ETV Bharat / state

BJPಯದು 'ಜನ ಬರ್ಬಾದ್ ಯಾತ್ರೆ'... ರಾಜ್ಯದ ಜನ ಸಂಕಷ್ಟದಲ್ಲಿರುವಾಗ ಇದೆಲ್ಲ ಬೇಕಿತ್ತಾ? : ಸಿದ್ದರಾಮಯ್ಯ ಪ್ರಶ್ನೆ

author img

By

Published : Nov 21, 2021, 1:19 PM IST

ರಾಜ್ಯದಲ್ಲಿ ಮಳೆಯಿಂದ 20ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ, 10 ಸಾವಿರ ಹೆಕ್ಟೇರ್​ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಮನೆ ಬಿದ್ದು ಜನ ಬೀದಿಪಾಲಾಗಿದ್ದಾರೆ. ಇವರ ನೆರವಿಗೆ ಧಾವಿಸಬೇಕಾದ ರಾಜ್ಯ ಸರ್ಕಾರ ಜನಸ್ವರಾಜ್(BJP Jana swaraj yatra) ಎಂಬ ನಾಟಕ ಮಾಡುತ್ತ ತಿರುಗಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Opposition leader Siddaramaiah) ಟೀಕಿಸಿದ್ದಾರೆ.

opposition-leader-siddaramaiah-slams-state-government
ಮಳೆ ಪರಿಹಾರ ಕ್ರಮಕ್ಕೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಅಕಾಲಿಕ ಮಳೆಯಿಂದಾಗಿ ರಾಜ್ಯದ ರೈತರು, ಕೂಲಿ ಕಾರ್ಮಿಕರು ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿರುವ ಇಂತಹ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕರು ಜನ ಸ್ವರಾಜ್ ಯಾತ್ರೆ(BJP jana swaraj yatra) ಕೈಗೊಂಡಿರುವ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah slams state government) ಕಿಡಿಕಾರಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ಮುಖ್ಯಮಂತ್ರಿಗಳಾದಿಯಾಗಿ ಸಚಿವರು, ಶಾಸಕರು ತಕ್ಷಣ ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕೆಂದು ಆಗ್ರಹಿಸಿದ್ದಾರೆ.

ಅಕಾಲಿಕ ಮಳೆಯಿಂದ ಅರ್ಧ ರಾಜ್ಯ ತತ್ತರಿಸಿಹೋಗಿದೆ. ಕೈಗೆ ಬಂದ ಬೆಳೆ, ಬಾಯಿಗೆ ಬಾರದೆ ಗದ್ದೆಯಲ್ಲಿ ಕೊಳೆಯುತ್ತಿದೆ. ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ. 'ಜನಸ್ವರಾಜ್ ಅಲ್ಲ, ಇದು ಜನ ಬರ್ಬಾದ್' ಯಾತ್ರೆ. ಮಳೆ-ನೆರೆಗೆ ಸಿಕ್ಕಿ 20ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ, 10 ಸಾವಿರ ಹೆಕ್ಟೇರ್​ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ, ಮನೆ ಬಿದ್ದು ಜನ ಬೀದಿಪಾಲಾಗಿದ್ದಾರೆ. ಇವರ ನೆರವಿಗೆ ಧಾವಿಸಬೇಕಾದ ರಾಜ್ಯ ಸರ್ಕಾರ ಜನಸ್ವರಾಜ್ ಎಂಬ ನಾಟಕ ಮಾಡುತ್ತಾ ತಿರುಗಾಡುತ್ತಿದೆ ಎಂದಿದ್ದಾರೆ.

ಹನಿಮೂನ್ ಅವಧಿ ಮುಗಿದಿದೆ:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommai) ಅವರೇ, ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ. ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ. ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ, ರಾಗಿ, ಜೋಳ, ತರಕಾರಿ, ಬಾಳೆ, ತೆಂಗು ಎಲ್ಲವೂ ನಾಶವಾಗಿದೆ. ರೈತರು ಕಣ್ಣೀರಿನಿಂದ ಕೈತೊಳೆದುಕೊಳ್ಳುತ್ತಿದ್ದಾನೆ. ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ. ಇಲ್ಲೊಂದು ಸರ್ಕಾರ ಇದೆಯೇ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗಲಿದೆ: ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ವಿಶ್ವಾಸ

ಮೊದಲು ಅಧಿಕಾರಿಗಳ ತಂಡ ಕಟ್ಟಿಕೊಂಡು ಮಳೆಪೀಡಿತ ಪ್ರದೇಶಗಳಿಗೆ ಸಚಿವರು ಹೋಗಿ ಮಳೆ ನಷ್ಟದ ಅಂದಾಜು ನಡೆಸಿ ತಾತ್ಕಾಲಿಕ ಪರಿಹಾರ ನೀಡಲು ಸೂಚನೆ ನೀಡಿ. ಗಂಜಿ ಕೇಂದ್ರಗಳನ್ನು ತೆರೆಯಲು ಹೇಳಿ. ನಷ್ಟದ ಸಮೀಕ್ಷೆ ನಡೆಸಿ ಹೆಚ್ಚಿನ ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಮಾಡಿ ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದರೂ ರೈತರ ಬಗ್ಗೆ ಮೋದಿಗೆ ಕಾಳಜಿ ಇಲ್ಲ: ಮಲ್ಲಿಕಾರ್ಜುನ್​ ಖರ್ಗೆ ಟೀಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.