ETV Bharat / state

ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ

author img

By

Published : Apr 15, 2023, 12:41 PM IST

ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದೆ. ಇಂದು ಕೈ​ ಅಭ್ಯರ್ಥಿಗಳ ಮೂರನೇ ಅಂತಿಮ ಪಟ್ಟಿ ಬಹುತೇಕ ಬಿಡುಗಡೆ ಆಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

Siddaramaiah
ಸಿದ್ದರಾಮಯ್ಯ

ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಜಿಲ್ಲೆಯ ಐದು ಕ್ಷೇತ್ರ ಸೇರಿ ಬಾಕಿ ಇರುವ ಕ್ಷೇತ್ರಗಳ ಕಾಂಗ್ರೆಸ್​ ಅಭ್ಯರ್ಥಿಗಳ ಮೂರನೇ ಅಂತಿಮ ಪಟ್ಟಿ ಇಂದು ಬಹುತೇಕ ಬಿಡುಗಡೆ ಆಗುತ್ತದೆ. ನಾನು ಪ್ರಚಾರ ಸಭೆ ಪ್ರಾರಂಭ ಮಾಡಿದ್ದೇನೆ. ಇವತ್ತು ಹಳಿಯಾಳ, ಕನಕಗಿರಿ, ಯಲಬುರ್ಗಾ ಕ್ಷೇತ್ರಕ್ಕೆ ಹೋಗುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕಾಂಗ್ರೆಸ್ ಸೇರಿರುವ ಲಕ್ಷ್ಮಣ ಸವದಿ ಅವರಿಗೆ ಚುನಾವಣೆಯಲ್ಲಿ ಹೆಚ್ಚಿನ‌ ಜವಾಬ್ದಾರಿ ಏನಾದರೂ ಕೊಡುತ್ತೀರಾ? ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೊಡುತ್ತಾರೆ. ಬೆಳಗಾವಿಯಲ್ಲಿ ಮತ್ತು ಬೇರೆ ಎಲ್ಲೆಲ್ಲಿ ಪ್ರಚಾರಕ್ಕೆ ಹೋಗುತ್ತೇವೆ ಅಂತಾರೋ ಅಲ್ಲೆಲ್ಲಾ ಕಳುಹಿಸಿ ಕೊಡುತ್ತೇವೆ ಎಂದು ಹೇಳಿದರು.

ಪ್ರಭಾವಿ ಲಿಂಗಾಯತ ನಾಯಕ ಪ್ರಭಾಕರ ಕೋರೆ ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ? ಎಂಬ ಮಾತು ಕೇಳಿ ಬರುತ್ತಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಅವರು ನನ್ನ ಜೊತೆ ಮಾತನಾಡಿಲ್ಲ. ಹಾಗೆಯೇ, ಬಿಜೆಪಿ ಶಾಸಕ ಅನಿಲ ಬೆನಕೆ ಕಾಂಗ್ರೆಸ್ ಸೇರ್ಪಡೆ ಬಗ್ಗೆಯೂ ನನಗೆ ಗೊತ್ತಿಲ್ಲ. ನನ್ನ ಜೊತೆ ಮಾತನಾಡದೇ ಏನೂ ಹೇಳಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬಳಿಕ, ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ ಬಳಿಕ ಕಿತ್ತೂರು, ನಿಪ್ಪಾಣಿಯಲ್ಲಿ ಬಂಡಾಯ ಎದ್ದಿರುವ ಅವರೆಲ್ಲರ ಜೊತೆ ಮಾತನಾಡಿದ್ದೇವೆ, ಅಶೋಕ ಪೂಜಾರಿ ಜೊತೆಗೂ ಮಾತಾಡಿದ್ದೇನೆ ಎಂದರು.

ಬೆಳಗಾವಿ ಜಿಲ್ಲೆಯ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ನಗರದ ಕಾಂಗ್ರೆಸ್ ಭವನದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ವಿಧಾನಸಭಾ ಮತಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 15ರಲ್ಲಿ ಈ ಬಾರಿ ಕಾಂಗ್ರೆಸ್ ಗೆಲ್ಲಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ವಾತಾವರಣವಿದ್ದು, ಕಾಂಗ್ರೆಸ್ ಗಾಳಿ ಬೀಸುತ್ತಿದೆ. ಬಿಜೆಪಿ ವಿರುದ್ಧವಾದ ಅಲೆ ಇದೆ. ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ, ಜನ ವಿರೋಧಿ‌ ಕ್ರಮಗಳಿಂದ ಜನ ಬೇಸತ್ತು ಹೋಗಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ : ಜೆಡಿಎಸ್​​ 2ನೇ ಪಟ್ಟಿ: ಹಾಸನದಲ್ಲಿ ಭವಾನಿ ಬದಲು ಸ್ವರೂಪ್​, ಕಡೂರಲ್ಲಿ ದತ್ತಗೆ ಟಿಕೆಟ್​

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಎಲ್ಲ ಕಡೆಗಳಲ್ಲಿ ಪ್ರಚಾರ ಮಾಡುತ್ತಾರೆ. ಬೆಳಗಾವಿಗೆ ನಾವು ಪ್ರಚಾರಕ್ಕೆ ಬಂದಾಗ ನಮಗೂ ಪ್ರಚಾರದ ವಾಹನ ಕೊಡುತ್ತಾರೆ. ಅಷ್ಟೇ ಅಲ್ಲ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರೂ ಪ್ರಚಾರಕ್ಕೆ ಬಂದರೆ, ಇದೇ ವಾಹನವನ್ನು ಬಳಸುತ್ತಾರೆ. ಆದರೆ, ಹೆಚ್ಚಾಗಿ ಜಿಲ್ಲೆಯಲ್ಲಿ ಪ್ರವಾಸ ಮಾಡುವವರು ಸತೀಶ ಜಾರಕಿಹೊಳಿ ಎಂದರು.

ಕಾಂಗ್ರೆಸ್ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳಿಂದ ಜನರಿಗೆ ನಂಬಿಕೆ ಬಂದಿದೆ. ಜನರಿಗೆ ಮೊದಲಿನಿಂದಲೂ ಕಾಂಗ್ರೆಸ್ ಪರ ನಂಬಿಕೆ ಇದೆ. ಹಿಂದೆ ನಾವು ಅಧಿಕಾರದಲ್ಲಿದ್ದಾಗ ನಾವು ಜನರ ನಂಬಿಕೆ ಉಳಿಸಿಕೊಂಡು, ನುಡಿದಂತೆ ನಡೆದಿದ್ದೇವೆ. ಮುಂದೆಯೂ ನಡೆಯುತ್ತೇವೆ. ಈ ಬಾರಿ ಕಾಂಗ್ರೆಸ್​ಗೆ ಜನ ಬೆಂಬಲಿಸಲಿದ್ದಾರೆ ಎನ್ನುವ ವಿಶ್ವಾಸ ಇದೆ ಎಂದರು.

ಈ‌ ವೇಳೆ ಎಐಸಿಸಿ ಕಾರ್ಯದರ್ಶಿ ವಿಷ್ಣು ನಾಗ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯ ಪ್ರಕಾಶ ರಾಥೋಡ್​, ಗ್ರಾಮೀಣ ಘಟಕದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣ ರಾವ್ ಚಿಂಗಳೆ, ಕೆಪಿಸಿಸಿ ಸದಸ್ಯ ರಾಜೇಂದ್ರ ಪಾಟೀಲ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.