ETV Bharat / state

ವಕೀಲ ಚಾಂದ್‌ ಪಾಷ ಅಮಾನತು: ವಕೀಲರ ಪರಿಷತ್ ಆದೇಶಕ್ಕೆ ಹೈಕೋರ್ಟ್ ತಡೆ - High Court

author img

By ETV Bharat Karnataka Team

Published : Apr 29, 2024, 10:57 PM IST

ವಕೀಲ ಚಾಂದ್‌ ಪಾಷ ಅಮಾನತು: ವಕೀಲರ ಪರಿಷತ್ ಆದೇಶಕ್ಕೆ ಹೈಕೋರ್ಟ್ ತಡೆ
ವಕೀಲ ಚಾಂದ್‌ ಪಾಷ ಅಮಾನತು: ವಕೀಲರ ಪರಿಷತ್ ಆದೇಶಕ್ಕೆ ಹೈಕೋರ್ಟ್ ತಡೆ

ರಾಮನಗರ ವಕೀಲರ ಸಂಘದ ಸದಸ್ಯ, ವಕೀಲ ಚಾಂದ್‌ ಪಾಷ ಅವರ ವಕೀಲಿಕೆ ಅಮಾನತುಗೊಳಿಸಿದ್ದ ರಾಜ್ಯ ವಕೀಲರ ಪರಿಷತ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಬೆಂಗಳೂರು: ಫೆಬ್ರವರಿ ತಿಂಗಳಲ್ಲಿ ರಾಮನಗರ ವಕೀಲರ ಸಂಘದ ಪ್ರತಿಭಟನೆ ಕೇಂದ್ರಬಿಂದುವಾಗಿದ್ದ ಐಜೂರು ನಿವಾಸಿಯಾದ ವಕೀಲ ಚಾಂದ್​ ಪಾಷಾ ವಕೀಲಿಕೆ ಮಾಡದಂತೆ ಅಮಾನತು ಮಾಡಿ ಆದೇಶಿಸಿದ್ದ ರಾಜ್ಯ ವಕೀಲರ ಪರಿಷತ್ (ಕೆಎಸ್​ಬಿಸಿ) ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ. ಮಾರ್ಚ್ 30ರಂದು ಕೆಎಸ್​ಬಿಸಿ ಚಾಂದ್​ ಪಾಷಾರನ್ನು ವಕೀಲಿಕೆ ಮಾಡುವುದರಿಂದ ಅಮಾನತು ಮಾಡಿ ಆದೇಶಿಸಿತ್ತು. ಇದ್ದನ್ನು ಪ್ರಶ್ನಿಸಿ ಚಾಂದ್ ಪಾಷಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಅರ್ಜಿದಾರರ ಪರ ವಕೀಲರು ಕೆಎಸ್​ಬಿಸಿ ಆದೇಶ ಮಾಡುವುದಕ್ಕೂ ಮುನ್ನ ಯಾವುದೇ ನೋಟಿಸ್ ಜಾರಿ ಮಾಡಿಲ್ಲ. ಇದು ಸ್ವಾಭಾವಿಕ ನ್ಯಾಯ ತತ್ವಕ್ಕೆ ವಿರುದ್ಧವಾಗಿದೆ ಎಂದು ವಾದಿಸಿದ್ದಾರೆ. ಆದ್ದರಿಂದ, ಅರ್ಜಿದಾರರ ಕೋರಿಕೆಯಂತೆ ಮುಂದಿನ ವಿಚಾರಣೆವರೆಗೆ ಕೆಎಸ್​ಬಿಸಿ ಆದೇಶಕ್ಕೆ ತಡೆಯಾಜ್ಞೆ ವಿಧಿಸಲಾಗಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಜತೆಗೆ, ರಾಮನಗರ ವಕೀಲರ ಸಂಘ ಮತ್ತು ಕೆಎಸ್​ಬಿಸಿ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಏನಿದು ಪ್ರಕರಣ?: ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅಲ್ಲಿನ ಜಿಲ್ಲಾ ನ್ಯಾಯಾಲಯ ಜನವರಿ 31ರಂದು ಅವಕಾಶ ಕಲ್ಪಿಸಿ ಆದೇಶ ಮಾಡಿತ್ತು. ಇದಕ್ಕೆ ಆಕ್ಷೇಪಿಸಿ ರಾಮನಗರ ವಕೀಲರ ಸಂಘದ ಸದಸ್ಯ ಹಾಗೂ ಎಸ್​ಡಿಪಿಐ ಮುಖಂಡ ಚಾಂದ್​ ಪಾಷಾ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದರು. ಇದನ್ನು ಆಧರಿಸಿ ಬಿಜೆಪಿ ಮುಖಂಡ ಪಿ ಶಿವಾನಂದ ಅವರು ಪಾಷ ವಿರುದ್ಧ ರಾಮನಗರ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಪಾಷ ವಿರುದ್ಧ ದಾಖಲಾದ ಪ್ರಕರಣದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ವಕೀಲರ ಸಂಘವು ಅವರ ವಿರುದ್ಧ ಕ್ರಮ ಕೈಗೊಳ್ಳಲು ಫೆಬ್ರವರಿ 6ರಂದು ಸಂಜೆ ಸರ್ವ ಸದಸ್ಯರ ಸಭೆ ಕರೆದಿತ್ತು. ಆಗ, ದಲಿತ ಮತ್ತು ಪ್ರಗತಿಪರ ಮುಖಂಡರ ನಿಯೋಗವು ರಾಮನಗರ ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿಯನ್ನು ಭೇಟಿ ಮಾಡಿ, ಪ್ರಕರಣವನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳುವಂತೆ ಮನವಿ ಸಲ್ಲಿಸಿತ್ತು.

