ETV Bharat / state

ಮಧ್ಯಮಾವಧಿ, ದೀರ್ಘಾವಧಿ ಸಾಲದ ಅಸಲು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ: ಸಿಎಂ ಸಿದ್ದರಾಮಯ್ಯ

author img

By ETV Bharat Karnataka Team

Published : Dec 15, 2023, 5:30 PM IST

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಹೈಪವರ್ ಕಮಿಟಿ ರಚನೆ ಮಾಡಲಾಗುವುದು. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಳಗಾವಿ/ಬೆಂಗಳೂರು: ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆ ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ. ಬಿಜೆಪಿಯವರು 2018ರ ತಮ್ಮ ಪ್ರಣಾಳಿಕೆಯಲ್ಲಿ "ನಮ್ಮ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು" ಎಂದು ಹೇಳಿದ್ದರು. ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದ್ದಾರಾ? ನಯಾಪೈಸೆ ಬಿಡುಗಡೆ ಮಾಡಿದ್ದಾರಾ ಹೇಳಿ ಎಂದು ಅವರು ಪ್ರಶ್ನಿಸಿದರು.

2019ರ ಆಗಸ್ಟ್​ನಲ್ಲಿ ಅತಿವೃಷ್ಟಿಯ ಕಾರಣಕ್ಕೆ ಬೆಳೆ ಹಾನಿಯಾಗಿತ್ತು. ಆಗ ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಏನು ಹೇಳಿದರು ಗೊತ್ತಾ? "ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ" ಎಂದಿದ್ದರು. ಯಡಿಯೂರಪ್ಪನವರು ಈ ರೀತಿ ಹೇಳಿದ್ದು ಇದೇ ಮೊದಲಲ್ಲ. 2009ರಲ್ಲಿ ವಿಧಾನ ಪರಿಷತ್ತಿನಲ್ಲಿ ನಮ್ಮ ವಿರೋಧ ಪಕ್ಷದ ನಾಯಕರಾಗಿದ್ದ ವಿ.ಎಸ್.ಉಗ್ರಪ್ಪ ಮುಂತಾದ ನಮ್ಮ ಪಕ್ಷದವರು ಸಾಲ ಮನ್ನಾ ಮಾಡಿ ಎಂದು ಆಗ್ರಹಿಸಿದ್ದಾಗಲೂ ಯಡಿಯೂರಪ್ಪನವರು ಇದೇ ಮಾತುಗಳನ್ನಾಡಿದ್ದರು.

ಯಡಿಯೂರಪ್ಪನವರು ಹೇಳಿದ್ದ ಮಾತುಗಳಿವು, ಮತಕ್ಕಾಗಿ ಇತರ ಪಕ್ಷದವರು ಹೇಳಿದಂತೆ ನಾನು ಕೂಡ ರೈತರ ಕೃಷಿ ಸಾಲ ಮನ್ನಾ ಮಾಡುತ್ತೇನೆಂದು ಚುನಾವಣೆಯ ಸಂದರ್ಭದಲ್ಲಿ ಆಶ್ವಾಸನೆ ನೀಡಿದ್ದೆ. ಆದರೆ ಇದು ಸಾಧ್ಯವಿಲ್ಲ ಎಂಬುದು ಈಗ ಅರ್ಥವಾಗುತ್ತಿದೆ. ಸಾಲ ಮನ್ನಾ ಮಾಡಲು ಹಣ ಎಲ್ಲಿದೆ? ಎಂದು ವಿರೋಧ ಪಕ್ಷದ ಸದಸ್ಯರನ್ನೆ ಪ್ರಶ್ನಿಸಿದ್ದರು. ರೈತರ ಸಾಲ ಮನ್ನಾ ಮಾಡಲು ನಾನು ಸಿದ್ಧನಿದ್ದೇನೆ. ಆದರೆ ಬೊಕ್ಕಸದಲ್ಲಿ ಹಣದ ಕೊರತೆ ಇದೆ. ಆದುದರಿಂದ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಜೊತೆಗೆ, ವಿಧಾನಸೌಧದಲ್ಲಿ ಕೂತು ನಾನು ನೋಟ್ ಪ್ರಿಂಟ್ ಮಾಡುತ್ತಿಲ್ಲ ಎಂದು ಉತ್ತರಿಸಿದ್ದರು ಎಂದು ಪರೋಕ್ಷವಾಗಿ ಬಿಜೆಪಿಯವರಿಗೆ ಸಿಎಂ ತಿವಿದರು.

ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಹೈಪವರ್ ಕಮಿಟಿ: ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯ ಅಧ್ಯಯನಕ್ಕೆ ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ (ಉನ್ನತಾಧಿಕಾರ ಸಮಿತಿ) ಕಮಿಟಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ನೀಡಿದ ಅವರು, ನಂಜುಂಡಪ್ಪ ವರದಿ ಸಲ್ಲಿಕೆಯಾಗಿ 21 ವರ್ಷಗಳಾದವು. ಈ ವರದಿಯನ್ನಾಧರಿಸಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ 61,330 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ. ಸುಮಾರು 42,000 ಕೋಟಿ ರೂ. ಖರ್ಚು ಮಾಡಲಾಗಿದೆ. ನಂಜುಂಡಪ್ಪನವರ ವರದಿಯನ್ನಾಧರಿಸಿ ನೀಡಲಾಗುವ ವಿಶೇಷ ಅಭಿವೃದ್ಧಿ ಯೋಜನೆಯಡಿಯೇ 32,433.43 ಕೋಟಿ ರೂ. ಖರ್ಚು ಮಾಡಲಾಗಿದೆ.

ಇದರೊಂದಿಗೆ ಬಯಲು ಸೀಮೆ ಅಭಿವೃದ್ಧಿ ಮಂಡಳಿ ವತಿಯಿಂದಲೂ ಅನುದಾನಗಳನ್ನು ಒದಗಿಸಲಾಗಿದೆ. ಇಷ್ಟೆಲ್ಲಾ ಮಾಡಿದರೂ ಮಾನವ ಅಭಿವೃದ್ಧಿ ಸೂಚ್ಯಂಕವು ನಿರೀಕ್ಷಿತ ಮಟ್ಟದಲ್ಲಿ ಸುಧಾರಿಸುತ್ತಿಲ್ಲ. ಶಿಕ್ಷಣ, ಆರೋಗ್ಯ, ಆದಾಯ ಗಳಿಕೆ ಮುಂತಾದವುಗಳಲ್ಲಿ ಹಿನ್ನಡೆಯನ್ನು ಈ ಜಿಲ್ಲೆಗಳು ಅನುಭವಿಸುತ್ತಿವೆ. ಹಾಗಾಗಿ ವಿಶೇಷವಾಗಿ ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ ಕಮಿಟಿ ರಚಿಸಲಾಗುವುದು ಎಂದು ಹೇಳಿದರು.

ಬೃಹತ್ ಕೈಗಾರಿಕೆಗಳ ಸ್ಥಾಪನೆ: ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2000ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದರು.

ಧಾರವಾಡ ಜಿಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುತ್ತಿದ್ದು, ಈಗಾಗಲೇ 19 ಘಟಕಗಳು ರೂ. 1255 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಅಲ್ಲದೇ, ಧಾರವಾಡದ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲಾಗುತ್ತದೆ. ರಾಯಚೂರಿನಲ್ಲಿ ಹತ್ತಿ ಉತ್ಪಾದನೆಯು ಹೆಚ್ಚಿರುವುದರಿಂದ ಈ ಜಿಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಠಿಯಿಂದ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಲಾಗುವುದು. ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು ಎಂದು ಸಿಎಂ ವಿವರಿಸಿದರು.

ಉತ್ತರ ಕರ್ನಾಟಕವು ಸಮೃದ್ಧ ಪ್ರವಾಸೋದ್ಯಮಗಳ ತಾಣವಾಗಿದೆ. ಐತಿಹಾಸಿಕ ಮಹತ್ವವಿರುವ ಈ ತಾಣಗಳು ಅಂತರರಾಷ್ಟ್ರೀಯವಾಗಿಯೂ ಮಹತ್ವ ಪಡೆದಿವೆ. ಆದರೆ ಇದಕ್ಕೆ ಸಾಕಷ್ಟು ಮಹತ್ವ ನೀಡದೆ ಹಿನ್ನಡೆಯನ್ನು ಅನುಭವಿಸುತ್ತಿದೆ. ನಾವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ಸಮಗ್ರ ಕ್ರಿಯಾಯೋಜನೆ ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮವಹಿಸುತ್ತೇವೆ ಎಂದು ಹೇಳಿದರು. ಧಾರವಾಡದಲ್ಲಿರುವ ವಾಲ್ಮಿ (ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ)ಯನ್ನು ಉನ್ನತೀಕರಿಸಲಾಗುವುದು. ಹಾಗೂ ರೈತರ ಆದಾಯ ಹೆಚ್ಚಳದ ಕಡೆಗೆ ಒತ್ತು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಪ್ರಕರಣ: ಬಿಜೆಪಿಯಿಂದ ನಿಲುವಳಿ ಸೂಚನೆ, ಚರ್ಚೆಗೆ ಅವಕಾಶ ನಿರಾಕರಿಸಿದ ಸಭಾಪತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.