ETV Bharat / state

ಕನ್ನಡ ಸಾಹಿತ್ಯ ಪರಿಷತ್​​ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಪ್ರಕಟ

author img

By

Published : Jul 29, 2023, 10:44 PM IST

ಕನ್ನಡ ಸಾಹಿತ್ಯ ಪರಿಷತ್​ ವತಿಯಿಂದ ನೀಡಲಾಗುವ ಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

siddalingaiah-literary-endowment-award-announced-by-kannada-sahitya-parishad
ಕನ್ನಡ ಸಾಹಿತ್ಯ ಪರಿಷತ್​​ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಪ್ರಕಟ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್​ 2018, 2019, 2020, 2021, 2022 ಹಾಗೂ 2023ನೇ ಸಾಲಿನ ಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ ಸಾಹಿತ್ಯ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಕಳೆದ 6 ವರ್ಷಗಳಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡದಿರುವುದರಿಂದ ಈ ಬಾರಿ 6 ಮಂದಿ ಸಾಧಕರಿಗೆ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2018ನೇ ಸಾಲಿನ ʻಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿʼ ಪ್ರಶಸ್ತಿಗಾಗಿ ದಲಿತ ಸಾಹಿತ್ಯ ಕ್ಷೇತ್ರದಲ್ಲಿ ಅಗಣಿತ ಸಾಧನೆ ಮಾಡಿರುವ ಕೋಲಾರದ ಕೋಟಿಗಾನಹಳ್ಳಿ ರಾಮಯ್ಯ, 2019ನೇ ಸಾಲಿನ ಪ್ರಶಸ್ತಿಗೆ ಕಲಬುರಗಿಯ ಡಾ. ಎಚ್.ಟಿ. ಪೋತೆ, 2020ನೇ ಸಾಲಿನ ಪ್ರಶಸ್ತಿಗಾಗಿ ವಿಜಯಪುರದ ಇಂದುಮತಿ ಲಮಾಣಿ, 2021ನೇ ಸಾಲಿನ ಪ್ರಶಸ್ತಿಗಾಗಿ ಬೆಂಗಳೂರಿನ ಡಾ. ಕಾ.ವೆಂ. ಶ್ರೀನಿವಾಸಮೂರ್ತಿ, 2022ನೇ ಸಾಲಿನ ಪ್ರಶಸ್ತಿಗಾಗಿ ಗದಗದ ಡಾ. ಅರ್ಜುನ ಗೊಳಸಂಗಿ ಹಾಗೂ 2023ನೇ ಸಾಲಿನ ಪ್ರಶಸ್ತಿಯನ್ನು ಹಾಸನದ ನಾಗರಾಜ ಹೆತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಹೇಶ ಜೋಶಿ ಮಾಹಿತಿ ನೀಡಿದ್ದಾರೆ.

ಶ್ರವಣಬೆಳಗೊಳದಲ್ಲಿ ನಡೆದ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿ ನೆನಪಿಗಾಗಿ ಆ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಸಿದ್ದಲಿಂಗಯ್ಯ ಅವರ ಹೆಸರಿನಲ್ಲಿ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ ನೀಡಲು ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ನಿಧಿಯನ್ನು ಸ್ಥಾಪಿಸಿದೆ. ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನು ನೀಡಬೇಕು ಎನ್ನುವುದು ದತ್ತಿಯ ಮೂಲ ಆಶಯವಾಗಿದೆ. ಪ್ರಸ್ತುತ ಪ್ರಶಸ್ತಿಗೆ ಆಯ್ಕೆಯಾಗಿರುವ ಎಲ್ಲ ಸಾಹಿತ್ಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸಿ ಅವರ ಸಾಹಿತ್ಯ ಸೇವೆ ನಿರಂತರವಾಗಿರಲಿ ಎಂದು ಆಶಿಸುತ್ತದೆ. ಕನ್ನಡ ನಾಡಿನಲ್ಲಿ ದಲಿತ ಸಾಹಿತ್ಯ ಕ್ಷೇತ್ರಗಳಲ್ಲಿ ಅಪರಿಮಿತ ಸಾಧನೆ ಮಾಡಿರುವ ಗಣ್ಯರನ್ನು ಸೂಕ್ಷ್ಮವಾಗಿ ಗುರುತಿಸಿ ಪರಿಷತ್ತು ಸ್ಥಾಪಿಸಿರುವ ಈ ದತ್ತಿ ಆಶಯಕ್ಕೆ ಯಾವುದೇ ಚ್ಯುತಿಯಾಗದ ರೀತಿಯಲ್ಲಿ ಆಯ್ಕೆ ಸಮಿತಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೊರೊನಾ ಸೇರಿದಂತೆ ಇತರ ಕಾರಣಗಳ ಹಿನ್ನೆಲೆಯಲ್ಲಿ ಕಳೆದ 6 ವರ್ಷಗಳಿಂದ ಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಪ್ರಶಸ್ತಿ ಪ್ರಕಟಣೆ ಬಾಕಿ ಇತ್ತು. ಪ್ರಸ್ತುತ ನಾಡೋಜ ಡಾ. ಮಹೇಶ ಜೋಶಿ ಅಧ್ಯಕ್ಷರ ಅವಧಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ವರ್ಷಗಳ ದತ್ತಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಪ್ರಶಸ್ತಿಯು 10,000 ರೂ. ನಗದು, ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನೂ ಒಳಗೊಂಡಿರುತ್ತದೆ. ಇದುವರೆಗೆ ಇಬ್ಬರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ರಮಾಕುಮಾರಿ, ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು, ನೇ.ಭ. ರಾಮಲಿಂಗ ಶೆಟ್ಟಿ ಹಾಗೂ ಗೌರವ ಕೋಶಾಧ್ಯಕ್ಷ ಡಾ. ಬಿ.ಎಂ. ಪಟೇಲ್ ಪಾಂಡು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.