ETV Bharat / state

ಮದರಸಾಗಳಲ್ಲಿ ಕನ್ನಡ ಕಡ್ಡಾಯವಾಗಿ ಕಲಿಸುವಂತೆ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ

author img

By ETV Bharat Karnataka Team

Published : Aug 29, 2023, 8:48 AM IST

ಜಮೀರ್ ಅಹಮದ್ ಖಾನ್
ಜಮೀರ್ ಅಹಮದ್ ಖಾನ್

teach Kannada compulsorily in madrasas: ಸಚಿವ ಜಮೀರ್ ಅಹಮದ್ ಖಾನ್ ಮದರಸಾಗಳಲ್ಲಿ ಮುಖ್ಯವಾಗಿ ಕನ್ನಡ ಕಲಿಸಬೇಕೆಂದು ನಿರ್ದೇಶನ ನೀಡಿದ್ದಾರೆ.

ಬೆಂಗಳೂರು: ಮದರಸಾಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಮದರಸಾಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ ಇಂಗ್ಲಿಷ್ ಸೇರಿ ಇತರ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

ರಾಜ್ಯದಲ್ಲಿ 1265 ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಮದರಸಾಗಳಿದ್ದು, ಆ ಪೈಕಿ 100 ಮದರಸಾಗಳ ಐದು ಸಾವಿರ ಮಕ್ಕಳಿಗೆ ಈ ವರ್ಷದಿಂದಲೇ ಪ್ರಾಯೋಗಿಕವಾಗಿ ಕಲಿಕೆ ಆರಂಭಿಸಿ. ಮುಂದಿನ ವರ್ಷದಿಂದ ಎಲ್ಲ ಮದರಸಾಗಳಲ್ಲಿ ಆರಂಭಿಸಲು ಪ್ರಸ್ತಾವನೆ ಸಿದ್ದಪಡಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮದರಸಾಗಳಲ್ಲಿ ಕನ್ನಡ, ಇಂಗ್ಲಿಷ್ ಸೇರಿ ಇತರ ವಿಷಯ ಕಲಿಕೆಯಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ಅವಕಾಶ ಸಿಗಲಿದೆ ಎಂದು ಹೇಳಿದರು. ಅಲ್ಪ ಸಂಖ್ಯಾತರ ನಿರ್ದೇಶನಾಲಯ ವ್ಯಾಪ್ತಿಯಡಿ ವಿದೇಶದಲ್ಲಿ ವ್ಯಾಸಂಗ ಮಾಡಲು ನೀಡುವ ಪ್ರೋತ್ಸಾಹ ಧನ ಮೊತ್ತ 20 ಲಕ್ಷ ರೂ. ನಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲು ಹಾಗೂ ಐಐಟಿ, ಎನ್​ಐಟಿ ಸೇರಿದಂತೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಲಿ ನೀಡುತ್ತಿರುವ ಎರಡು ಲಕ್ಷ ರೂ. ಪ್ರೋತ್ಸಾಹ ಧನ ಮೊತ್ತ ನಾಲ್ಕು ಲಕ್ಷ ರೂ.ಗಳಿಗೆ ಹೆಚ್ಚಿಸಲು ಇದೇ ಸಂದರ್ಭದಲ್ಲಿ ಸಚಿವರು ಸೂಚಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಮತ್ತು ಮೌಲಾನಾ ಅಜಾದ್ ಮಾದರಿ ಶಾಲೆಗಳ 9, 10 ಹಾಗೂ 12 ನೇ ತರಗತಿಯ ಒಂದು ಲಕ್ಷ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿ ಹಾಗೂ ನಿರ್ದೇಶನಾಲಯದ ಯೋಜನೆಗಳ ಕೈಪಿಡಿಯನ್ನು ಸಚಿವರು ಇದೇ ವೇಳೆ ಬಿಡುಗಡೆ ಮಾಡಿದರು.

ಕಳೆದ ಎರಡು ವರ್ಷಗಳಲ್ಲಿ ಅಲ್ಪಸಂಖ್ಯಾತ ನಿರ್ದೇಶನಾಲಯ ವತಿಯಿಂದ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದರು. ಎಷ್ಟು ಮೊತ್ತದ ಕಾಮಗಾರಿ ಕೈಗೊಳ್ಳಲಾಗಿದೆ, ಎಷ್ಟು ಮೊತ್ತ ಪಾವತಿಗೆ ಬಾಕಿ ಇದೆ, ಕಾಮಗಾರಿ ಪ್ರಮಾಣ, ಗುತ್ತಿಗೆದಾರರಿಗೆ ಪಾವತಿಸಿರುವ ಮೊತ್ತ ಕುರಿತು ಸಮಗ್ರ ವರದಿ ನೀಡುವಂತೆ ಸಚಿವರು ಸೂಚನೆ ನೀಡಿದರು.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ 9, 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ಧಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿಯಲ್ಲಿ ಪ್ರತಿ ವಿಷಯದ ಬಗ್ಗೆ ಕ್ಯೂ ಆರ್ ಕೋಡ್ ಸಹ ಮುದ್ರಿಸಿದ್ದು, ವಿದ್ಯಾರ್ಥಿಗಳಿಗೆ ಯಾವುದಾದರೂ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದರೆ ಕ್ಯೂ ಆರ್ ಕೋಡ್ ಸ್ಕಾನ್ ಮಾಡಿದರೆ ವಿಡಿಯೋ ಸಮೇತ ಮಾಹಿತಿ ಲಭ್ಯ ವಾಗಲಿದೆ.

ಇದನ್ನೂ ಓದಿ: ಕೋವಿಡ್ ಅಕ್ರಮ ತನಿಖೆಗೆ ಆಯೋಗ ರಚನೆ ಹಿಂದೆ ದುರುದ್ದೇಶವಿದೆ: ಮಾಜಿ ಸಚಿವ ಸುಧಾಕರ್ ಕಿಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.