ETV Bharat / state

ಕೋಲಾರದಿಂದ ಸ್ಪರ್ಧಿಸಲು ಸಿದ್ದರಾಮಯ್ಯಗೆ ಟಿಕೆಟ್ ನಿರಾಕರಣೆ?

author img

By

Published : Apr 14, 2023, 3:29 PM IST

Updated : Apr 14, 2023, 3:50 PM IST

Former CM Siddaramaiah
ಮಾಜಿ ಸಿಎಂ ಸಿದ್ದರಾಮಯ್ಯ

ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದರಿಂದ ಮತದಾರರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಪಕ್ಷದ ಗೆಲುವಿನ ಮೇಲೂ ವ್ಯತಿರಿಕ್ತ ಪರಿಣಾಮ ಉಂಟು ಮಾಡಲಿದೆ ಎಂದು ಸಿದ್ದರಾಮಯ್ಯಗೆ ಹೈಕಮಾಂಡ್ ಸಲಹೆ ನೀಡಿದೆ ಎನ್ನಲಾಗುತ್ತಿದೆ.

ಬೆಂಗಳೂರು: ವರುಣ ವಿಧಾನಸಭಾ ಕ್ಷೇತ್ರದಿಂದ ಈಗಾಗಲೇ ಟಿಕೆಟ್ ಪಡೆದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋಲಾರ ಕ್ಷೇತ್ರದಿಂದಲೂ ಸ್ಪರ್ಧಿಸಲು ಟಿಕೆಟ್ ನೀಡದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಸಿದ್ದರಾಮಯ್ಯ ಅವರು ವರುಣ ಮತ್ತು ಕೋಲಾರ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಲು ಅವಕಾಶ ನೀಡಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು. ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಿರುವ ಹೈಕಮಾಂಡ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡದಿರುವ ತೀರ್ಮಾನಕ್ಕೆ ಬಂದಿದೆ ಎನ್ನಲಾಗುತ್ತಿದೆ.

ವರುಣ ಅಥವಾ ಕೋಲಾರ ಯಾವುದಾದರೂ ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದು, ವರುಣ ಉಳಿಸಿಕೊಂಡು ಕೋಲಾರ ಕ್ಷೇತ್ರದ ಸ್ಪರ್ಧೆಗೆ ಪಕ್ಷದ ಮೇಲೆ ಒತ್ತಡ ಹಾಕದಿರುವಂತೆ ಹೈಕಮಾಂಡ್ ಸಲಹೆ ನೀಡಿದೆ. ಕೋಲಾರದಲ್ಲಿ ಸಿದ್ದರಾಮಯ್ಯಗೆ ಟಿಕೆಟ್ ನೀಡುವುದನ್ನೂ ನಿರಾಕರಿಸಿದೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ಈಟಿವಿ ಭಾರತಕ್ಕೆ ಖಚಿತಪಡಿಸಿವೆ.

ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗಿ ಸಭೆ ನಡೆಸಿ ಕೋಲಾರದಿಂದ ಸ್ಪರ್ಧೆಗೆ ಟಿಕೆಟ್ ನೀಡಲು ಸಾಧ್ಯವಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸರಗೊಂಡಿರುವ ಸಿದ್ದರಾಮಯ್ಯರನ್ನು ಮನವೊಲಿಸಿ, ಸಮಾಧಾನಪಡಿಸುವ ಪ್ರಯತ್ನದಲ್ಲಿ ರಾಹುಲ್ ಗಾಂಧಿ ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ.

2 ಕ್ಷೇತ್ರದಲ್ಲಿ ಸ್ಪರ್ಧೆಯಿಂದ ತಪ್ಪು ಸಂದೇಶ: ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದು ಮತದಾರರಿಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ. ಇದು ಪಕ್ಷದ ಗೆಲುವಿನ ಮೇಲೆಯೂ ವ್ಯತಿರಿಕ್ತ ಪರಿಣಾಮ ಉಂಟು ಮಾಡಲಿದೆ ಎಂದು ತಿಳಿಸಿ, ಮನವೊಲಿಸಲು ಹೈಕಮಾಂಡ್ ಯತ್ನಿಸಿದೆ. ಕೋಲಾರದಲ್ಲಿ ಸ್ಪರ್ಧೆ ಬೇಡವೆಂದು ಹೇಳುತ್ತಿರುವುದಕ್ಕೆ ಪ್ರತಿಯಾಗಿ ವಾದಿಸಿರುವ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಅವಕಾಶ ದೊರೆತರೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಹೆಚ್ಚು ಸಹಾಯಕವಾಗಲಿದೆ ಎಂದು ಹೇಳಿದ್ದಾರೆ. ಕೋಲಾರದಲ್ಲಿ ಸ್ಪರ್ಧೆ ಮಾಡದೇ ಪ್ರಚಾರದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿ ಗೆಲ್ಲಿಸಿಕೊಂಡು ಬರಲು ಶ್ರಮವಹಿಸುವಂತೆ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ತಿಳಿಸಿದೆ ಎಂದು ಮಾಹಿತಿ ಸಿಕ್ಕಿದೆ.

ಕೊನೆ ಕ್ಷಣದ ಕಸರತ್ತು...: ಕೋಲಾರದಲ್ಲಿ ಸ್ಪರ್ಧೆ ಮಾಡುವ ಸಂಬಂಧ ಹೈಕಮಾಂಡ್ ತನ್ನ ನಿಲುವನ್ನು ಸ್ಪಷ್ಟಪಡಿಸದಿದ್ದರೂ ಸಹ ಸಿದ್ದರಾಮಯ್ಯ ಮಾತ್ರ ತಮ್ಮ ಪ್ರಯತ್ನವನ್ನು ನಿಲ್ಲಿಸಿಲ್ಲ. ಕೊನೆಯ ಕ್ಷಣದವರೆಗೂ ಕೋಲಾರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಹೈಕಮಾಂಡ್ ಮನವೊಲಿಸಿ, ಟಿಕೆಟ್ ಗಿಟ್ಟಿಸಿಕೊಳ್ಳುವ ಸರ್ವ ರೀತಿಯ ಪ್ರಯತ್ನವನ್ನು ಮುಂದುವರಿಸಿದ್ದಾರೆಂದು ಹೇಳಲಾಗಿದೆ. ಕಾಂಗ್ರೆಸ್ ಸದ್ಯದಲ್ಲೇ ಪ್ರಕಟಿಸುವ ಮೂರನೇ ಪಟ್ಟಿಯಲ್ಲಿ ಕೋಲಾರ ಕ್ಷೇತ್ರಕ್ಕೆ ಬೇರೆ ಅಭ್ಯರ್ಥಿ ಹೆಸರು ಪ್ರಕಟಿಸಿ ಸಿದ್ದರಾಮಯ್ಯ ಕ್ಷೇತ್ರ ಆಯ್ಕೆ ಗೊಂದಲಕ್ಕೆ ಇತಿಶ್ರೀ ಹಾಡುವ ಸಾಧ್ಯತೆಗಳಿವೆ.

ಇದನ್ನೂಓದಿ: ಜಗದೀಶ್ ಶೆಟ್ಟರ್​ಗೆ ಟಿಕೆಟ್ ಸಿಗುತ್ತೆ ಅನ್ನೋ ವಿಶ್ವಾಸ ಇದೆ: ಪ್ರಹ್ಲಾದ್ ಜೋಶಿ

Last Updated :Apr 14, 2023, 3:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.