ETV Bharat / state

ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು - Lok Sabha Election 2024

author img

By ETV Bharat Karnataka Team

Published : Mar 30, 2024, 6:25 PM IST

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹೆಜ್ಜೆ ಹೆಜ್ಜೆಗೂ ಕರ್ನಾಟಕದ ಹಿತಾಸಕ್ತಿಯ ವಿರುದ್ಧವೇ ಕೆಲಸ ಮಾಡಿದೆ. ದೇವೇಗೌಡರು, ಕೇವಲ ರಾಜಕೀಯ ಲಾಭಕ್ಕಾಗಿ ಮೈತ್ರಿ ಮಾಡಿಕೊಂಡು ಸಮಸ್ತ ಆರೂವರೆ ಕೋಟಿ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದ್ದಾರೆ. ಈ ದ್ರೋಹಕ್ಕಾಗಿ ಜೆಡಿಎಸ್​ ಭಾರಿ ಬೆಲೆ ತೆರಲಿರುವುದು ಖಚಿತ ಎಂದು ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆಯಲ್ಲಿ ಹರಿಹಾಯ್ದಿದ್ದಾರೆ.

Etv Bharat
Etv Bharat

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆ ಎಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ - ಕನ್ನಡಿಗ - ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರ ಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ, ಸನ್ಮಾನ್ಯ ದೇವೇಗೌಡರೇ, ವೈಯಕ್ತಿಕ ಇಲ್ಲವೆ ರಾಜಕೀಯ ಲಾಭಕ್ಕಾಗಿ ನಾನು ಯಾರ ಜೊತೆಯಲ್ಲಿಯೂ ರಾಜಿ ಮಾಡಿಕೊಳ್ಳಲಾರೆ. ಅಂತಹ ಪರಿಸ‍್ಥಿತಿ ಬಂದೊದಗಿದರೆ ರಾಜಕೀಯವಾಗಿ ನಿವೃತ್ತಿಯಾಗುತ್ತೇನೆಯೇ ವಿನಹ ಕರ್ನಾಟಕದ ಹಿತಾಸಕ್ತಿಯ ವಿರೋಧಿಗಳ ಜೊತೆಯಲ್ಲಿ ನಿಮ್ಮಂತೆ ಹೊಂದಾಣಿಕೆ ಮಾಡಿಕೊಳ್ಳಲಾರೆ. ದೇವೇಗೌಡರ ಜೊತೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯವಿದ್ದರೂ. ನಮ್ಮ ನೆಲ, ಜಲ ಮತ್ತು ಭಾಷೆಯ ರಕ್ಷಣೆಯ ಬಗೆಗಿನ ಅವರ ನಿಲುವಿನ ಬಗ್ಗೆ ಗೌರವ ಇತ್ತು.

ಹಿಂದಿ ಹೇರಿಕೆ, ಜಲ ವಿವಾದ: ಆದರೆ, ಕಳೆದ ಹತ್ತು ವರ್ಷಗಳ ಅಧಿಕಾರ ಅವಧಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹೆಜ್ಜೆ ಹೆಜ್ಜೆಗೂ ಕರ್ನಾಟಕದ ಹಿತಾಸಕ್ತಿಯ ವಿರುದ್ಧವೇ ಕೆಲಸ ಮಾಡಿದೆ. ನಾಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆ, ಕಾವೇರಿ, ಕೃಷ್ಣ, ಮಹದಾಯಿ ಜಲವಿವಾದಗಳಲ್ಲಿ ಅನ್ಯಾಯ, ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗ ಯುವಜನರಿಗೆ ವಂಚನೆ. ಹೀಗೆ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ದ್ರೋಹ ಎಸಗುತ್ತಾ ಬಂದಿದೆ. ಹೀಗಿದ್ದರೂ ದೇಶದ ಎಲ್ಲ ಸಮಸ್ಯೆಗಳಿಗೆ ಮೋದಿ ಮತ್ತು ಶಾ ಬಳಿ ಪರಿಹಾರ ಇದೆ” ಎಂದು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ನಿಮ್ಮನ್ನು ಚುಚ್ಚಲಿಲ್ಲವೇ? ಎಂದು ಟೀಕಿಸಿದ್ದಾರೆ.

ಕೇಂದ್ರ ಸರ್ಕಾರದ ಅನ್ಯಾಯ: ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯಕ್ಕೆ ಕ್ಷಮೆಯೇ ಇಲ್ಲ. ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರದ ಖಜಾನೆಗೆ ಸಂದಾಯವಾಗುವ ಕನ್ನಡಿಗರ ಒಂದು ರೂಪಾಯಿಗೆ ಪ್ರತಿಯಾಗಿ ಕೇವಲ ಹದಿಮೂರು ಪೈಸೆಯಷ್ಟು ಹಣ ಮಾತ್ರ ಕರ್ನಾಟಕಕ್ಕೆ ವಾಪಸ್​ ಬರುತ್ತಿದೆ.

ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮೊದಲಾದ ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಕೂಡಾ ಕೇಂದ್ರ ಸರ್ಕಾರದ ಅನ್ಯಾಯವನ್ನು ಕೂಗಿ ಕೂಗಿ ಹೇಳುತ್ತಿವೆ. ಆದರೆ, ಕರ್ನಾಟಕದ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಮಾತ್ರ ನಮ್ಮ ನೆಲ-ಜಲ-ಭಾಷೆಯ ವಿರೋಧಿಗಳ ಜೊತೆಯಲ್ಲಿ ರಾಜಿ ಮಾಡಿಕೊಂಡು ಕನ್ನಡಿಗರಿಗೆ ದ್ರೋಹ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ - ಕರ್ನಾಟಕ: ಸನ್ಮಾನ್ಯ ದೇವೇಗೌಡರೇ, ಎಪ್ಪತ್ತು ವರ್ಷಗಳ ಕಾಲ ರಾಜಕೀಯದಲ್ಲಿದ್ದು ಕನ್ನಡಿಗರ ಪ್ರೀತಿ - ಅಭಿಮಾನವನ್ನು ಉಂಡು ಬೆಳೆದ ನೀವು ’ನಾವು ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿಯೇ ಚುನಾವಣೆ ನಡೆಸುತ್ತೇವೆ” ಎಂಬ ಶರಣಾಗತಿಯ ಹೇಳಿಕೆಯನ್ನು ನೀಡುವಾಗ ಕನಿಷ್ಠ ನಿಮ್ಮ ಆತ್ಮಾಭಿಮಾನವೂ ಕುಟುಕಲಿಲ್ಲವೇ? ಕನ್ನಡ - ಕರ್ನಾಟಕ ವಿರೋಧಿ ನಾಯಕನಿಗೆ ಈ ರೀತಿ ಶರಣಾಗುವುದು ಸಮಸ್ತ ಕನ್ನಡಿಗರಿಗೆ ಮಾಡುವ ದ್ರೋಹ ಎಂದು ನಿಮಗೆ ಅನಿಸಲಿಲ್ಲವೇ? ನಿಮ್ಮೊಳಗಿನ ರಾಜಕೀಯ ನಾಯಕ ಅಷ್ಟೊಂದು ದುರ್ಬಲ ಅಸಹಾಯಕನಾಗಿ ಹೋದನೇ? ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ ಲಾಭಕ್ಕಾಗಿ ಮೈತ್ರಿ: ತಮ್ಮ ರಾಜಕೀಯ ಜೀವನದ ಉದ್ದಕ್ಕೂ ಪ್ರಾದೇಶಿಕ ಆಶೋತ್ತರಗಳನ್ನು ಪ್ರತಿಪಾದಿಸಿಕೊಂಡು ಕೇಂದ್ರದ ಅಧಿಪತ್ಯವನ್ನು ಪ್ರಶ್ನಿಸುತ್ತಾ ಬಂದ ದೇವೇಗೌಡರು ಈ ಇಳಿವಯಸ್ಸಿನಲ್ಲಿ ಈ ರೀತಿಯ ರಾಜಕೀಯ ರಾಜಿ ಮಾಡಿಕೊಳ್ಳುವಂತೆ ಮಾಡಿದ ಶಕ್ತಿ ಮತ್ತು ವ್ಯಕ್ತಿ ಯಾರೇ ಇರಬಹುದು. ಆದರೆ, ದೇವೇಗೌಡರು, ಕೇವಲ ರಾಜಕೀಯ ಲಾಭಕ್ಕಾಗಿ ಮೈತ್ರಿ ಮಾಡಿಕೊಂಡು ಸಮಸ್ತ ಆರೂವರೆ ಕೋಟಿ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದ್ದಾರೆ. ಈ ದ್ರೋಹಕ್ಕಾಗಿ ದೇವೇಗೌಡರು ಮತ್ತು ಅವರ ಪಕ್ಷ ಭಾರಿ ಬೆಲೆ ತೆರಲಿರುವುದು ಖಚಿತ ಎಂದು ತಿರುಗೇಟು ನೀಡಿದರು.

ಇದನ್ನೂಓದಿ:ರಾಜ್ಯದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್: ಯಾರ ವಿರುದ್ಧ ಯಾರು ಅಖಾಡದಲ್ಲಿದ್ದಾರೆ, ಇಲ್ಲಿದೆ ಸಂಪೂರ್ಣ ಮಾಹಿತಿ - Lok Sabha election 2024

ETV Bharat Logo

Copyright © 2024 Ushodaya Enterprises Pvt. Ltd., All Rights Reserved.