ETV Bharat / state

ಮುಂದಿನ ವಾರದೊಳಗೆ ರೈತರಿಗೆ ಮೊದಲ ಹಂತದ ಬೆಳೆ ನಷ್ಟ ಪರಿಹಾರ ವಿತರಿಸುವಂತೆ ಸಿಎಂ ಸೂಚನೆ

author img

By ETV Bharat Karnataka Team

Published : Dec 6, 2023, 10:23 PM IST

Chief Minister Siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ಸಲಹೆ, ಸೂಚನೆ ನೀಡಿದರು.

ಬೆಳಗಾವಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಬೆಳೆ ನಾಶದಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂಪಾಯಿವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಪರಿಸ್ಥಿತಿ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತಷ್ಟು ಯುದ್ಧೋಪಾದಿಯಲ್ಲಿ ಕೆಲಸ ಮುಂದುವರಿಸಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಕುರಿತಾದ ಸಮಗ್ರ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಂಕಿ-ಅಂಶಗಳ ಸಹಿತ ಒದಗಿಸಬೇಕು ಎಂದರು.

ಮೊದಲ ಹಂತದಲ್ಲಿ 2,000 ರೂ ಪರಿಹಾರ: ರೈತರಿಗೆ ಮೊದಲ ಹಂತದಲ್ಲಿ 2,000 ರೂ ವರೆಗೆ ಪರಿಹಾರ ಘೋಷಿಸಲಾಗಿದೆ. ಈ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ, ಡಿ.ಬಿ.ಟಿ. ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರ ಸಮರ್ಪಕವಾಗಿ ನಿರ್ವಹಿಸಲು ನಿಮ್ಮ ಪಾತ್ರ ಬಹುಮುಖ್ಯ. ನೀವು ಸರ್ಕಾರದ ಕಣ್ಣು, ಕಿವಿ ಇದ್ದ ಹಾಗೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ರಾಜಕಾರಣಿಗಳು, ಅಧಿಕಾರಿಗಳು-ನಾವೆಲ್ಲರೂ ಜನರಿಗೋಸ್ಕರ ಇರುವುದು. ಜನರ ಕೆಲಸವನ್ನು ವೇಗವಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಆಯವ್ಯಯ ಭಾಷಣದಲ್ಲಿ 143 ಘೋಷಣೆಗಳನ್ನು ಮಾಡಲಾಗಿದೆ. ಅದರಲ್ಲಿ ಈಗಾಗಲೇ 83 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಿ, ಕಾರ್ಯಗತಗೊಳಿಸಲಾಗಿದೆ. ಉಳಿದ ಘೋಷಣೆಗಳನ್ನು ಶೀಘ್ರವೇ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಇನ್ನೂ ಸೌಲಭ್ಯ ದೊರಕದ ಅರ್ಹ ಕೆಲವು ಫಲಾನುಭವಿಗಳಿಗೆ ಸೌಲಭ್ಯ ದೊರಕಲು ಇರುವ ತಾಂತ್ರಿಕ ಅಡಚಣೆಗಳನ್ನು ಶೀಘ್ರ ನಿವಾರಿಸಬೇಕು ಎಂದು ತಿಳಿಸಿದ ಅವರು, ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಸಚಿವರಿಗೆ ಸೂಕ್ತ ಸಲಹೆ ನೀಡಬೇಕು ಎಂದು ಸೂಚನೆ ನೀಡಿದರು.

