ETV Bharat / state

ಡಿ.ಕೆ.ಶಿವಕುಮಾರ್ ಪ್ರಕರಣ: ತನಿಖೆಗೆ ಕಾಲಮಿತಿ ಇಲ್ಲವೇ ಎಂದು ಸಿಬಿಐಗೆ ಹೈಕೋರ್ಟ್ ಪ್ರಶ್ನೆ - D K Shivakumar Case

author img

By ETV Bharat Karnataka Team

Published : Apr 5, 2024, 8:35 PM IST

ಒಂದು ಪ್ರಕರಣವನ್ನು ಸುದೀರ್ಘ ವಿಚಾರಣೆ ನಡೆಸುವುದಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?, ಸಿಆರ್​ಪಿಸಿ ಅಡಿಯಲ್ಲಿ ತನಿಖೆಗೆ ಕಾಲಮಿತಿ ಇಲ್ಲವೇ ಎಂದು ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣದ ವಿಚಾರಣೆ ವೇಳೆ ಸಿಬಿಐಗೆ ಹೈಕೋರ್ಟ್ ಪ್ರಶ್ನಿಸಿತು.

ಸಿಬಿಐಗೆ ಹೈಕೋರ್ಟ್ ಪ್ರಶ್ನೆ
ಸಿಬಿಐಗೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದಲ್ಲಿ ತನಿಖೆ ನಡೆಸುತ್ತಿರುವ ಸಿಬಿಐಗೆ ಯಾವುದೇ ಕಾಲಮಿತಿ ಇಲ್ಲವೇ ಎಂದು ಹೈಕೋರ್ಟ್ ಪ್ರಶ್ನಿಸಿದೆ. ಡಿ.ಕೆ.ಶಿವಕುಮಾರ್​ ವಿರುದ್ಧ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್​ ಯತ್ನಾಳ್​ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ಉಮೇಶ್ ಎಂ.ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠ, ತನಿಖೆಯ ಕಾಲಮಿತಿ ಬಗ್ಗೆ ಪ್ರಶ್ನಿಸಿತು.

ವಿಚಾರಣೆ ವೇಳೆ ಸಿಬಿಐ ಪರ ವಕೀಲರು ವಾದ ಮಂಡಿಸಿ, ಅರ್ಜಿಯ ವಿಚಾರಣೆ ನಡೆಸಿದ್ದ ರಾಜ್ಯ ಸರ್ಕಾರವು ತನಿಖೆಗೆ ಈ ಹಿಂದೆ ನೀಡಿದ್ದ ಅನುಮತಿಯಂತೆ ತನಿಖೆ ಮುಂದುವರೆದಿತ್ತು. ಈ ಹಂತದಲ್ಲಿ ಸರ್ಕಾರ ಅನುಮತಿಯನ್ನು ಹಿಂಪಡೆದಿದೆ. ಪ್ರಸಕ್ತ ರಾಜ್ಯ ಸರ್ಕಾರ ಅನುಮತಿ ಹಿಂಪಡೆದಿರುವುದಕ್ಕೆ ಸಕಾರಣ ನೀಡಿಲ್ಲ ಎಂದು ಪೀಠಕ್ಕೆ ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಒಂದು ಪ್ರಕರಣವನ್ನು ಸುದೀರ್ಘ ವಿಚಾರಣೆ ನಡೆಸುವುದಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ ಎಂದು ಪ್ರಶ್ನಿಸಿತು. ಅಲ್ಲದೆ, ಸಿಆರ್​ಪಿಸಿ ಅಡಿಯಲ್ಲಿ ತನಿಖೆಗೆ ಕಾಲ ಮಿತಿ ಇಲ್ಲವೇ? ಎಂದು ಕೇಳಿತು.

ವಾದ ಮುಂದುವರೆಸಿದ ವಕೀಲರು, ಡಿಕೆಶಿ ಅವರ ಅಕ್ರಮ ಆಸ್ತಿಯು 2013-18ರ ಅವಧಿಯಲ್ಲಿ 74.93 ಕೋಟಿ ರೂಪಾಯಿಯಷ್ಟಿದ್ದು, ಶೇ.49.13ರಷ್ಟು ಹೆಚ್ಚಾಗಿದೆ. ಸಿಬಿಐ ತನಿಖೆ ರದ್ದತಿ ಕೋರಿ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಆ ನಂತರ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ವಿಚಾರಣೆಗೆ ಬಾಕಿ ಇದ್ದಾಗ ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆಯಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಅಲ್ಲದೆ, ಜನರಲ್ ಕ್ಲಾಸಸ್ ಕಾಯಿದೆ ಅಡಿ ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆಯುವ ಅಧಿಕಾರವನ್ನು ಸರ್ಕಾರ ಹೊಂದಿದೆಯೇ? ಒಂದೊಮ್ಮೆ ರಾಜ್ಯ ಸರ್ಕಾರಕ್ಕೆ ಆ ಅಧಿಕಾರ ಇದೆ ಎಂದಾದರೆ ಸಿಬಿಐ ದಾಖಲಿಸಿರುವ ಎಫ್ಐಆರ್​​ನ ಪರಿಸ್ಥಿತಿ ಏನಾಗಲಿದೆ ಎಂದು ತಮ್ಮ ವಾದದಲ್ಲಿ ವಿವರಿಸಿದರು.

