ETV Bharat / state

ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಪ್ರಕರಣದಲ್ಲಿ ಡಿಕೆಶಿ ವಿರುದ್ಧ ಅನುಮತಿ ಹಿಂಪಡೆದ ಪ್ರಕರಣ: ಏ.5 ರಿಂದ ವಿಚಾರಣೆ - DK Shivakumar Case

author img

By ETV Bharat Karnataka Team

Published : Mar 22, 2024, 10:34 PM IST

ಹೈಕೋರ್ಟ್
ಹೈಕೋರ್ಟ್

ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಪ್ರಕರಣದಲ್ಲಿ ಡಿಕೆ ಶಿವಕುಮಾರ್​ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಪ್ರಕರಣದ ವಿಚಾರಣೆಯನ್ನು ಏ.5 ರಿಂದ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವ ಕ್ರಮ ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ಕುರಿತು, ಏ.5 ರಿಂದ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ. ಈ ಸಂಬಂಧದ ಅರ್ಜಿ ಬಗ್ಗೆ ನ್ಯಾಯಮೂರ್ತಿ ಕೆ. ಸೋಮಶೇಖರ್ ಅವರ ನೇತೃತ್ವದ ವಿಭಾಗೀಯ ಪೀಠ, ಈ ಮಾಹಿತಿ ನೀಡಿದೆ.

ಇದಕ್ಕೂ ಮುನ್ನ, ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವೊಂದು ಬೆಳವಣಿಗೆಗಳು ನಡೆದಿವೆ. ಆ ಕುರಿತು ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡಲಾಗುವುದು ಎಂದು ಡಿಕೆ ಶಿವಕುಮಾರ್ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.

ಪ್ರಕರಣದ ಹಿನ್ನೆಲೆ ಏನು?: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಸಿಬಿಐ ತನಿಖೆಗೆ ಅನುಮತಿ ನೀಡಿ, ಹಿಂದಿನ ಬಿಜೆಪಿ ರಾಜ್ಯ ಸರ್ಕಾರ 2022ರ ಸೆ.25ರಂದು ಆದೇಶ ಹೊರಡಿಸಿತ್ತು. ಅದರ ರದ್ದತಿಗೆ ಕೋರಿ ಶಿವಕುಮಾರ್ ಸಲ್ಲಿಸಿದ್ದ ತಕರಾರು ಅರ್ಜಿಯನ್ನು 2023ರ ಏ.20ರಂದು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಶಿವಕುಮಾರ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಏಕ ಸದಸ್ಯ ನ್ಯಾಯಪೀಠದ ಆದೇಶ ಮತ್ತು ಸಿಬಿಐ ತನಿಖೆಗೆ ವಿಭಾಗೀಯ ಪೀಠ ತಡೆ ನೀಡಿತ್ತು. ಈ ಮಧ್ಯೆ ಹಾಲಿ ಕಾಂಗ್ರೆಸ್ ಸರ್ಕಾರ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು 2023ರ ನ.28ರಂದು ಹಿಂಪಡೆದಿತ್ತು. ಜತೆಗೆ, ತನಿಖೆಯನ್ನು ಲೋಕಾಯುಕ್ತ ಪೊಲೀಸರಿಗೆ ವಹಿಸಿತ್ತು. ಅದನ್ನು ಪ್ರಶ್ನಿಸಿ ಸಿಬಿಐ ಮತ್ತು ಯತ್ನಾಳ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಡಿಕೆ ಶಿವಕುಮಾರ್‌ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡ ಲೋಕಾಯುಕ್ತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.