ETV Bharat / state

ಪ್ರಿಯಾಂಕ್ ಖರ್ಗೆ ಆಯ್ಕೆ ಅಸಿಂಧು ಕೋರಿ ಅರ್ಜಿ: ಸಮನ್ಸ್ ಜಾರಿ ಮಾಡಿದ ಹೈಕೋರ್ಟ್

author img

By

Published : Aug 2, 2023, 9:08 PM IST

ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಆರೋಪದಲ್ಲಿ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯ ಕುರಿತು ಸಚಿವ ಪ್ರಿಯಾಂಕ್ ಖರ್ಗೆಗೆ ಹೈಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.

High Court
ಹೈಕೋರ್ಟ್

ಬೆಂಗಳೂರು: ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಆರೋಪದಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ಸಂಬಂಧ ಪ್ರಿಯಾಂಕ್ ಖರ್ಗೆಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಪ್ರಿಯಾಂಕ್ ಖರ್ಗೆಯವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕು ನಿವಾಸಿ ಅಶ್ವಥರಾಮ ರಾಠೋಡ್ ಎಂಬುವರು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ಜಿ ಉಮಾ ಅವರಿದ್ದ ಏಕಸದಸ್ಯ ನ್ಯಾಯ ಪೀಠ ಸಮನ್ಸ್ ಜಾರಿ ಮಾಡಿ, ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿದೆ.

ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ವಾದ ಮಂಡಿಸಿ, ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವ ಆರೋಪದ ಹಿನ್ನೆಲೆಯಲ್ಲಿ ಚಿತ್ತಾಪುರ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿದರು.

ಅಲ್ಲದೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿತ್ತಾಪೂರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಿಯಾಂಕ್ ಖರ್ಗೆ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಎಸ್ಸಿ ಜಾತಿ ಪ್ರಮಾಣಪತ್ರದ ಬದಲು ಗ್ರಾಮ ಪಂಚಾಯಿತಿ ಚುನಾವಣೆಗೆ ಸಲ್ಲಿಸಲಾಗುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅದೂ ಸಹ 2021 ಪ್ರಮಾಣ ಪತ್ರವಾಗಿದೆ. ಅದೇ ಅವರ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆಯೂ ಅಸಮರ್ಪಕ ದಾಖಲೆಗಳನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ತನ್ನ ಅರ್ಜಿಯಲ್ಲಿ ಕೋರಿದ್ದಾರೆ.

ಅದೇ ರೀತಿ ಕಾಂಗ್ರೆಸ್‌ನಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಪ್ರಿಯಾಂಕ್ ಖರ್ಗೆ ಮತದಾರರಿಗೆ ಆಮಿಷ ಒಡ್ಡಿದ್ದು, ಇದು ಲಂಚ ಹಾಗೂ ಭ್ರಷ್ಟಾಚಾರಕ್ಕೆ ಸಮವಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123(1) ಪ್ರಕಾರ ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ. ಗ್ಯಾರಂಟಿ ಯೋಜನೆಗಳು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದೆ. ಮತದಾರರಿಗೆ ಆಮಿಷವೊಡ್ಡುವುದು ಪ್ರಜಾಪ್ರತಿನಿಧಿ ಕಾಯ್ದೆಯ ಅನ್ವಯ ಅಪರಾಧ ಹಾಗೂ ಚುನಾವಣಾ ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು ನಗರ 16 ಮಂದಿ ಇನ್‌ಸ್ಪೆಕ್ಟರ್ ಗಳ ವರ್ಗಾವಣೆ ಆದೇಶಕ್ಕೆ ತಡೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.