ಕೋಲ್ಕತಾ: ಪಶ್ಚಿಮ ಬಂಗಾಳದ ಕೆಲ ಜಿಲ್ಲೆಗಳಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಣ್ಣು ಮುಚ್ಚಿ ಕೂರಲಾಗದು ಎಂದಿರುವ ಕೋಲ್ಕತಾ ಹೈಕೋರ್ಟ್, ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕೇಂದ್ರ ಸಶಸ್ತ್ರ ಪಡೆಗಳನ್ನು (ಸಿಎಪಿಎಫ್) ನಿಯೋಜಿಸುವಂತೆ ಶನಿವಾರ ಆದೇಶಿಸಿದೆ. ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಲದ ಕೆಲ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವುದನ್ನು ಗಮನಿಸಿದ ನ್ಯಾಯಾಲಯ ಈ ಆದೇಶ ಮಾಡಿದೆ.
ಈ ನಿರ್ದೇಶನವು ಮುರ್ಷಿದಾಬಾದ್ ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ ಮತ್ತು ಅಗತ್ಯವಿದ್ದಾಗ ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸುತ್ತಿರುವ ಇತರ ಜಿಲ್ಲೆಗಳಲ್ಲಿಯೂ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಬೇಕು ಎಂದು ನ್ಯಾಯಾಲಯ ಹೇಳಿದೆ.
"ಪಶ್ಚಿಮ ಬಂಗಾಳ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿಧ್ವಂಸಕ ಕೃತ್ಯಗಳು ನಡೆಯುತ್ತಿರುವ ವಿವಿಧ ವರದಿಗಳನ್ನು ನೋಡಿಯೂ ನಾವು ಕಣ್ಣುಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ" ಎಂದು ನ್ಯಾಯಮೂರ್ತಿ ಸೌಮೆನ್ ಸೇನ್ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.
ಮುರ್ಷಿದಾಬಾದ್ ಹೊರತುಪಡಿಸಿ, ದಕ್ಷಿಣ 24 ಪರಗಣ ಜಿಲ್ಲೆಯ ಅಮ್ಟಾಲಾ, ಉತ್ತರ 24 ಪರಗಣ ಜಿಲ್ಲೆ ಮತ್ತು ಹೂಗ್ಲಿಯ ಚಂಪ್ದಾನಿಯಲ್ಲಿ ಹಿಂಸಾಚಾರದ ಘಟನೆಗಳು ನಡೆದಿರುವುದನ್ನು ನ್ಯಾಯಾಲಯ ಗಮನಿಸಿದೆ. ಕೇಂದ್ರ ಪಡೆಗಳು ರಾಜ್ಯ ಸರ್ಕಾರದ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ.
"ಜನರ ಸುರಕ್ಷತೆ ಮತ್ತು ಭದ್ರತೆ ಅಪಾಯದಲ್ಲಿರುವಾಗ ಸಾಂವಿಧಾನಿಕ ನ್ಯಾಯಾಲಯಗಳು ಮೂಕ ಪ್ರೇಕ್ಷಕರಾಗಿರಲು ಮತ್ತು ತಾಂತ್ರಿಕ ಕಾರಣಗಳನ್ನು ಮುಂದೆ ಮಾಡಿ ಸುಮ್ಮನೆ ಕೂರಲು ಸಾಧ್ಯವಿಲ್ಲ" ಎಂದು ನ್ಯಾಯಮೂರ್ತಿ ರಾಜಾ ಬಸು ಚೌಧರಿ ಅವರನ್ನೂ ಒಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
"ಈ ಹಿಂದೆಯೇ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಿದ್ದರೆ ಪರಿಸ್ಥಿತಿಯನ್ನು ಬೇಗನೆ ನಿಯಂತ್ರಿಸಬಹುದಿತ್ತು. ಆದರೆ ಸಮಯಕ್ಕೆ ಸರಿಯಾಗಿ ಕ್ರಮಗಳನ್ನು ಕೈಗೊಂಡಿಲ್ಲ ಎಂಬುದು ಕಾಣಿಸುತ್ತಿದೆ" ಎಂದು ನ್ಯಾಯಾಲಯ ಹೇಳಿದೆ. ಪರಿಸ್ಥಿತಿ ಗಂಭೀರ ಮತ್ತು ಅಸ್ಥಿರವಾಗಿದೆ ಎಂದು ಹೇಳಿದ ನ್ಯಾಯಾಲಯ, ಮುಗ್ಧ ನಾಗರಿಕರ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ಯುದ್ಧೋಪಾದಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಮತ್ತು ಅಪರಾಧಿಗಳನ್ನು ಬಂಧಿಸಬೇಕು ಎಂದು ಅದು ಹೇಳಿದೆ.
"ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ಸಮುದಾಯಗಳ ನಡುವೆ ಆಗಾಗ್ಗೆ ಹಿಂಸಾಚಾರದ ಘಟನೆಗಳು ನಡೆದಿವೆ ಮತ್ತು ಈವರೆಗೂ ಚಾಲ್ತಿಯಲ್ಲಿರುವ ಆತಂಕಕಾರಿ ಪರಿಸ್ಥಿತಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ" ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ಪರಿಸ್ಥಿತಿಯ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತು. ಈ ವಿಷಯದ ಮುಂದಿನ ವಿಚಾರಣೆಯನ್ನು ಏಪ್ರಿಲ್ 17 ರಂದು ನಿಗದಿಪಡಿಸಲಾಗಿದೆ.
ಮುರ್ಷಿದಾಬಾದ್ನಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ 138 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
ಇದನ್ನೂ ಓದಿ : ಗೆಳತಿಯನ್ನು ಸೂಟ್‌ಕೇಸ್‌ನಲ್ಲಿ ಬಚ್ಚಿಟ್ಟು ಹಾಸ್ಟೆಲ್‌ಗೆ ಕರೆದೊಯ್ಯುವಾಗ ಸಿಕ್ಕಿಬಿದ್ದ ವಿದ್ಯಾರ್ಥಿ! - GIRLFRIEND IN SUITCASE