ದಶಕಗಳ ಕೂಗಿಗೆ ಕೊನೆಗೂ ಸ್ಪಂದನೆ.. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ ಪರಿಶೀಲಿಸಿದ ಉತ್ತರ ಕನ್ನಡ ಡಿಸಿ

author img

By

Published : Sep 21, 2022, 1:12 PM IST

Updated : Sep 21, 2022, 1:54 PM IST

Uttara Kannada DC Mulai MuhilanSpot Inspection

ಉತ್ತರ ಕನ್ನಡ ಜನತೆಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜಿಲ್ಲೆಯ ಜನರ ದಶಕಗಳ ಕನಸಾಗಿದ್ದ ಸುಸಜ್ಜಿತ ಆಸ್ಪತ್ರೆ ನಿರ್ಮಾಣದ ಬೇಡಿಕೆಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆಯನ್ನು ನೀಡಿದ್ದಾರೆ.

ಕಾರವಾರ: ಜಿಲ್ಲೆಗೊಂದು ಸುಸಜ್ಜಿತ ಆಸ್ಪತ್ರೆ ಬೇಕು ಎನ್ನುವುದು ಉತ್ತರ ಕನ್ನಡ ಜನತೆಯ ದಶಕಗಳ ಕೂಗು. ವಿವಿಧ ರೀತಿಯಲ್ಲಿ ಅಭಿಯಾನ ನಡೆಸುವ ಮೂಲಕ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಒತ್ತಾಯಿಸಿದ್ದ ಜನರ ಬೇಡಿಕೆಗೆ ಕೊನೆಗೂ ಮನ್ನಣೆ ಸಿಕ್ಕಿದೆ.

ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲು ಈಗಾಗಲೇ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಈ ಬಗ್ಗೆ ಆರೋಗ್ಯ ಸಚಿವರೇ ಖುದ್ದು ಹೇಳಿಕೆ ನೀಡಿರುವುದು ಜನರ ಸಂತಸಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಆಸ್ಪತ್ರೆಗಾಗಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಉತ್ತರ ಕನ್ನಡದಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ ಸ್ಥಳ ಪರಿಶೀಲಿಸಿದ ಡಿಸಿ..

ಆಸ್ಪತ್ರೆ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆ: ಜಿಲ್ಲೆಯ ಜನರ ದಶಕಗಳ ಕನಸ್ಸಾಗಿದ್ದ ಸುಸಜ್ಜಿತ ಆಸ್ಪತ್ರೆ ನಿರ್ಮಾಣದ ಬೇಡಿಕೆಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಜಿಲ್ಲೆಯ ಸಚಿವರು, ಶಾಸಕರು ಒಳಗೊಂಡಂತೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಉತ್ತರ ಕನ್ನಡ: ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಹೆಚ್ಚಿದ ಬೇಡಿಕೆ!

ಜಿಲ್ಲೆಯ ಜನತೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಜಿಲ್ಲೆಗೊಂದು ಸುಸಜ್ಜಿತ ಆಸ್ಪತ್ರೆ ನಿರ್ಮಿಸಿಕೊಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಾ ಬರುತ್ತಿದ್ದರು. ಅದರಲ್ಲೂ ಕಳೆದೆರಡು ತಿಂಗಳ ಹಿಂದೆ ಬೈಂದೂರಿನ ಟೋಲ್‌ನಲ್ಲಿ ನಡೆದ ಆ್ಯಂಬುಲೆನ್ಸ್​​ ಅಪಘಾತದಲ್ಲಿ ಆಸ್ಪತ್ರೆಗೆ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದರು. ಈ ಘಟನೆ ಜಿಲ್ಲೆಗೆ ಆಸ್ಪತ್ರೆ ಅಗತ್ಯತೆಯನ್ನು ಎತ್ತಿ ತೋರಿಸಿತ್ತು.

ಇದನ್ನೂ ಓದಿ: ಶಿರೂರು ಟೋಲ್‌ ಕಂಬಕ್ಕೆ ಡಿಕ್ಕಿಯಾದ ಆ್ಯಂಬುಲೆನ್ಸ್​; ನಾಲ್ವರು ದಾರುಣ ಸಾವು...ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜನರು ಪ್ರತಿಭಟನೆ, ಅಭಿಯಾನಗಳ ಮೂಲಕ ಸರ್ಕಾರಕ್ಕೆ ಒತ್ತಡ ಹೇರುವ ಕೆಲಸ ಮಾಡಿದ್ದರು. ಇದೀಗ ಕೊನೆಗೂ ಜನರ ಪ್ರಯತ್ನಕ್ಕೆ ಆರಂಭಿಕ ಜಯ ದೊರೆತಂದಾಗಿದೆ. ಹಾಗಾಗಿ ಸರ್ಕಾರಕ್ಕೆ ಜಿಲ್ಲೆಯ ಜನತೆ ಅಭಿನಂದನೆ ಸಲ್ಲಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಆದಷ್ಟು ಶೀಘ್ರದಲ್ಲಿಯೇ ಆಸ್ಪತ್ರೆ ನಿರ್ಮಿಸಿಕೊಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕುಮಟಾದಲ್ಲಿ ಸ್ಥಳ ಪರಿಶೀಲನೆ: ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ ತಾತ್ವಿಕ ಒಪ್ಪಿಗೆ ಸಿಕ್ಕ ಬೆನ್ನಲ್ಲೇ ಜಿಲ್ಲೆಯಲ್ಲೂ ಆಸ್ಪತ್ರೆ ಚಟುವಟಿಕೆಗಳು ಗರಿಗೆದರಿವೆ. ಸ್ಥಳೀಯವಾಗಿ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯವಿರುವ ಸೌಲಭ್ಯಗಳ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕುಮಟಾ ತಾಲೂಕಿನ ಮಿರ್ಜಾನ್, ಕುಮಟಾ ರೈಲು ನಿಲ್ದಾಣ, ಕೊಂಕಣ ಎಜ್ಯುಕೇಷನ್, ಖೈರೆ ಗ್ರಾಮ ವ್ಯಾಪ್ತಿಯ ಪ್ರದೇಶಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿದೆ.

ಈ ವೇಳೆ ಮಂಗಳೂರಿನ ಕೆ.ಎಸ್. ಹೆಗಡೆ ಆಸ್ಪತ್ರೆಯ ಅಧಿಕಾರಿಗಳು ಸಹ ಹಾಜರಿದ್ದು, ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತ ಜಾಗದ ಕುರಿತು ಕುಮಟಾದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಕುಮಟಾದಲ್ಲಿ ಪಿಪಿಪಿ ಮಾದರಿಯಲ್ಲಿ ಸುಸಜ್ಜಿತ ಆಸ್ಪತ್ರೆ ಅಥವಾ ಮೆಡಿಕಲ್ ಕಾಲೇಜು ನಿರ್ಮಿಸುವ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಲಾಗಿದೆ. ಆಸ್ಪತ್ರೆ ಬೇಡಿಕೆ ಪೂರೈಸಲು ಸ್ಥಳೀಯ ಲಭ್ಯತೆ ಕುರಿತು ಪ್ರಾಥಮಿಕವಾಗಿ ಪರಿಶೀಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸುಸಜ್ಜಿತ ಆಸ್ಪತ್ರೆಗಾಗಿ ಟ್ವಿಟರ್ ಅಭಿಯಾನ ಕೈಗೊಂಡ ಉತ್ತರ ಕನ್ನಡ ಜನತೆ

Last Updated :Sep 21, 2022, 1:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.