವ ಸುಧಾಕರ್ ಮತ್ತಿತರರಿದ್ದರು.

ಕಿಕ್ಕಿರಿದು ತುಂಬಿದ್ದ ರವೀಂದ್ರ ಕಲಾಕ್ಷೇತ್ರ: ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದ ರವೀಂದ್ರ ಕಲಾಕ್ಷೇತ್ರದಲ್ಲಿ ಜನ ಕಿಕ್ಕಿರಿದು ತುಂಬಿದ್ದರು. ಕಲಾಕ್ಷೇತ್ರದಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ನಿಂತುಕೊಂಡೇ ಕಾರ್ಯಕ್ರಮ ವೀಕ್ಷಿಸಿದರು. ಹೊರಭಾಗದಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ: ನಾಡ ದೇವಿ ಭುವನೇಶ್ವರಿ ದೇವಿಯ ಹೆಸರಿನಲ್ಲಿ ಭವನ ನಿರ್ಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.