ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಸಂಭ್ರಮಾಚರಣೆ ವೀಕ್ಷಿಸುವ ಭರದಲ್ಲಿ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಬಲಿಯಾದ ಪ್ರಕರಣವು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆಯಾದ ಬೆನ್ನಲ್ಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್ಸಿಎ) ವಿಶೇಷ ತನಿಖಾ ತಂಡ ಭೇಟಿ ನೀಡಿದೆ.
ತನಿಖಾ ತಂಡವು ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕುತ್ತಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಕೆಎಸ್ಸಿಎ ಅಧ್ಯಕ್ಷರು ಹಾಗೂ ಸಿಬ್ಬಂದಿಯಿಂದ ಸಿಐಡಿ ಅಧಿಕಾರಿಗಳು ಹೇಳಿಕೆ ಪಡೆದುಕೊಳ್ಳಲಿದ್ದಾರೆ. ಪ್ರಕರಣದಲ್ಲಿ ಕೆಎಸ್ಸಿಎ ಪ್ರತಿನಿಧಿಗಳ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಈಗಾಗಲೇ ಹೈಕೋರ್ಟ್ ಸೂಚಿಸಿದೆ.
ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಎಸ್‌ಪಿ ಶುಭನ್ವಿತಾ ಅವರ ನೇತೃತ್ವದಲ್ಲಿ ಡಿವೈಎಸ್‌ಪಿಗಳಾದ ಪುರುಷೋತ್ತಮ್ ಹಾಗೂ ಗೌತಮ್ ಅವರನ್ನೊಳಗೊಂಡ ತಂಡ ವಿಚಾರಣೆ ಕೈಗೆತ್ತಿಕೊಂಡಿದೆ. ಪ್ರಕರಣದಲ್ಲಿ ಈಗಾಗಲೇ ಬಂಧಿಸಲ್ಪಟ್ಟಿರುವ ಆರ್ಸಿಬಿ ಫ್ರಾಂಚೈಸಿಯ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸ್ಲೆ, ಕಾರ್ಯಕ್ರಮದ ನಿರ್ವಹಣೆಯ ಜವಾಬ್ದಾರಿ ವಹಿಸಿಕೊಂಡಿದ್ದ ಡಿಎನ್ಎ ಎಂಟರ್ಟೈನ್ಮೆಂಟ್ ಮ್ಯಾನೇಜ್ಮೆಂಟ್ ಕಂಪನಿಯ ಪ್ರತಿನಿಧಿಗಳಾದ ಸುನಿಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಂದು ಮತ್ತು ನಾಳೆ ಸರ್ಕಾರಿ ರಜಾದಿನವಾದ್ದರಿಂದ ಸೋಮವಾರ ಆರೋಪಿಗಳನ್ನು ಬಾಡಿ ವಾರಂಟ್ ಆಧಾರದಲ್ಲಿ ಸಿಐಡಿ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಿದೆ.
ಇದನ್ನೂ ಓದಿ: ಕಾಲ್ತುಳಿತ ಪ್ರಕರಣ: ಆರ್ಸಿಬಿ, ಡಿಎನ್ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ
ಬುಧವಾರ (ಜೂನ್ 4) ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಲ್ಲದೆ, 40ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ನೂಕುನುಗ್ಗಲಿನಿಂದ ದುರಂತ ಸಂಭವಿಸಿತ್ತು.
ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ಪ್ರಕರಣ: ವಿರಾಟ್ ಕೊಹ್ಲಿ ವಿರುದ್ಧ ಪೊಲೀಸರಿಗೆ ದೂರು