ETV Bharat / state

ಗೌರಿ ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ KSRTC ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ

author img

By ETV Bharat Karnataka Team

Published : Sep 11, 2023, 9:02 PM IST

ksrtc-extra-special-bus-facility-from-bengaluru-for-gauri-ganesha-festival
ಗೌರಿ ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ KSRTC ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ

KSRTC Bus for Ganesh Chaturthi: ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯದ ವಿವಿಧ ಭಾಗಗಳಿಗೆ ಬೆಂಗಳೂರಿನಿಂದ ಕೆಎಸ್ಆರ್​​ಟಿಸಿ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಇರಲಿದೆ.

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಜನರು ತಮ್ಮ ಊರುಗಳಿಗೆ ತೆರಳಲು ಅನುಕೂಲವಾಗಲು ಕೆಎಸ್ಆರ್​​ಟಿಸಿಯು ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ 1,200 ಹೆಚ್ಚುವರಿ ವಿಶೇಷ ಬಸ್ ಸೇವೆ ಕಲ್ಪಿಸಿದೆ. ಸೆಪ್ಟೆಂಬರ್ 15 ಮತ್ತು 16ರಂದು ವಾರಾಂತ್ಯ ಹಾಗೂ ಸೆಪ್ಟೆಂಬರ್ 18ರಂದು ಗೌರಿ ಗಣೇಶ ಹಬ್ಬ ಇದ್ದು, ಪ್ರಯಾಣಿಕರ ದಟ್ಟಣೆ ಹೆಚ್ಷಾಗಲಿದೆ. ಹಾಗಾಗಿ ಕೆಎಸ್ಆರ್​​ಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 15, 16 ಹಾಗೂ 17ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ.

ನಂತರ ರಜೆ ಮುಗಿಸಿ ಮರಳಲು ಅನುಕೂಲವಾಗಲು ಪೂರಕವಾಗಿ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸೆಪ್ಟೆಂಬರ್ 18ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಆರ್ಟಿಸಿ ಪ್ರಕಟಣೆ ಮೂಲಕ ತಿಳಿಸಿದೆ‌.

ಯಾವ ನಿಲ್ದಾಣದಿಂದ ಯಾವ ಊರಿಗೆ ಬಸ್?: ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಬಸ್​ಗಳು ವಿಶೇಷ ಕಾರ್ಯಾಚರಣೆ ನಡೆಸಲಿವೆ.

ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಲಾಗುತ್ತದೆ. ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಾಡಲಾಗುವುದು. ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಾಗುತ್ತದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಿದ್ದು, ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಸಾರಿಗೆ ನಿಗಮ ಮನವಿ ಮಾಡಿದೆ‌.

ಮುಂಗಡ ಟಿಕೆಟ್​​ಗೆ ರಿಯಾಯಿತಿ: ಇ - ಟಿಕೆಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್​​ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಅಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ತಿಳಿಸಲಾಗಿದೆ.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ. ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಟಿಕೆಟ್​ಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು/ಜಿಲ್ಲಾ ಬಸ್‌ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಆರ್​ಟಿಸಿ ತಿಳಿಸಿದೆ.

ಇದನ್ನೂ ಓದಿ: ಗಣೇಶ ಹಬ್ಬದ ನಿಮಿತ್ತ NWKRTCಯಿಂದ ಹೆಚ್ಚುವರಿ ವಿಶೇಷ ಬಸ್​ ಸೌಲಭ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.