ETV Bharat / state

ಹಾವೇರಿ ಹೆಸರು ರಾಷ್ಟ್ರ ಮಟ್ಟದಲ್ಲಿ ಕೊಂಡೊಯ್ಯಲು ಸರ್ವ ಪ್ರಯತ್ನ: ಮಾಜಿ ಸಿಎಂ ಬೊಮ್ಮಾಯಿ

author img

By ETV Bharat Karnataka Team

Published : Mar 15, 2024, 7:39 PM IST

Updated : Mar 15, 2024, 8:11 PM IST

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನನಗೆ ಹೊಸ ಜವಾಬ್ದಾರಿ ನೀಡಿದ್ದು, ಹಾವೇರಿ ಕ್ಷೇತ್ರದ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಬೆಳಗಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನುಡಿದರು.

ಹಾವೇರಿ ಹೆಸರು ರಾಷ್ಟ್ರ ಮಟ್ಟದಲ್ಲಿ ಕೊಂಡೊಯ್ಯಲು ಸರ್ವ ಪ್ರಯತ್ನ

ಹಾವೇರಿ : ಹಾವೇರಿ ಜಿಲ್ಲೆಯ ಹೆಸರನ್ನು ರಾಷ್ಟ್ರ ರಾಜಕಾರಣಕ್ಕೆ ಕೊಂಡೊಯ್ಯಲು ಸರ್ವ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಣೆಬೆನ್ನೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ನಾನು 12 ವರ್ಷ ಎಂಎಲ್ಸಿ ಯಾಗಿ ಕೆಲಸ ಮಾಡಿದ್ದೇನೆ. ಶಿಗ್ಗಾವಿ - ಸವಣೂರು ಶಾಸಕನಾಗಿದ್ದೇನೆ. ನನಗೆ ಈ ಕ್ಷೇತ್ರ ಹೊಸದೇನಲ್ಲ. ಹಾವೇರಿ - ಗದಗ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಶಿಗ್ಗಾಂವ್ ಜನರ ಪ್ರೀತಿ ವಿಶ್ವಾಸ ಮರೆಯಲ್ಲ. ಇದು ನನಗೆ ಹೊಸ ಜವಾಬ್ದಾರಿ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನನಗೆ ಜವಾಬ್ದಾರಿ ನೀಡಿದ್ದಾರೆ. ಹಾವೇರಿ ಕ್ಷೇತ್ರದ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಬೆಳಗಿಸುತ್ತೇನೆ ಎಂದು ತಿಳಿಸಿದರು.

ನಾನು ಹೊಂದಾಣಿಕೆ ರಾಜಕೀಯ ಮಾಡಲ್ಲ. ನಾನು ನನ್ನ ಶಕ್ತಿ ಮೇಲೆ, ಜನರ ಬೆಂಬಲದ ಮೇಲೆ ರಾಜಕಾರಣ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರದ ವಿರುದ್ದ ಜನ ಭ್ರಮ ನಿರಸನಗೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಪುಟಗಟ್ಟಲೆ ಜಾಹೀರಾತು ನೀಡುತ್ತಿದ್ದಾರೆ. ಕಳೆದ ವರ್ಷದಲ್ಲಿ ಅಭಿವೃದ್ಧಿ ಶೂನ್ಯ ಆಗಿದೆ. ಕುಡಿಯುವ ನೀರು ಕೊಡದೇ ಇರುವ ಸರ್ಕಾರ ಇದು. ಆಡಳಿತ ವಿರೋಧಿ ಅಲೆ ಕಾಂಗ್ರೆಸ್​ಗೆ ಇದ್ದು, ನಮಗೆ ಆಡಳಿತದ ಪರ ಅಲೆ ಇದೆ. ಬರಗಾಲ ನಿಭಾಯಿಸಲು ವಿಫಲವಾದ ಕಾಂಗ್ರೆಸ್ ಸರ್ಕಾರದ ವಿರುದ್ದ ಉಗ್ರ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಿಸುತ್ತೇವೆ ಎಂದು ಬೊಮ್ಮಾಯಿ ಭರವಸೆ ನೀಡಿದರು.

ಟಿಕೆಟ್ ಘೋಷಣೆ ಬಳಿಕ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಆಗಮಿಸಿದ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಬರಮಾಡಿಕೊಂಡರು. ರಾಣೆಬೆನ್ನೂರು ನಗರದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ ಬೈಕ್ ಜಾಥಾ ಮೂಲಕ ಪಕ್ಷದ ಕಚೇರಿಗೆ ಆಗಮಿಸಿದರು. ಬೊಮ್ಮಾಯಿಗೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಪಕ್ಷದ ಜಿಲ್ಲಾಧ್ಯಕ್ಷ ಅರುಣಕುಮಾರ್ ಪೂಜಾರ್ ಸಾಥ್​ ನೀಡಿದರು.

ಇದೇ ವೇಳೆ, ತಮ್ಮ ಮಗನಿಗೆ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಟಿಕೆಟ್​ ಕೈ ತಪ್ಪಿದ್ದಕ್ಕೆ ಅಸಮಾಧಾನ ಹೊರಹಾಕುತ್ತಿರುವ ಮಾಜಿ ಡಿಸಿಎಂ ಕೆ.ಎಸ್​ ಈಶ್ವರಪ್ಪ ಅವರ ವಿಚಾರವಾಗಿ ಪ್ರತಿಕ್ರಿಯಿಸಿದ ಬೊಮ್ಮಾಯಿ, ಈಗಾಗಲೇ ಈಶ್ವರಪ್ಪ ಹತ್ತಿರ ಮಾತನಾಡಿದ್ದೇನೆ. ಇಂದು ಅವರು ಸಭೆ ಮಾಡುತ್ತಿದ್ದಾರೆ. ಇದಾದ ನಂತರ ಮತ್ತೊಮ್ಮೆ ಅವರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ : ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಅರುಣ್ ಕುಮಾರ್ ಪುತ್ತಿಲ ಮರಳಿಗೂಡಿಗೆ: ಬಂಡಾಯ ಶಮನ

Last Updated :Mar 15, 2024, 8:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.