ಮೈಸೂರು ಲೋಕಸಭಾ ಕ್ಷೇತ್ರದಿಂದ ನಾನೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ: ಅರಸು ಮೊಮ್ಮಗ ಸೂರಜ್ ಹೆಗ್ಡೆ
Published: Nov 18, 2023, 3:58 PM


ಮೈಸೂರು ಲೋಕಸಭಾ ಕ್ಷೇತ್ರದಿಂದ ನಾನೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ: ಅರಸು ಮೊಮ್ಮಗ ಸೂರಜ್ ಹೆಗ್ಡೆ
Published: Nov 18, 2023, 3:58 PM

ಹುಣಸೂರು ತಾಲೂಕಿನ ಕಲ್ಲಹಳ್ಳಿಗೆ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ ಭೇಟಿ ನೀಡಿ, ಅರಸು ಅವರ ಸ್ಮಾರಕಕ್ಕೆ ನಮನ ಸಲ್ಲಿಸಿದರು.
ಮೈಸೂರು: ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದೇನೆ ಎಂದು ದಿವಂಗತ ದೇವರಾಜ್ ಅರಸು ಮೊಮ್ಮಗ ಸೂರಜ್ ಹೆಗ್ಡೆ ಹೇಳಿದರು.
ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸು ಅವರ ಹುಟ್ಟೂರು ಹುಣಸೂರು ತಾಲೂಕಿನ ಕಲ್ಲಹಳ್ಳಿಗೆ ಆಗಮಿಸಿದ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ, ಮಾಧ್ಯಮದವರ ಜೊತೆ ಮಾತನಾಡಿದರು. ಕಲ್ಲಹಳ್ಳಿಯ ತಮ್ಮ ತಾತ ದೇವರಾಜ ಅರಸು ಅವರ ಸ್ಮಾರಕಕ್ಕೆ ನಮನ ಸಲ್ಲಿಸಿದ ಅವರು, ನಮ್ಮ ತಾತಾ ಬಡವರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದು ಜನಮನದಲ್ಲಿದ್ದಾರೆ. ನಾನು ಅವರ ಆಶೀರ್ವಾದೊಂದಿಗೆ ಗೆದ್ದು ಬಂದು ಜನರ ಸೇವೆ ಮಾಡುತ್ತೇನೆ ಎಂದು ತಿಳಿಸಿದರು.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ: ನಾನು ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನಾನೂ ಟಿಕೆಟ್ ಆಕಾಂಕ್ಷಿಯಾಗಿದ್ದು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಬೆಂಬಲದಿಂದ ನನಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಲಿದೆ. ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಸಿಗುವ ವಿಶ್ವಾಸ ನನಗೆ ಇದೆ. ನಾನು ತಾತಾನವರ ಆಶೀರ್ವಾದದೊಂದಿಗೆ ಗೆದ್ದು ಜನರ ಸೇವೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಟಿಕೆಟ್ ರೇಸ್ನಲ್ಲಿರುವ ಅಭ್ಯರ್ಥಿಗಳು: ಮೈಸೂರು-ಕೊಡಗು ಕ್ಷೇತ್ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತ ಇದೆ. ಈಗಾಗಲೇ ಬರೋಬ್ಬರಿ 14ಕ್ಕಿಂತ ಹೆಚ್ಚು ಜನರು ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಯಶಸ್ವಿಯಿಂದ ಕಾಂಗ್ರೆಸ್ ಟಿಕೆಟ್ಗಾಗಿ ಅಭ್ಯರ್ಥಿಗಳಲ್ಲಿ ಬೇಡಿಕೆ ಹೆಚ್ಚಾಗಿದೆ. ಮಾಜಿ ಶಾಸಕ ವಾಸು, ಎಂ.ಕೆ.ಸೋಮಶೇಖರ್, ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಜೆ.ಜೆ.ಆನಂದ್, ಡಾ.ಸುಶ್ರುತ್ ಗೌಡ, ವರುಣ ಮಹೇಶ್, ಹಿರಿಯ ವಕೀಲ ಚಂದ್ರಮೌಳಿ ಹೀಗೆ ಕಾಂಗ್ರೆಸ್ ಟಿಕೆಟ್ ರೇಸ್ನಲ್ಲಿ ದೊಡ್ಡ ಲಿಸ್ಟೇ ಇದೆ.
ಈಗ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಬಯಸಿರುವುದು ಚರ್ಚೆಗೆ ಮತ್ತಷ್ಟು ವೇಗವನ್ನು ನೀಡಿದೆ.
