ETV Bharat / state

ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ನಾನೂ ಬಿಜೆಪಿ ಟಿಕೆಟ್​ ಆಕಾಂಕ್ಷಿ: ಕೆ ಶಿವರಾಮ್

author img

By

Published : Jul 21, 2023, 5:57 PM IST

ನಂಜನಗೂಡು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಬಿಜೆಪಿ ಪಕ್ಷದ ಮುಖಂಡರು ಮತ್ತು ಸಂಘಟನೆಯ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆ ಶಿವರಾಮ್ ಮಾಹಿತಿ ನೀಡಿದರು.

BJP leader K Shivaram spoke.
ಬಿಜೆಪಿ ಮುಖಂಡ ಕೆ ಶಿವರಾಮ್ ಮಾತನಾಡಿದರು.

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆಗೆ ನಾನು ಕೂಡ​ ಆಕಾಂಕ್ಷಿ ಎಂದು ಬಿಜೆಪಿ ಮುಖಂಡ ಕೆ.ಶಿವರಾಮ್ ಹೇಳಿದರು. ನಂಜನಗೂಡು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಬಿಜೆಪಿ ಪಕ್ಷದ ಮುಖಂಡರು ಮತ್ತು ಸಂಘಟನೆಯ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆ ಶಿವರಾಮ್ ಮಾತನಾಡಿದರು. ಮುಂದಿನ ಲೋಕಸಭಾ ಚುನಾವಣೆಗೆ ಹಾಲಿ ಸಂಸದರಾಗಿರುವ ವಿ ಶ್ರೀನಿವಾಸ್ ಪ್ರಸಾದ್ ಸ್ಪರ್ಧಿಸುವುದಿಲ್ಲ. ಹಾಗಾಗಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ನಮ್ಮ ತಂದೆಯ ತವರೂರು. ಚಾಮರಾಜನಗರ ಲೋಕಸಭಾ ಕ್ಷೇತ್ರದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಟಿಕೆಟ್​ ಆಕಾಂಕ್ಷಿಯಾಗಲಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ನನ್ನ ಸ್ಪರ್ಧೆಯ ವಿಚಾರವನ್ನು ಬಿಜೆಪಿ ಪಕ್ಷದ ಹಿರಿಯ ಮುಖಂಡರ ಜೊತೆ ಚರ್ಚೆ ಮಾಡಿದ್ದೇನೆ. ಪಕ್ಷದ ಹಿರಿಯ ಮುಖಂಡರು ಕೂಡ ನನ್ನ ಸ್ಪರ್ಧೆಗೆ ಒಲವು ತೋರಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ನನಗೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಅವಕಾಶ ನೀಡುವ ಭರವಸೆ ನೀಡಿದ್ದಾರೆ. ಮುಂದಿನ ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ, ನಾನು ಗೆಲುವು ಸಾಧಿಸಿದರೆ ಚಾಮರಾಜನಗರ ಜಿಲ್ಲೆಯ ಚಿತ್ರಣವನ್ನೇ ಬದಲು ಮಾಡುತ್ತೇನೆ ಎಂದು ಭರವಸೆ ನೀಡಿದರು.

ನಿರುದ್ಯೋಗದ ಸಮಸ್ಯೆ ನಿವಾರಣೆಗೆ ಆದ್ಯತೆ: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ನಿರುದ್ಯೋಗದ ಸಮಸ್ಯೆ ಬಹಳಷ್ಟಿದೆ. ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಲು ವಿವಿಧ ಕಾರ್ಖಾನೆಗಳನ್ನು ತರಲು ಪ್ರಯತ್ನಿಸುತ್ತೇನೆ. ನಿರುದ್ಯೋಗ ಸಮಸ್ಯೆ ಮತ್ತು ವಿವಿಧ ಕಾರ್ಖಾನೆಯ ನಿರ್ಮಾಣ ನನ್ನಿಂದ ಸಾಧ್ಯವಾಗದ ಪಕ್ಷದಲ್ಲಿ ಅಂದೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ತಿಳಿಸಿದರು.

ನನಗೆ ಎಂಟು ಬಾರಿ ಟಿಕೆಟ್ ಕೈ ತಪ್ಪಿದೆ. ಸುಮಾರು 500 ನೂರಕ್ಕೂ ಅತಿ ಹೆಚ್ಚು ಹಳ್ಳಿಗಳಿಗೆ ಭೇಟಿ ನೀಡಿ ನಾನು ಕಾರ್ಯಕರ್ತರ ಜೊತೆ ಚರ್ಚಿಸಿರುವೆ. ಹಾಲಿ ಸಂಸದರಾಗಿರುವ ವಿ ಶ್ರೀನಿವಾಸ ಪ್ರಸಾದ್ ಅವರು ಖಂಡಿತವಾಗಿ ಸ್ಪರ್ಧೆ ಮಾಡುವುದಿಲ್ಲ. ಆ ಕಾರಣಕ್ಕಾಗಿ ನಾನು ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಪರಿಣಾಮ ಬೀರುವದಿಲ್ಲ:ಈ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಪ್ರಣಾಳಿಕೆ ಭರವಸೆಯಿಂದ ಬಿಜೆಪಿ ಪಕ್ಷಕ್ಕೆ ಹಿನ್ನೆಡೆಯಾಯಿತು. ಗ್ಯಾರಂಟಿಗಳಿಗೆ ರಾಜ್ಯದ ಜನರು ಮರುಳಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಗ್ಯಾರಂಟಿಗಳು ಮತ್ತು ಭಾಗ್ಯಗಳು ಪರಿಣಾಮ ಬೀರುವುದಿಲ್ಲ ಎಂದು ಕಾಂಗ್ರೆಸ್​ ವಿರುದ್ಧ ಕುಟುಕಿದರು.

ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂಬರುವ ಲೋಕಸಭಾ ಚುನಾವಣೆ ನಡೆಯಲಿದೆ‌. ಮತ್ತೆ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆದು ಹ್ಯಾಟ್ರಿಕ್ ಗೆಲುವು ಸಾಧಿಸಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂಓದಿ: ಚುನಾವಣೆಯಲ್ಲಿ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಅಮಿಷ : ಸಿದ್ದರಾಮಯ್ಯ ಅನರ್ಹತೆ ಕೋರಿ ಅರ್ಜಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.