ಇಲಾಖೆಗಳಲ್ಲಿ ಕಡತಗಳ ವಿಲೇವಾರಿ ಸಮರ್ಪಕ ನಡೆಯಬೇಕು. ಸಚಿವ ಸಂಪುಟ ಸಭೆಯಲ್ಲಿ ಬಾಕಿ ಕಡತಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಗುವುದು. ವಿವಿಧ ಇಲಾಖೆಗಳಲ್ಲಿ ನ್ಯಾಯಾಲಯ ಉಲ್ಲಂಘನೆಯ ಪ್ರಕರಣಗಳನ್ನು ಅಡ್ವೊಕೇಟ್‌ ಜನರಲ್‌ ಜೊತೆ ಚರ್ಚಿಸಿ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳು ಜನ ಸಂಪರ್ಕ ಸಭೆ ನಡೆಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು. ನಿಮ್ಮ ಕಾರ್ಯವೈಖರಿಗೆ ಅನುಗುಣವಾಗಿ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದರು.

ಅನಗತ್ಯ ವೆಚ್ಚಗಳಿಗೆ ಕಡಿವಾಣ: ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ, ಕಡತಗಳಲ್ಲಿ ಕನ್ನಡದಲ್ಲಿಯೇ ಟಿಪ್ಪಣಿ ಬರೆಯಬೇಕು. ಕನ್ನಡ ನಮ್ಮ ರಾಜ್ಯ ಭಾಷೆ, ಸಾರ್ವಭೌಮ ಭಾಷೆ, ಆದರೆ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವ ಕುರಿತು ಸಲಹೆ ನೀಡಿದ ಮುಖ್ಯಮಂತ್ರಿಗಳು, ಟೆಂಡರ್‌ ಅಂದಾಜು ಸಿದ್ಧಪಡಿಸುವಾಗ ಎಲ್ಲ ಅಂಶಗಳನ್ನೂ ಒಳಗೊಂಡಂತೆ ಸಮಗ್ರವಾಗಿ ಅಂದಾಜು ಸಿದ್ಧಪಡಿಸಬೇಕು. ಪರಿಷ್ಕೃತ ಅಂದಾಜುಗಳನ್ನು ಸಲ್ಲಿಸುವುದರಿಂದ ಯೋಜನೆಯ ವೆಚ್ಚ ಗಣನೀಯವಾಗಿ ಹೆಚ್ಚುತ್ತಿರುವುದಲ್ಲದೆ ಅನುಷ್ಠಾನವೂ ವಿಳಂಬವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯು ಹಿರಿಯ ಅಧಿಕಾರಿಗಳ ಸಮಿತಿ ರಚಿಸಿದ್ದು, ಈ ಸಮಿತಿಯು ಮಾರ್ಗಸೂಚಿಗಳನ್ನು ರೂಪಿಸುತ್ತಿದೆ. ಇದು ಅಂತಿಮ ಹಂತದಲ್ಲಿದ್ದು, ಶೀಘ್ರವೇ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಈ ಸಂದರ್ಭದಲ್ಲಿ ಆರ್ಥಿಕ ಇಲಾಖೆ ಹಾಗೂ ಮುಖ್ಯಮಂತ್ರಿಯವರ ಅಪರ ಕಾರ್ಯದರ್ಶಿ ಎಲ್.ಕೆ.ಅತೀಕ್‌ ತಿಳಿಸಿದರು.

ತೆರಿಗೆ ಸಂಗ್ರಹ ಇಲಾಖೆಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ತೆರಿಗೆಯೇತರ ರಾಜಸ್ವ ಸಂಗ್ರಹ ಹೆಚ್ಚಳ ಮಾಡುವ ಬಗ್ಗೆ ಆಡಳಿತ ಸುಧಾರಣಾ ಆಯೋಗ-2 ಮಾಡಿರುವ ಶಿಫಾರಸುಗಳನ್ನು ಎಲ್ಲ ಕಾರ್ಯದರ್ಶಿಗಳು ಅಧ್ಯಯನ ಮಾಡುವಂತೆ ಸಲಹೆ ನೀಡಿದರು.

ಇದನ್ನೂಓದಿ: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗೆ ಹೊಸ ರೂಪ; ನೂತನ ಹೆಲ್ತ್ ಕಾರ್ಡ್‌ಗೆ ಸಿಎಂ ಚಾಲನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.