ವಿಶಾಖಪಟ್ಟಣಂ (ಆಂಧ್ರಪ್ರದೇಶ) : ಇಲ್ಲಿನ ಅನಕಪಲ್ಲಿ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ದುರ್ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದರೆ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪಟಾಕಿ ತಯಾರಿಕಾ ಘಟಕದಲ್ಲಿ ಇಂದು (ಭಾನುವಾರ) ಮಧ್ಯಾಹ್ನ ಆಕಸ್ಮಿಕ ಸ್ಫೋಟ ಸಂಭವಿಸಿದೆ. ಮದುವೆ ಸೀಸನ್ ಆಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪಟಾಕಿ ತಯಾರಿಕೆ ಕಾರ್ಯ ನಡೆಯುತ್ತಿತ್ತು. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಗೋಡೆಗಳು ಛಿದ್ರವಾಗಿವೆ. ಮೃತರಲ್ಲಿ ಹೆಚ್ಚಿನವರು ಪೂರ್ವ ಗೋದಾವರಿ ಜಿಲ್ಲೆಗೆ ಸೇರಿದವರು ಎಂದು ತಿಳಿದುಬಂದಿದೆ.
ಸಿಎಂ ಚಂದ್ರಬಾಬು ನಾಯ್ಡು ಆಘಾತ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ದುರಂತದ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆಘಾತ ವ್ಯಕ್ತಪಡಿಸಿದ್ದಾರೆ. ಮೃತರು ಮತ್ತು ಗಾಯಾಳುಗಳಿಗೆ ತಕ್ಷಣದ ನೆರವು ನೀಡಲು ಗೃಹ ಸಚಿವೆ ಅನಿತಾ ಅವರಿಗೆ ನಿರ್ದೇಶನ ನೀಡಿದ್ದಾರೆ. ಸಚಿವರು ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಅವರನ್ನು ಸಂಪರ್ಕಿಸಿ ದುರಂತದ ಮೇಲ್ವಿಚಾರಣೆ ನಡೆಸಿದರು.
ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆದೇಶಿಸಿದರು. ಆಸ್ಪತ್ರೆಯಲ್ಲಿ ಹೆಚ್ಚಿನ ಹಾಸಿಗೆ, ವೆಂಟಿಲೇಟರ್‌ಗಳು ಮತ್ತು ಸಿಬ್ಬಂದಿ ವ್ಯವಸ್ಥೆ ಮಾಡುವಂತೆಯೂ ಸೂಚಿಸಿದರು. ಬೆಂಕಿಯಿಂದಾಗಿ ಪಟಾಕಿ ಕಾರ್ಖಾನೆಗೆ ಬಿದ್ದ ಬೆಂಕಿಯನ್ನು ನಂದಿಸಲು ಮತ್ತು ಉಳಿದವರ ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ತೊಡಗಿದ್ದಾರೆ.
15 ಲಕ್ಷ ರೂಪಾಯಿ ಪರಿಹಾರ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದ ಬಗ್ಗೆ ಗೃಹ ಸಚಿವೆ ಅನಿತಾ ಆಘಾತ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ. ಮೃತರ ಸಂಬಂಧಿಕರಿಗೆ ತಲಾ 15 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಗೃಹ ಸಚಿವೆ ಅನಿತಾ ತಿಳಿಸಿದರು.
ಇದನ್ನೂ ಓದಿ: 'ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ವಿರುದ್ಧ ಸರ್ಕಾರಿ ಪ್ರಾಯೋಜಿತ ಹಿಂಸಾಚಾರ': ಬಿಜೆಪಿ ಆಕ್ರೋಶ