ETV Bharat / bharat

ಪ್ರಧಾನಿ ಮೋದಿ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕೆಂದು ಕೋರಿದ್ದ ಅರ್ಜಿ ವಜಾ - Narendra Modi

author img

By ETV Bharat Karnataka Team

Published : Apr 29, 2024, 7:52 PM IST

Demand to ban PM Modi from contesting elections rejected
Demand to ban PM Modi from contesting elections rejected

ಪ್ರಧಾನಿ ನರೇಂದ್ರ ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕೆಂದು ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ನವದೆಹಲಿ: ಮಾದರಿ ನೀತಿ ಸಂಹಿತೆಯನ್ನು (ಎಂಸಿಸಿ) ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ಉತ್ತರ ಪ್ರದೇಶದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಆರು ವರ್ಷಗಳ ಅವಧಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕೆಂದು ಕೋರಿ ವಕೀಲ ಆನಂದ್ ಎಸ್.ಜೋಂಧಳೆ ಎಂಬುವರು ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ದತ್ತಾ ಅವರ ಏಕಸದಸ್ಯ ಪೀಠ, ಅರ್ಜಿದಾರರು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಪೂರ್ವಗ್ರಹಪೀಡಿತವಾಗಿ ಭಾವಿಸಿದ್ದಾರೆ ಎಂದು ಹೇಳಿತು. ಯಾವುದೇ ದೂರಿನ ಬಗ್ಗೆ ನಿರ್ದಿಷ್ಟವಾಗಿ ಇಂಥದೇ ಕ್ರಮ ತೆಗೆದುಕೊಳ್ಳಬೇಕೆಂದು ಹೈಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ ಎಂದು ಅದು ತಿಳಿಸಿತು.

ಅರ್ಜಿದಾರರು ಈಗಾಗಲೇ ಚುನಾವಣಾ ಆಯೋಗವನ್ನು ಸಂಪರ್ಕಿಸಿ ದೂರು ನೀಡಿದ್ದಾರೆ ಮತ್ತು ಅವರ ದೂರಿನ ಬಗ್ಗೆ ಆಯೋಗವು ಸ್ವತಂತ್ರವಾಗಿ ಕ್ರಮ ಕೈಗೊಳ್ಳಬಹುದು ಎಂದು ನ್ಯಾಯಾಲಯ ಹೇಳಿತು. ದೂರನ್ನು ಸೂಕ್ತ ರೀತಿಯಲ್ಲಿ ಪ್ರಕ್ರಿಯೆಗೊಳಿಸಲಾಗುವುದು ಮತ್ತು ಆದೇಶಗಳನ್ನು ಹೊರಡಿಸಲಾಗುವುದು ಎಂದು ಚುನಾವಣಾ ಆಯೋಗದ ಪರವಾಗಿ ಹಾಜರಾದ ವಕೀಲ ಸಿದ್ಧಾಂತ್ ಕುಮಾರ್ ಹೇಳಿರುವುದನ್ನು ನ್ಯಾಯಾಲಯ ಈ ಸಂದರ್ಭದಲ್ಲಿ ಉಲ್ಲೇಖಿಸಿತು.

ಏಪ್ರಿಲ್ 9ರಂದು ಉತ್ತರ ಪ್ರದೇಶದ ಪಿಪಿಭಿತ್​ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹಿಂದೂ ಮತ್ತು ಸಿಖ್ ದೇವತೆಗಳನ್ನು ಉಲ್ಲೇಖಿಸಿ ಮತ ಕೇಳಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನು ಐಎನ್​ಡಿಐಎ ಮೈತ್ರಿಕೂಟದ ಪಕ್ಷಗಳು ದ್ವೇಷಿಸುತ್ತವೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ವಕೀಲ ಆನಂದ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು.

ಪ್ರಧಾನಿಯವರ ಭಾಷಣವು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಅಡೆತಡೆಗಳನ್ನು ಸೃಷ್ಟಿಸಬಹುದು. ಹೀಗಾಗಿ ಪ್ರಧಾನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನ್ಯಾಯಾಲಯ ನಿರ್ದೇಶನ ನೀಡಬೇಕು. ಪ್ರಧಾನಿಯನ್ನು ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳಿಸಬೇಕು ಎಂದು ವಕೀಲ ಆನಂದ್ ಸಲ್ಲಿಸಿದ ಅರ್ಜಿಯಲ್ಲಿ ಒತ್ತಾಯಿಸಲಾಗಿತ್ತು. ಆದರೆ ಈ ಅರ್ಜಿಯ ಮೇಲೆ ಯಾವುದೇ ಆದೇಶ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್​ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ಕಾಂಗ್ರೆಸ್​ಗೆ ಶಾಕ್: ಕಣದಿಂದ ಹಿಂದೆ ಸರಿದ ಇಂದೋರ್​ ಲೋಕಸಭಾ ಕ್ಷೇತ್ರದ ಅಭ್ಯರ್ಥಿ! - Indore Lok Sabha Seat

ETV Bharat Logo

Copyright © 2024 Ushodaya Enterprises Pvt. Ltd., All Rights Reserved.