ಈ ವೇಳೆ ಕೆಲ ವಕೀಲರು ಪಾಷ ಪರವಾಗಿ ಬಂದಿದ್ದ ಮುಖಂಡರನ್ನು ಪ್ರಶ್ನಿಸಿದಾಗ, ವಾಗ್ವಾದ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಆವರಣಕ್ಕೆ ಅತಿಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಆರೋಪಿಸಿ, ವಕೀಲರ ಸಂಘದ ಅಧ್ಯಕ್ಷರು ಅಂದು ರಾತ್ರಿ ನೀಡಿದ ದೂರಿನ ಮೇರೆಗೆ, ಪಾಷ ಮತ್ತು 40 ಮುಖಂಡರ ವಿರುದ್ಧ ಐಜೂರು ಠಾಣೆ ಪಿಎಸ್ಐ ತನ್ವೀರ್ ಹುಸೇನ್ ಎಫ್ಐಆರ್ ದಾಖಲಿಸಿಕೊಂಡಿದ್ದರು. ಬಳಿಕ ವಕೀಲರ ಸಂಘಕ್ಕೆ ತೆರಳಿದ್ದವರ ಪೈಕಿ ರಫೀಕ್ ಖಾನ್ ಎಂಬುವರು, ವಕೀಲರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನ ಮೇರೆಗೆ ಪಿಎಸ್ಐ ಸಯ್ಯದ್ ಅವರು 40 ವಕೀಲರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದರಿಂದ ಕೆರಳಿದ ವಕೀಲರು ಪಿಎಸ್ಐ ಅಮಾನತಿಗೆ ಆಗ್ರಹಿಸಿ ಧರಣಿ ನಡೆಸಿದ್ದರು. ಇದಾದ ಬಳಿಕ ಕೆಎಸ್‌ಬಿಸಿಯು ಚಾಂದ್​ ಪಾಷಾ ಅವರನ್ನು ವಕೀಲಿಕೆ ಮಾಡುವುದರಿಂದ ಅಮಾನತು ಮಾಡಿ ಆದೇಶಿಸಿತ್ತು.

ಇದನ್ನೂ ಓದಿ: ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಆರೋಪಿಯ ಎಸ್‌ಡಿಎ ಹುದ್ದೆ ಮುಂದುವರೆಸುವ ಕೆಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.