ETV Bharat / state

ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಪುನೀತ್ ಹೆಸರಿಡುವಂತೆ ಬಿಬಿಎಂಪಿಗೆ ರಾಜ್ಯ ಸರ್ಕಾರದ ಸೂಚನೆ

author img

By ETV Bharat Karnataka Team

Published : Nov 17, 2023, 4:18 PM IST

Puneeth name to Drinking water units: ಮಾಹಿತಿ ಹಕ್ಕು ಅಧ್ಯಯನ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಎಸ್. ಅಮರೇಶ್ ಅವರು ಪುನೀತ್​ ರಾಜ್​ ಕುಮಾರ್​ ಹೆಸರಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.

Puneeth Rajkumar and S. Amaresh
ಪುನೀತ್​ ರಾಜ್​ಕುಮಾರ್​ ಹಾಗೂ ಎಸ್. ಅಮರೇಶ್

ಬೆಂಗಳೂರು: ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ನಟ, ಕರ್ನಾಟಕ ರತ್ನ ಡಾ. ಪುನೀತ್ ರಾಜ್ ​ಕುಮಾರ್ ಅವರ ಹೆಸರು ನಾಮಕರಣ ಮಾಡುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

Government order letter
ಸರ್ಕಾರದ ಆದೇಶ ಪತ್ರ

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾವಿರಾರು ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ನಾಡು ಕಂಡ ಶೇಷ್ಠ ಕಲಾವಿದ, ಹೃದಯ ಶ್ರೀಮಂತ, ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಅವರ ಸವಿನೆನಪಿನಲ್ಲಿ ಪುನೀತ್ ರಾಜ್​ ಕುಮಾರ್ ಶುದ್ಧ ಕುಡಿಯುವ ನೀರಿನ ಘಟಕ ಎಂದು ಈ ಯೋಜನೆಗೆ ನಾಮಕರಣ ಮಾಡಬೇಕು ಎಂದು ಮಾಹಿತಿ ಹಕ್ಕು ಅಧ್ಯಯನ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಎಸ್. ಅಮರೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. ಈ ಸಂಬಂಧ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಪತ್ರವೊಂದನ್ನು ಉಲ್ಲೇಖಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ಮ್ಯಾನೇಜಿಂಗ್ ಟ್ರಸ್ಟಿ ಎಸ್. ಅಮರೇಶ್, ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಅವರು ಬಾಲ್ಯದಿಂದಲೇ ಕಲಾ ಸೇವೆ ಮಾಡುತ್ತಾ ಬಂದವರು. ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಚಿತ್ರಗಳಲ್ಲಿ ಅಭಿನಯಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದವರು. ಭಾರತದ ಚಲನಚಿತ್ರರಂಗದ ಅದ್ಭುತ ಕಲಾಪ್ರತಿಭೆ ಎಂಬ ಖ್ಯಾತಿ ಪಡೆದಿದ್ದಾರೆ ಎಂದು ಹೇಳಿದರು.

ಸಾವಿರಾರು ಮಕ್ಕಳಿಗೆ ಉಚಿತ ವಸತಿ ಹಾಗೂ ಶಿಕ್ಷಣ ಸೇರಿ ಹಲವಾರು ಸಾಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಡಾ. ಪುನೀತ್ ರಾಜ್ ಕುಮಾರ್ ಅವರು ಜೀವನದಲ್ಲಿ ಪಾಲಿಸಿದ ಆದರ್ಶಗಳು ನಮಗೆ ದಾರಿದೀಪವಾಗಿವೆ. ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಎಂಬ ಉದ್ದೇಶದಿಂದ ಶುದ್ಧ ಕುಡಿಯುವ ನೀರಿನ ಘಟಕದ ಯೋಜನೆಗೆ ಮತ್ತು ಘಟಕಗಳ ಮೇಲೆ ಡಾ. ಪುನೀತ್ ರಾಜ್ ಕುಮಾರ್ ಶುದ್ಧ ಕುಡಿಯುವ ನೀರಿನ ಘಟಕ ಎಂದು ನಾಮಕರಣ ಮಾಡಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರವೂ ಅಧಿಕೃತ ಆದೇಶ ಹೊರಡಿಸಿದ್ದು, ಬಿಬಿಎಂಪಿ ಆಯುಕ್ತರೂ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಡಾ.ಪುನೀತ್​ ರಾಜ್​ಕುಮಾರ್​ ಹೆಸರಿನಲ್ಲಿ ಮುಂದಿನ ತಿಂಗಳಿನಿಂದ 'ಹೃದಯ ಜ್ಯೋತಿ' ಯೋಜನೆ ಜಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.