ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತವಾಗಿ 11 ಮಂದಿ ಮೃತಪಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆರ್ಸಿಬಿ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಮತ್ತು ಡಿಎನ್ಎ ಎಂಟರ್‌ಟೈನ್ಮೆಂಟ್ ನೆಟ್ವರ್ಕ್ ಪ್ರೈವೇಟ್ ಲಿಮಿಟೆಡ್‌ನ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ಸಿಎ, ಆರ್ಸಿಬಿ, ಡಿಎನ್ಎ ಮತ್ತು ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಬಿ.ದಯಾನಂದ್ ಸೇರಿ ಇತರ ಪೊಲೀಸ್ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಜಗದೀಶ್ ನೋಟಿಸ್ ಜಾರಿಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಕೆ.ಜಿ ರಸ್ತೆಯಲ್ಲಿರುವ ಜಿಲ್ಲಾಧಿಕಾರಿಗಳ ಕೋರ್ಟ್ ಸಭಾಂಗಣಕ್ಕೆ ಆಗಮಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಶುಕ್ರವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರ ವರೆಗೆ ವಿಚಾರಣೆ ನಡೆಸಿ, ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್, ಆರ್ಸಿಬಿ ತಂಡದ ಉಪಾಧ್ಯಕ್ಷ ರಾಜೇಶ್ ಮೆನನ್ ಮತ್ತು ಡಿಎನ್ಎ ಸಿಬ್ಬಂದಿ ಮಾತ್ರ ವಿಚಾರಣೆಗೆ ಹಾಜರಾಗಿದ್ದರು. ಆದರೆ ಕೆಎಸ್ಸಿಎ, ಆರ್ಸಿಬಿ ಮತ್ತು ಡಿಎನ್ಎ ಹಿರಿಯ ಅಧಿಕಾರಿಗಳು ವಿಚಾರಣೆಗೆ ಗೈರು ಹಾಜರಾಗಿದ್ದರು. ಕೆಲವು ಸಿಬ್ಬಂದಿ ಮಾತ್ರ ವಿಚಾರಣೆಗೆ ಹಾಜರಿದ್ದರು. ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್ ಮತ್ತು ಆರ್ಸಿಬಿ ತಂಡದ ಉಪಾಧ್ಯಕ್ಷ ರಾಜೇಶ್ ಮತ್ತು ಡಿಎನ್ಎ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ ಡಿಸಿ, ಅವರ ವಿಡಿಯೋ ಹೇಳಿಕೆಗಳನ್ನು ದಾಖಲಿಸಿಕೊಂಡರು. ತಮ್ಮ ಹೇಳಿಕೆಯ ಪ್ರತಿಯನ್ನು ಪರಿಶೀಲಿಸಿದ ಅಧಿಕಾರಿಗಳು ಅದಕ್ಕೆ ಸಹಿ ಮಾಡಿದ್ದಾರೆ.
ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್ ಅವರು ಕೂಡ ವಿಚಾರಣೆಗೆ ಗೈರಾಗಿದ್ದರು. ಕಾಯ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಯೂ ಇರುವ ಹಿನ್ನೆಲೆಯಲ್ಲಿ ದಯಾನಂದ್ ಅವರು ಮ್ಯಾಜಿಸ್ಟ್ರೇಟ್ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡುವಂತೆ ತಮ್ಮ ವಕೀಲರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಬೆಂಗಳೂರು: ಅಮಾನತಾಗಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರ ಹುದ್ದೆಗೆ ನೂತನ ಅಧಿಕಾರಿ ನೇಮಕ