ETV Bharat / state

ನೇಮಕಾತಿ ಪ್ರಕರಣ: ಕೆಪಿಎಸ್​ಸಿ ಕಾರ್ಯದರ್ಶಿ ಖುದ್ದು ಹಾಜರಾತಿಗೆ ಹೈಕೋರ್ಟ್ ಆದೇಶ

author img

By

Published : Dec 1, 2020, 10:57 PM IST

ಕೆಪಿಎಸ್​ಸಿ ಅಭ್ಯರ್ಥಿಗಳಾದ ಚನ್ನಪ್ಪ, ಕೆ.ರೂಪಶ್ರೀ ಮತ್ತಿತರರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಆಲಿಸಿದ ಹೈಕೋರ್ಟ್, ನಾಳೆಯೇ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಖುದ್ದು ಹಾಜರಿರುವಂತೆ ನಿರ್ದೇಶಿಸಿದೆ.

KPSC Recruitment Issue; High Court order for KPSC secretary to appear first
ಹೈಕೋರ್ಟ್

ಬೆಂಗಳೂರು: 1998ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಸಂಬಂಧ ನ್ಯಾಯಾಲಯದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿರುವ ಹೈಕೋರ್ಟ್, ನಾಳೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಖುದ್ದು ಹಾಜರಿರುವಂತೆ ನಿರ್ದೇಶಿಸಿದೆ.

ಈ ಕುರಿತು ಅಭ್ಯರ್ಥಿಗಳಾದ ಚನ್ನಪ್ಪ, ಕೆ.ರೂಪಶ್ರೀ ಮತ್ತಿತರರು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಇದನ್ನೂ ಓದಿ: ಆದೇಶ ಬಂದರೂ ಕೆಲಸ ಇಲ್ಲ: ಕೆಪಿಎಸ್‌ಸಿ ಅಭ್ಯರ್ಥಿಗಳಿಂದ ಮುಂದುವರೆದ ಪ್ರತಿಭಟನೆ

ಹಿಂದಿನ ವಿಚಾರಣೆ ವೇಳೆ ಕೆಪಿಎಸ್​ಸಿ ನ್ಯಾಯಾಂಗ ನಿಂದನೆ ಎಸಗಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಪೀಠ, ಈ ಸಂಬಂಧ ಪ್ರಮಾಣಪತ್ರ ಸಲ್ಲಿಸುವಂತೆ ಆಯೋಗಕ್ಕೆ ನಿರ್ದೇಶಿಸಿತ್ತು. ಇಂದು ನಡೆದ ವಿಚಾರಣೆ ವೇಳೆ ಆಯೋಗದ ಪರ ವಕೀಲರು ಪ್ರಮಾಣಪತ್ರ ಸಲ್ಲಿಸದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಈಗಾಗಲೇ ನ್ಯಾಯಾಂಗ ನಿಂದನೆ ಆಗಿದೆ ಎಂದು ನ್ಯಾಯಾಲಯ ತಿಳಿಸಿದೆ. ಹೀಗಾಗಿ ಸುಮ್ಮನಿರಲು ಸಾಧ್ಯವಿಲ್ಲ. ನಾಳೆಯೇ ಆಯೋಗದ ಕಾರ್ಯದರ್ಶಿಯನ್ನು ಖುದ್ದು ಹಾಜರಿರಲು ತಿಳಿಸಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:

1998ನೇ ಸಾಲಿನಲ್ಲಿ ನಡೆದಿದ್ದ ನೇಮಕಾತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, 2016ರಲ್ಲಿ ತೀರ್ಪು ನೀಡಿ ನೇಮಕಾತಿಯಲ್ಲಿ ಆಗಿದ್ದ ಲೋಪಗಳನ್ನು ಸರಿಪಡಿಸಿಕೊಳ್ಳಲು ಆದೇಶಿಸಿತ್ತು. 91 ಉತ್ತರ ಪತ್ರಿಕೆಗಳ ಮೌಲ್ಯಮಾಪನ ಅಂಕ ಆಧರಿಸಿ ಅರ್ಹ ಅಭ್ಯರ್ಥಿಗಳನ್ನು ಸೇವೆಗೆ ನಿಯೋಜಿಸಿಕೊಳ್ಳುವಂತೆ ಸ್ಪಷ್ಟಪಡಿಸಿತ್ತು. ಇದನ್ನೇ ತಪ್ಪಾಗಿ ಅರ್ಥೈಸಿಕೊಂಡಿದ್ದ ಕೆಪಿಎಸ್​ಸಿ, ನ್ಯಾಯಾಲಯ ಹೇಳಿದ್ದಕ್ಕಿಂತ ಹೆಚ್ಚುವರಿಯಾಗಿ ಅಭ್ಯರ್ಥಿಗಳನ್ನು ನೇಮಕ ಮಾಡಿತ್ತು. ಇದನ್ನು ಉದ್ದೇಶಪೂರ್ವಕವಾಗಿಯೇ ಮಾಡಲಾಗಿದೆ ಎಂಬುದು ಅರ್ಜಿದಾರರ ಆರೋಪವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.