ETV Bharat / state

ಗ್ರಾಮೀಣಾಭಿವೃದ್ಧಿ, ಪಂ.ರಾಜ್ ಇಲಾಖೆ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

author img

By ETV Bharat Karnataka Team

Published : Aug 24, 2023, 10:41 PM IST

ಸಿಎಂ ಸಿದ್ದರಾಮಯ್ಯ ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ 2023-24ನೇ ಬಜೆಟ್​ನಲ್ಲಿ ಘೋಷಿಸಿರುವ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಇಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ನರೇಗಾ ಯೋಜನೆಯಡಿ 5000 ಗೋಮಾಳ ಪ್ರದೇಶಗಳು, 50 ಸಾವಿರ ಎಕರೆ ಹುಲ್ಲುಗಾವಲು ಪ್ರದೇಶಗಳು, 2 ಲಕ್ಷ ಬರ ಪರಿಹಾರ ಕಾಮಗಾರಿಗಳು, 81 ಸಾವಿರ ಪ್ರವಾಹ ನಿಯಂತ್ರಣ ಕಾಮಗಾರಿಗಳು ಹಾಗೂ 4268 ಭೂ ಕುಸಿತ ತಡೆ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. 27903 ಗ್ರಾಮಗಳಲ್ಲಿ ಸ್ಮಶಾನ ಭೂಮಿಯನ್ನು ಶಾಂತಿಧಾಮಗಳನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. 5000 ಶಾಲಾ ಆವರಣಗಳನ್ನು ವಿದ್ಯಾಧಾಮಗಳನ್ನಾಗಿ ಉನ್ನತೀಕರಿಸುವುದು, 750 ಗ್ರಾಮ ಸಂತೆಗಳನ್ನು ಹಾಗೂ 27 ಸಾವಿರ ಕೊಳವೆಬಾವಿ ಪುನಶ್ಚೇತನ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ವಿವರಿಸಿದರು.

ನೀರು ಪೂರೈಕೆ ಕುರಿತು ವರದಿ ಸಲ್ಲಿಸಲು ಸೂಚನೆ: ವರುಣಾ ಕ್ಷೇತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಎಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ. ಎಷ್ಟು ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿವೆ ಎಂದು ಭೇಟಿ ನೀಡಿ, ಪರಿಶೀಲಿಸಿ ವರದಿ ನೀಡುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ವಾರಾಂತ್ಯದಲ್ಲಿ ಗ್ರಂಥಾಲಯ ತೆರೆಯಿರಿ: ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ, ಸಂವಿಧಾನ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನಾರ್ಜನೆ ಮುಂತಾದ ಸೌಲಭ್ಯಗಳನ್ನು ನೀಡಲಾಗುವ ಯೋಜನೆಯನ್ನು ಉತ್ತಮವಾಗಿ ಕಾರ್ಯಗತಗೊಳಿಸಬೇಕು. ವಾರಾಂತ್ಯದಲ್ಲಿಯೂ ತೆರೆದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

ವಿದ್ಯಾರ್ಥಿಗಳಿಗೆ, ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಈ ಯೋಜನೆಯಿಂದ ಅನುಕೂಲವಾಗುತ್ತದೆ. ಮೂರು ವರ್ಷಗಳಲ್ಲಿ ಇದನ್ನು ಜಾರಿ ಮಾಡಬೇಕು ಎಂದರು. ಆಯವ್ಯಯದಲ್ಲಿ ಹೇಳಿರುವಂತೆ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಹಾಗೂ ಆರು ವರ್ಷದ ಒಳಗಿನ ಮಕ್ಕಳ ಆರೋಗ್ಯ, ಪೌಷ್ಟಿಕತೆ ಮತ್ತು ಸುರಕ್ಷತೆಗಾಗಿ ಕೂಸಿನ ಮನೆ ಹೆಸರಿನಲ್ಲಿ ನಾಲ್ಕು ಸಾವಿರ ಕೂಸಿನ ಮನೆಗಳನ್ನು ತೆರೆಯುವ ಕೆಲಸವನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಬೇಕು ಎಂದು ಸಿಎಂ ಹೇಳಿದರು.

ಮುಖ್ಯಮಂತ್ರಿಗಳ ಫೆಲೋಶಿಪ್​ಗಾಗಿ ಪ್ರತಿ ತಾಲೂಕಿನ ಒಬ್ಬ ನುರಿತ ಯುವ ಪದವೀಧರರನ್ನು 24 ತಿಂಗಳ ಅವಧಿಗೆ ಆಯ್ಕೆ ಮಾಡಲಾಗುವುದು. ಇದಕ್ಕೆ 10 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣಗಳನ್ನು ತಲಾ 25 ಲಕ್ಷಗಳ ವೆಚ್ಚದಲ್ಲಿ ನಿರ್ಮಾಣ ಕಾರ್ಯವನ್ನು ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯಗತ ಮಾಡಲು ಮುಖ್ಯಮಂತ್ರಿಗಳು ಸೂಚಿಸಿದರು. ಇದೇ ವೇಳೆ, ಜಲ್ ಜೀವನ್ ಮಿಷನ್ ಯೋಜನೆಯಡಿ 800 ಗ್ರಾಮಗಳಿಗೆ ಕಾಮಗಾರಿ ಪೂರ್ಣಗೊಂಡಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು.

ಗ್ರಾಮೀಣ ಪ್ರದೇಶಗಳಲ್ಲಿ ಒಣ ತ್ಯಾಜ್ಯ ವಿಲೇವಾರಿಯಲ್ಲಿ ನಿರಂತರತೆ ಕಾಪಾಡಲು ಹಾಗೂ ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು 27 ಜಿಲ್ಲೆಗಳಲ್ಲಿ ತಲಾ ಒಂದು ರಿಕವರಿ ಫೆಸಿಲಿಟಿಯನ್ನು ತಲಾ 2 ಕೋಟಿ ವೆಚ್ಚದಲ್ಲಿ ನಿರ್ಮಾಣ. 22 ಕೋಟಿ ರೂ.ಗಳನ್ನು ಪ್ರಸಕ್ತ ಸಾಲಿನಲ್ಲಿ ಒದಗಿಸಲಾಗುವುದು ಎಂದು ಸಚಿವರ ಖರ್ಗೆ ತಿಳಿಸಿದರು.

ಇದನ್ನೂ ಓದಿ: ಸಾಹಿತಿಗಳಿಗೆ ಜೀವ ಬೆದರಿಕೆ ಹಿನ್ನೆಲೆ: ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.