ETV Bharat / state

ಭ್ರೂಣ ಹತ್ಯೆ ಆರೋಪ: ವೈದ್ಯರ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ - Fetus Killing

author img

By ETV Bharat Karnataka Team

Published : May 1, 2024, 7:08 AM IST

fetus killing
ಭ್ರೂಣ ಹತ್ಯೆ ಆರೋಪ

ಭ್ರೂಣ ಹತ್ಯೆ ಆರೋಪ ಸಂಬಂಧ ವೈದ್ಯರ ವಿರುದ್ಧದ ಪ್ರಕರಣ ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ.

ಬೆಂಗಳೂರು: ಬೃಹತ್ ಪ್ರಮಾಣದ ಭ್ರೂಣ ಹತ್ಯೆ ಪ್ರಕರಣದ ಆರೋಪ ಎದುರಿಸುತ್ತಿರುವ ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ನೆಲಮಂಗಲ ನಗರದಲ್ಲಿ ಆಸರೆ ಆಸ್ಪತ್ರೆ ನಡೆಸುತ್ತಿರುವ ಅರ್ಜಿದಾರರು ವೈದ್ಯಕೀಯ ಗರ್ಭಾವಸ್ಥೆ ಹತ್ಯೆ ಕಾಯಿದೆ ಮತ್ತು ಐಪಿಸಿ ಅಡಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಡಾ.ಎನ್.ಕೆ.ರವಿಕುಮಾರ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಅಲ್ಲದೆ, ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿದೆ. ಅರ್ಜಿದಾರರ ವಿರುದ್ಧದ ಆರೋಪಗಳು ಜೀವಾವಧಿ ಶಿಕ್ಷೆ ನೀಡುವಂತದ್ದಾಗಿದ್ದು, ಪ್ರಕರಣ ವಿಚಾರಣಾ ಹಂತದಲ್ಲಿದೆ. ಅಲ್ಲದೇ, ವೈದ್ಯಕೀಯ ಗರ್ಭಾವಸ್ಥೆ ಕಾಯಿದೆ ಅಡಿ ಮಾತ್ರವಲ್ಲದೇ ಐಪಿಸಿ ಅಡಿಯ ವಿವಿಧ ಸೆಕ್ಷನ್​ಗಳ ಅಡಿ ಪ್ರಕರಣ ದಾಖಲಾಗಿದೆ. ಈ ಹಂತದಲ್ಲಿ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.

ಅಲ್ಲದೆ, ರಾಜ್ಯದ ಇತರ ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆ ಆರೋಪ ಸಂಬಂಧ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಕರಣ ಪ್ರಾರಂಭಿಕ ಹಂತದಲ್ಲಿದೆ. ಆದ್ದರಿಂದ ಈವರೆಗೂ ಆರೋಪ ಪಟ್ಟಿ ಸಲ್ಲಿಕೆಯಾಗಿಲ್ಲ. ಆದ್ದರಿಂದ ಅರ್ಜಿದಾರರ ವಾದ ಪರಿಗಣಿಸಲಾಗದು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಅರ್ಜಿದಾರರು, ವೈದ್ಯಕೀಯ ಗರ್ಭಾವಸ್ಥೆ ಕಾಯಿದೆ ಅಡಿ ಎಫ್‌ಐಆರ್ ದಾಖಲಿಸುವುದಕ್ಕೆ ಅವಕಾಶವಿಲ್ಲ. ಈ ಕಾಯಿದೆಯಡಿ ಎಫ್‌ಐಆರ್ ಆಧಾರದಲ್ಲಿ ತನಿಖೆ ನಡೆಸುವುದಕ್ಕೆ ಪೊಲೀಸರು ಸಕ್ಷಮ ಪ್ರಾಧಿಕಾರವಾಗುವುದಿಲ್ಲ. ಈ ಆಧಾರದಲ್ಲಿ ಅರ್ಜಿದಾರರ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸುವುದು ಕಾನೂನುಬಾಹಿರ ಎಂಬುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅವರ ವರದಿಯಲ್ಲಿ ತಿಳಿಸಿದ್ದಾರೆ ಎಂದು ವಾದ ಮಂಡಿಸಿದ್ದರು.

ತನಿಖಾಧಿಕಾರಿಗಳ ಪರ ವಾದ ಮಂಡಿಸಿದ ವಕೀಲರು, ಅರ್ಜಿದಾರರ ಮಾಲೀಕತ್ವದ ಆಸ್ಪತ್ರೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರೂಣ ಹತ್ಯೆ ಪ್ರಕರಣಗಳು ನಡೆದಿರುವ ಸಂಬಂಧ ತನಿಖೆ ವೇಳೆ ಗೊತ್ತಾಗಿದೆ. ಸುಮಾರು 74 ಗರ್ಭಪಾತಗಳನ್ನು ಮಾಡಿದ್ದಾರೆ. ಆದರೆ, ನಿಯಮಗಳ ಅಡಿಯಲ್ಲಿ ಅಗತ್ಯವಿರುವ ದಾಖಲೆಗಳನ್ನು ಸಂಗ್ರಹಿಸಿಲ್ಲ ಎಂದು ಪೀಠಕ್ಕೆ ವಿವರಿಸಿದ್ದರು.

ಇದನ್ನೂ ಓದಿ: ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ - K E Kantesh

ETV Bharat Logo

Copyright © 2024 Ushodaya Enterprises Pvt. Ltd., All Rights Reserved.