ETV Bharat / state

ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ : ಪ್ರಧಾನಿ ಮೋದಿಗೆ ಸಿಎಂ ಪ್ರಶ್ನೆ

author img

By ETV Bharat Karnataka Team

Published : Mar 18, 2024, 3:12 PM IST

ಶಿವಮೊಗ್ಗದಲ್ಲಿ ಪ್ರಚಾರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಅವರು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ, ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ಎಂದು ಪ್ರಧಾನಿ ಮೋದಿ ಅವರನ್ನ ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಶಿವಮೊಗ್ಗ ಪ್ರಚಾರ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ, ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ ಎಂದು ಸಿಎಂ ಆರೋಪಿಸಿದ್ದಾರೆ.

ಹೀಗಿರುವಾಗ ರಾಜ್ಯದ ರೈತರು ಯಾಕೆ ಬಿಜೆಪಿಯನ್ನು ಬೆಂಬಲಿಸಬೇಕು?. ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ. ಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ, ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್‌ ಪ್ರಿಂಟ್‌ ಮಾಡುವ ಮಷಿನ್‌ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ, ಅಮಾಯಕ ರೈತರನ್ನು ಬಲಿ ಪಡೆದಿದ್ದರು. ಇಂದು ಅದೇ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ಎಂದು ಪ್ರಶ್ನಿಸಿದ್ದಾರೆ.

2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 1 ಲಕ್ಷದವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಅಧಿಕಾರ ಸಿಕ್ಕ ಮೇಲೆ ಕೊಟ್ಟ ಮಾತನ್ನು ಈಡೇರಿಸದೆ, ತಮಗೆ ದ್ರೋಹ ಬಗೆದ ಬಿಜೆಪಿಯನ್ನು ನಾಡಿನ ರೈತರು ಯಾಕೆ ಬೆಂಬಲಿಸಬೇಕು?. ರಾಜ್ಯದಲ್ಲಿ ಬರ ಘೋಷಣೆ ಮಾಡಿ 6 ತಿಂಗಳುಗಳು ಕಳೆದಿದೆ. ರೂ. 18,177 ಕೋಟಿ ಪರಿಹಾರದ ಹಣ ಬಿಡುಗಡೆಗೆ ಒತ್ತಾಯಿಸಿ ಹಲವು ಬಾರಿ ಪತ್ರ ಬರೆದಿದ್ದೇನೆ. ಖುದ್ದಾಗಿ ತಮ್ಮನ್ನು ಹಾಗೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಆದರೂ ಈವರೆಗೆ ನಯಾಪೈಸೆ ಪರಿಹಾರದ ಹಣ ಬಿಡುಗಡೆ ಆಗಿಲ್ಲ. ರಾಜ್ಯದ ರೈತರ ಮೇಲೆ ಯಾಕಿಷ್ಟು ದ್ವೇಷ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರೈತರಿಗೆ ಮಾತ್ರ ಯಾಕೆ ಈ ಸಾಲು ಸಾಲು ಅನ್ಯಾಯಗಳು?: ಬರದಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ 150ಕ್ಕೆ ಹೆಚ್ಚಳ ಮಾಡಬೇಕು ಎಂದು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದರೂ, ಈವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್​ನಲ್ಲಿ ರೂ. 5,300 ಕೋಟಿ ಅನುದಾನ ಘೋಷಿಸಿ ವರ್ಷಗಳೇ ಕಳೆದರೂ, ಈವರೆಗೆ ನಯಾಪೈಸೆ ರಾಜ್ಯಕ್ಕೆ ಬಂದಿಲ್ಲ. ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಿಗೆ ಕೇಂದ್ರದ ಅನುಮತಿ ಸಿಗದೆ ನೆನೆಗುದಿಗೆ ಬಿದ್ದಿವೆ. ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಸಂಕಷ್ಟಸೂತ್ರ ರಚನೆಗೆ ಮಧ್ಯಸ್ಥಿಕೆ ವಹಿಸದೆ ಕೇಂದ್ರ ಸರ್ಕಾರ ನಾಡಿನ‌ ರೈತರನ್ನು ಕೈಬಿಟ್ಟಿತ್ತು. ರಾಜ್ಯದ ರೈತರಿಗೆ ಮಾತ್ರ ಯಾಕೆ ಈ ಸಾಲು ಸಾಲು ಅನ್ಯಾಯಗಳು? ಎಂದು ಅವರು ಪ್ರಶ್ನಿಸಿದ್ದಾರೆ.

ಇವರಿಗೆ ನ್ಯಾಯ ಕೊಡಿಸಬೇಕಾದವರು ನೀವಲ್ಲವೇ? : ದೇಶದ ಕೃಷಿ ಕ್ಷೇತ್ರವನ್ನು ಅದಾನಿ, ಅಂಬಾನಿಯಂತಹ ಉದ್ಯಮಿಗಳ ಕೈಗಿಡುವ ದುಷ್ಟ ಆಲೋಚನೆಯೊಂದಿಗಿನ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ 3 ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿತು. ಈ ಕಾಯ್ದೆಗಳನ್ನು ವಾಪಸ್​ ಪಡೆಯುವಂತೆ ಹೋರಾಟ ಮಾಡುತ್ತಿದ್ದ 750ಕ್ಕೂ ಹೆಚ್ಚು ರೈತರು ಅನಾರೋಗ್ಯ, ಹವಾಮಾನ ವೈಪರೀತ್ಯ, ಪೊಲೀಸ್‌ ದೌರ್ಜನ್ಯಗಳಿಗೆ ಬಲಿಯಾದರು. ಇವರಿಗೆ ನ್ಯಾಯ ಕೊಡಿಸಬೇಕಾದವರು ನೀವಲ್ಲವೇ ನರೇಂದ್ರ ಮೋದಿ ಅವರೇ? ಎಂದು ಕೇಳಿದ್ದಾರೆ.

ಇದನ್ನೂ ಓದಿ : ಇಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ; ಲೋಕಸಭಾ ಚುನಾವಣೆಗೆ ಮತಬೇಟೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.