ಇದನ್ನೂ ಓದಿ: ಒಪ್ಪಂದ ವಿವಾಹ ವಿಚ್ಛೇದನ ಮಂಜೂರು ಮಾಡಲು ಕೌಟುಂಬಿಕ ನ್ಯಾಯಾಲಯಕ್ಕೆ ಅಧಿಕಾರವಿದೆ: ಹೈಕೋರ್ಟ್ - Consensual Divorce

ಜನರಲ್ ಕ್ಲಾಸಸ್ ಕಾಯಿದೆ ಅಡಿ ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆಯುವ ಅಧಿಕಾರ ಸರ್ಕಾರಕ್ಕೆ ಇದೆ ಎಂದಾದರೂ ತನಿಖೆ ಪೂರ್ಣಗೊಳಿಸಿ, ಅಂತಿಮ ವರದಿ ಸಲ್ಲಿಸಲು ಸಿಬಿಐಗೆ ಅವಕಾಶ ಮಾಡಿಕೊಡಬೇಕು ಎಂದು ವಿವರಿಸಿದರು. ಅಂತಿಮವಾಗಿ ವಿಚಾರಣೆಯನ್ನು ಏಪ್ರಿಲ್​ 18ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಡಿ.ಕೆ.ಶಿವಕುಮಾರ್ ಅವರು ಗಣಿಗಾರಕೆ ಮತ್ತು ರಿಯಲ್ ಎಸ್ಟೇಟ್‌ ಉದ್ಯಮ ಸೇರಿದಂತೆ ಹಲವು ವ್ಯವಹಾರಗಳಲ್ಲಿ ತೊಡಗಿಕೊಂಡಿದ್ದು, ದೆಹಲಿ ಸೇರಿದಂತೆ ವಿವಿಧ ಸ್ಥಳಗಳ ಮೇಲೆ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ದಾಳಿ ಮಾಡಿ ಶೋಧ ನಡೆಸಿತ್ತು. ಈ ವೇಳೆ 8.59 ಕೋಟಿ ರೂಪಾಯಿಗಳ ಹಣ ಪತ್ತೆಯಾಗಿತ್ತು. ಡಿ.ಕೆ.ಶಿವಕುಮಾರ್ ಅವರಿಗೆ ಸೇರಿದ ಸ್ಥಳದಲ್ಲಿ 41 ಲಕ್ಷ ರೂಪಾಯಿ ಪತ್ತೆಯಾಗಿತ್ತು. ಈ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಇದರ ಬಳಿಕ ಜಾರಿ ನಿರ್ದೇಶನಾಲಯ ಶಿವಕುಮಾರ್ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಪ್ರಕರಣ ದಾಖಲಿಸಿತ್ತು. ಇದನ್ನು ಆಧರಿಸಿ 2019ರ ಸೆಪ್ಟೆಂಬರ್ 3ರಂದು ಶಿವಕುಮಾರ್ ಅವರನ್ನು ಬಂಧಿಸಲಾಗಿತ್ತು. ಆ ನಂತರ 2019ರ ಸೆಪ್ಟೆಂಬರ್ 9ರಂದು ಜಾರಿ ನಿರ್ದೇಶನಾಲಯ ಪತ್ರ ಆಧರಿಸಿ, ಭ್ರಷ್ಟಾಚಾರ ನಿಗ್ರಹ ಕಾಯಿದೆ ಅಡಿ ತನಿಖೆ ನಡೆಸಲು ಸಿಬಿಐಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು.

ಇದನ್ನೂ ಓದಿ: ಕ್ರಿಕೆಟ್ ಪಟುವಿಗೆ 60 ನಿಮಿಷದಲ್ಲಿ ಪಾಸ್‌ಪೋರ್ಟ್: ಹೈಕೋರ್ಟ್ ಮೆಚ್ಚುಗೆ - High Court

ಇದನ್ನು ಪ್ರಶ್ನಿಸಿ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ವಜಾಗೊಳಿಸಿತ್ತು.‌ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣಾ ಹಂತದಲ್ಲಿರುವ ಸಂದರ್ಭದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸಿಬಿಐಗೆ ನೀಡಿದ್ದ ಅನುಮತಿ ರದ್ದುಪಡಿಸಿ ಆದೇಶಿಸಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠ, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಿತ್ತು.

ಇದನ್ನೂ ಓದಿ: ಹೈಕೋರ್ಟ್​ನಲ್ಲಿ ಉದ್ಯೋಗಾವಕಾಶ: ಯಾವ ಹುದ್ದೆ? ಅರ್ಹತೆ ಏನು? ಸಂಪೂರ್ಣ ವಿವರ ಇಲ್ಲಿದೆ - KARNATAKA HIGH COURT JOB

ETV Bharat Logo

Copyright © 2024 Ushodaya Enterprises Pvt. Ltd., All Rights Reserved.