ETV Bharat / state

ಡಿಕೆಶಿ ಪ್ರಕರಣದ ತನಿಖೆಗೆ ನೀಡಿದ್ದ ಅನುಮೋದನೆ ಹಿಂಪಡೆದ ಸರ್ಕಾರ: ಸಿಬಿಐ, ಯತ್ನಾಳ್​ ಅರ್ಜಿ ವಿಚಾರಣೆ ಮುಂದೂಡಿಕೆ

author img

By ETV Bharat Karnataka Team

Published : Jan 31, 2024, 4:18 PM IST

ಡಿಕೆಶಿ ವಿರುದ್ಧದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಯತ್ನಾಳ್ ಮತ್ತು ಸಿಬಿಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಲಾಗಿದೆ.

ಸಿಬಿಐ, ಯತ್ನಾಳ್​ ಅರ್ಜಿ ವಿಚಾರಣೆ ಮುಂದೂಡಿಕೆ
ಸಿಬಿಐ, ಯತ್ನಾಳ್​ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿತು.

ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ಉಮೇಶ್ ಅಡಿಗ ಅವರಿದ್ದ ವಿಭಾಗೀಯ ಪೀಠ ಬುಧವಾರ ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ಶಿವಕುಮಾರ್ ಪರ ವಿಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರಾಗಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಗ್ವಿ, ಅರ್ಜಿಗಳ ದಾಖಲೆಗಳು ಲಭ್ಯವಾಗಿಲ್ಲ ಎಂದು ತಿಳಿಸಿದರು.

ಅಲ್ಲದೆ, ಡಿಕೆಶಿ ಅವರ ವಿರುದ್ಧದ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮೋದನೆ ಹಿಂಪಡೆಯಲಾಗಿದೆ. ಪ್ರಕರಣವನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಿದ್ದರೂ, ಸಿಬಿಐ ಶಿವಕುಮಾರ್ ಅವರಿಗೆ ನೊಟೀಸ್ ನೀಡುತ್ತಿದೆ ಎಂದು ಪೀಠಕ್ಕೆ ವಿವರಿಸಿದರು. ಇದಕ್ಕೆ ನ್ಯಾಯಪೀಠ, ಪ್ರಕರಣದ ಎಲ್ಲ ದಾಖಲೆಗಳನ್ನು ಪ್ರತಿವಾದಿ ವಕೀಲರಿಗೆ ಒದಗಿಸುವಂತೆ ಸೂಚನೆ ನೀಡಿತು. ಜತೆಗೆ, ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಮುಂದಿನ ವಿಚಾರಣೆ ವೇಳಗೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿತು.

ಇದೇ ವೇಳೆ ಯತ್ನಾಳ್ ಪರ ವಕೀಲರು, ಪ್ರಸರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆದಿದ್ದು, ಲೋಕಾಯುಕ್ತರಿಗೆ ವರ್ಗಾವಣೆ ಮಾಡಲಾಗಿದೆ. ಆದ್ದರಿಂದ ಲೋಕಾಯುಕ್ತರನ್ನು ಪ್ರತಿವಾದಿ ಮಾಡಬೇಕು ಎಂದು ಕೋರಿದರು.

ಪ್ರಕರಣದ ಹಿನ್ನೆಲೆ ಏನು?: 2019ರಲ್ಲಿ ಬಿಜೆಪಿ ಸರ್ಕಾರವು ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ಅನುಮತಿಸಿತ್ತು. ಇದನ್ನು ಪ್ರಶ್ನಿಸಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾ ಮಾಡಿತ್ತು. ಆನಂತರ ಇದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು.

ಈ ಮಧ್ಯೆ, ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಕಳೆದ ವರ್ಷ ನವೆಂಬರ್ 28ರಂದು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಮೇಲ್ಮನವಿ ಹಿಂಪಡೆದಿದ್ದರು. ಹೀಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು. ಇದಕ್ಕೆ ಆಕ್ಷೇಪಿಸಿ ಬಿಜೆಪಿ ಶಾಸಕ ಯತ್ನಾಳ್ ಅವರು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದೀಗ ಸಿಬಿಐ ಸಹ ಹೈಕೋರ್ಟ್ ಮೆಟ್ಟಿಲೇರಿದೆ.

ಈ ಹಿಂದೆ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕು ಎಂದು ತಿಳಿಸಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಇರಿಸಲಾಗಿತ್ತು. ಇದೀಗ ಅರ್ಜಿ ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬರುತ್ತಿದೆ.

ಇದನ್ನೂ ಓದಿ: ಡಿಕೆಶಿ ವಿರುದ್ಧ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರ ಕ್ರಮ ಪ್ರಶ್ನಿಸಿ ಯತ್ನಾಳ್ ಮಧ್ಯಂತರ ಅರ್ಜಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.