ETV Bharat / state

ಚಿತ್ರದುರ್ಗದ ಮುರುಘಾ ಮಠಕ್ಕೆ ಜಿಲ್ಲಾ ಪ್ರದಾನ ನ್ಯಾಯಾಧೀಶರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿದ ಹೈಕೋರ್ಟ್

author img

By

Published : Jul 3, 2023, 5:23 PM IST

ಹೈಕೋರ್ಟ್
ಹೈಕೋರ್ಟ್

ಮುರುಘರಾಜೇಂದ್ರ ಬೃಹನ್ಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ಚಿತ್ರದುರ್ಗದ ಜಿಲ್ಲಾ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶರು ಮಂಗಳವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಲು ನ್ಯಾಯಪೀಠ ಸೂಚನೆ ನೀಡಿದೆ.

ಬೆಂಗಳೂರು : ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠಕ್ಕೆ ಚಿತ್ರದುರ್ಗದ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ್ದ ಸರ್ಕಾರದ ಕ್ರಮವನ್ನು ರದ್ದು ಪಡಿಸಿದ್ದ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಎಚ್ ಏಕನಾಥ್ ಎಂಬುವರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠ ಆದೇಶಿಸಿದೆ. ಅಲ್ಲದೆ, ಮಠದ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶರು ಮಂಗಳವಾರ (ನಾಳೆ) ಬೆಳಗ್ಗೆ ಅಧಿಕಾರ ಸ್ವೀಕರಿಸಲು ನ್ಯಾಯಪೀಠ ಸೂಚನೆ ನೀಡಿದೆ.

ಅಲ್ಲದೆ, ತಾತ್ಕಾಲಿಕವಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿಗಳು (ಜಿಲ್ಲಾ ನ್ಯಾಯಾಧೀಶರು) ಮುರುಘಾ ಮಠ ಮತ್ತು ಮಠದ ಅಧೀನದ ಶಿಕ್ಷಣ ಸಂಸ್ಥೆಗಳ ದಿನ ನಿತ್ಯದ ವ್ಯವಹಾರಗಳನ್ನು ನೋಡಿಕೊಳ್ಳಬೇಕು. ಆದರೆ, ಯಾವುದೇ ನೀತಿ ನಿರೂಪಣೆಗಳನ್ನು ಮಾಡಲು ಮುಂದಾಗಬಾರದು. ಇದಕ್ಕೆ ಜಿಲ್ಲಾಧಿಕಾರಿಗಳು ಅಗತ್ಯವಿರುವ ಸಹಕಾರವನ್ನು ನೀಡಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿ ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ ಏನು?: ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಅಂದಿನ ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ಪಿ. ಎಸ್ ವಸ್ತ್ರದ ಅವರನ್ನು 2022 ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ವಸ್ತ್ರದ 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು.

ರಾಜ್ಯ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು, ಹೈಕೋರ್ಟ್ ಮೆಟ್ಟಿಲೇರಿದ್ದರು. ‘ಸಂವಿಧಾನದ 162 ನೇ ವಿಧಿಯ ಅನುಸಾರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಸಂವಿಧಾನಬಾಹಿರ. ಅಂತೆಯೇ, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ 1988 ರ ಕಲಂ 8 (2)ಅಡಿ ಶರಣರು ತಮ್ಮ ಅಧಿಕಾರ ಚಲಾಯಿಸಲು ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧ ವಿಧಿಸಿರುವುದು ಕಾನೂನು ಬಾಹಿರ. ಆದ್ದರಿಂದ, ಈ ಆದೇಶಗಳನ್ನು ವಜಾಗೊಳಿಸಬೇಕು ಎಂದು ಪ್ರತ್ಯೇಕವಾಗಿ ಕೋರಿದ್ದರು.

ಈ ಎರಡೂ ಅರ್ಜಿಗಳನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ್ದ ಕ್ರಮವನ್ನು ರದ್ದುಪಡಿಸಿತ್ತು. ಅಂತೆಯೇ, ಚಿತ್ರದುರ್ಗ ಜಿಲ್ಲಾ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶವನ್ನೂ ವಜಾಗೊಳಿಸಿ, ’ಮಠ ಮಾನ್ಯಗಳಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು‘ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಕಾಯ್ದೆ 1997ಕ್ಕೆ ರಾಜ್ಯ ಸರ್ಕಾರ 2011ರಲ್ಲೇ ತಿದ್ದುಪಡಿ ತಂದಿದೆ. ಈ ತಿದ್ದುಪಡಿಯ ಅನುಸಾರ ಯಾವುದೇ ಮಠ, ಮಠಕ್ಕೆ ಹೊಂದಿಕೊಂಡ ದೇಗುಲಗಳನ್ನು ಶಾಸನದಿಂದ ಹೊರಗಿಡಲಾಗಿದೆ. ಈ ಕುರಿತ ತಿದ್ದುಪಡಿಯನ್ನು ಸುಪ್ರೀಂ ಕೋರ್ಟಿಗೂ ಸಲ್ಲಿಸಲಾಗಿದೆ‘ ಎಂಬ ಅಂಶವನ್ನು ತೀರ್ಪಿನಲ್ಲಿ ಕಾಣಿಸಿದ್ದ ನ್ಯಾಯಪೀಠ, ’ಸರ್ಕಾರವು ಮಠದ ವಿಷಯಗಳಲ್ಲಿ ಮಧ್ಯಪ್ರವೇಶಿಸಲು ಬರುವುದಿಲ್ಲ. ಶಾಸನಯುಕ್ತ ಅಧಿಕಾರ ಇದ್ದರೆ ಮಾತ್ರವೇ ಮಧ್ಯಪ್ರವೇಶ ಮಾಡಬಹುದು ಎಂದು ಹೇಳಲಾಗಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಲು ಮುಂದಾಗಿರಲಿಲ್ಲ. ಆದರೆ, ಏಕನಾಥ್ ಅವರು ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದು, ಮೇಲ್ಮನವಿ ಅಗತ್ಯವಿಲ್ಲ: ಅಡ್ವೋಕೇಟ್ ಜನರಲ್ ಕಚೇರಿ ಅಭಿಪ್ರಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.