ETV Bharat / state

ಬರ: ಅಧಿಕಾರಿಗಳು ಕ್ಷೇತ್ರಗಳಿಗೆ ತೆರಳಿ ಜನರ ಸಮಸ್ಯೆ ಆಲಿಸಿ- ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಸೂಚನೆ

author img

By ETV Bharat Karnataka Team

Published : Oct 31, 2023, 9:59 PM IST

District KDP meeting was held.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ನೇತೃತ್ವದಲ್ಲಿ ಜಿಲ್ಲಾ ಕೆಡಿಪಿ ಸಭೆ ನಡೆಯಿತು.

Mysuru KDP meeting: ಮೈಸೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಮಾತನಾಡಿದರು.

ಮೈಸೂರು: ಬರಗಾಲದ ಈ ಸಂದರ್ಭದಲ್ಲಿ ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ ಕೆಳಸ್ತರದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಮೈಸೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಭಿವೃದ್ದಿ ಕಾರ್ಯಗಳು ಕುಂಠಿತವಾಗದಂತೆ ಪರಸ್ಪರ ಇಲಾಖೆಗಳ ಸಹಕಾರದೊಂದಿಗೆ ಕಾರ್ಯ ನಿರ್ವಹಿಸಬೇಕು. ಕುಡಿಯುವ ನೀರು ಪೂರೈಕೆಯಲ್ಲಿ ಎಚ್ಚರವಹಿಸಿ ಈ ತಿಂಗಳೊಳಗೆ ಕುಡಿಯುವ ನೀರಿನ ಟೆಂಡರ್ ಪೂರ್ಣಗೊಳಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, 2019-20ನೇ ಸಾಲಿನಲ್ಲಿ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳು ಸಂಪೂರ್ಣವಾಗಿ ಪೂರ್ಣಗೊಳ್ಳಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಕಾರ್ಯ ಕೈಗೊಳ್ಳಬೇಕು. ತಾಲೂಕುಗಳಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆಯಾಗದಂತೆ ಕ್ರಮವಾಗಬೇಕು. ಮೇವಿನ ಬೆಳವಣಿಗೆ ಸಂಬಂಧಿಸಿದಂತೆ ಜನರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಗ್ರಾಮೀಣ ವಿಭಾಗಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಗ್ರಾಮೀಣ ಜನತೆ ಒಳಗೊಂಡು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಉದ್ಯೋಗ ಒದಗಿಸಬೇಕು. ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು. ಯೋಜನೆಗೆ ಬೇಕಿರುವ ಅಗತ್ಯ ಕ್ರಮಗಳನ್ನು ಕೈಗೊಂಡು ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಕಾವೇರಿ ಕಬಿನಿ ಜಲಾಶಯ ಪ್ರದೇಶಗಳಿಂದ ಸರಬರಾಜಾಗುತ್ತಿರುವ ನೀರನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿ ನೀರಿನ ಸಮಸ್ಯೆ ಆಗದಂತೆ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ 70%ರಷ್ಟು ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆಯಾಗಿದೆ. ಇನ್ನುಳಿದ ಫಲಾನುಭವಿಗಳ ಖಾತೆಗಳಲ್ಲಿನ E-KYC ಸಂಬಂಧಪಟ್ಟ ಸಮಸ್ಯೆಗಳಿಂದ ಹಣ ವರ್ಗಾವಣೆಯಲ್ಲಿ ಸಮಸ್ಯೆಯಾಗಿದೆ. ಸಂಬಂಧಿತ ಫಲಾನುಭವಿಗಳ ಮಾಹಿತಿಯನ್ನು ಪಡೆದು ತಿಳಿಸಲಾಗಿದೆ. ಇದರ ಕುರಿತು ಅಧಿಕಾರಿಗಳಿಗೆ ತಿಳಿಸಿ ಸೂಕ್ತ ಕ್ರಮವನ್ನು ಕೈಗೊಂಡು ಕೆಲವು ದಿನಗಳಲ್ಲಿ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದರು.

ನೋಂದಣಿಯಾಗಿರುವ ಫಲಾನುಭವಿಗಳಲ್ಲಿ ಕೆಲವು ಫಲಾನುಭವಿಗಳ E-KYC ಸಮಸ್ಯೆಗೆ ಸಂಬಂಧಿಸಿದಂತೆ ದೂರವಾಣಿ ಸಂಖ್ಯೆ ಕೊರತೆ ಇರುವುದರಿಂದ ಡಿಬಿಟಿ ಮೂಲಕ ಹಣ ವರ್ಗಾವಣೆಯನ್ನು ಮಾಡಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪಡಿತರ ವಿತರಣೆಗೊಂಡಿದ್ದು, ಸರ್ಕಾರ ಆದೇಶದಂತೆ 5 ಕೆಜಿಗೆ ಪಡಿತರ ಬದಲು ಹಣ ನೀಡುತ್ತಿರುವ ಕಾರ್ಯಕ್ರಮ ಮುಂದುವರಿಯುತ್ತಿದೆ. ಸೆಪ್ಟೆಂಬರ್ ತಿಂಗಳ ನೇರನಗದು ವರ್ಗಾವಣೆ ಬಾಕಿ ಉಳಿದಿದೆ. ಮುಂದಿನ ದಿನಗಳಲ್ಲಿ ಹಣ ಬಿಡುಗಡೆಯಾದ ತಕ್ಷಣ ವರ್ಗಾಯಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಬುಡಕಟ್ಟು ಜನರಿಗೆ ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಜಾಬ್ ಕಾರ್ಡ್ ವಿತರಿಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಗ್ರಾಮ ಒನ್ ಕೇಂದ್ರದ ಸೌಲಭ್ಯಗಳು ಹಾಗೂ ಬ್ಯಾಂಕ್ ಅಕೌಂಟ್ ತೆರೆಯುವಂತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿ.ಪಂ ಸಿಇಒ ಕೆ.ಎಂ.ಗಾಯತ್ರಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್ ಹಾಜರಿದ್ದರು.

ಇದನ್ನೂಓದಿ: ಮೈಸೂರು ದಸರಾ ಯಶಸ್ವಿ, ಅಧಿಕಾರಿಗಳ ಕಾರ್ಯನಿರ್ವಹಣೆಗೆ ಸಚಿವ ಮಹದೇವಪ್ಪ ಮೆಚ್ಚುಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.