ಬೆಂಗಳೂರು: ಕೋಮು ದ್ವೇಷ ಹರಡಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಶಾಸಕ ಪೂಂಜಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ಪೀಠ ಈ ಆದೇಶ ಮಾಡಿ, ವಿಚಾರಣೆಯನ್ನು ಜೂ.18ಕ್ಕೆ ಮುಂದೂಡಿತು.
ಅರ್ಜಿದಾರರ ವಿರುದ್ಧದ ದಾಖಲಾಗಿರುವ ಇತರೆ ಮೂರು ಎಫ್‌ಐಆರ್‌ಗಳಿಗೆ ಹೈಕೋರ್ಟ್ ಈಗಾಗಲೇ ತಡೆಯಾಜ್ಞೆ ನೀಡಿದೆ. ಅದನ್ನು ಪರಿಗಣಿಸಿ ಈ ಪ್ರಕರಣ ಸಂಬಂಧ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಲಾಗುತ್ತಿದೆ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ದೂರುದಾರ ಇಬ್ರಾಹಿಂ ಮೇ 4ರಂದು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿ, ಶಾಸಕ ಹರೀಶ್ ಪೂಂಜಾ ಮೇ 3ರಂದು ತೆಕ್ಕಾರುವಿನ ಭಟ್ರಬೈಲು ಎಂಬಲ್ಲಿ ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮ ಕಲಶೋತ್ಸವ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು. "ತೆಕ್ಕಾರಿನ ಕಂತ್ರಿ ಬ್ಯಾರಿಗಳು ಟ್ಯೂಬ್ಲೈಟ್ ಒಡೆದಿದ್ದಾರೆ. ಜನರೇಟರ್‌ನ ಡೀಸೆಲ್ ಕದ್ದಿದ್ದಾರೆ. ನಾವು ಮಸೀದಿಗೆ ಹೋಗಿ ಆಮಂತ್ರಣ ಕೊಟ್ಟಿದ್ದರಿಂದ ಬ್ಯಾರಿಗಳು ಟ್ಯೂಬ್ ಹೊಡೆದಿದ್ದಾರೆ. ಅವರಿಗೆ ಆಮಂತ್ರಣ ನೀಡಿ ಕಾರ್ಯಕ್ರಮಕ್ಕೆ ಕರೆಯಬಾರದಿತ್ತು. ಹಿಂದೂಗಳೇ ಅವರನ್ನು ಸೇರಿಸಬಾರದು" ಎಂಬುದಾಗಿ ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ಆರೋಪಿಸಿದ್ದರು.
"ಅಲ್ಲದೆ, ಪ್ರಸ್ತುತ ತೆಕ್ಕಾರಿನಲ್ಲಿ 1,200 ಮುಸ್ಲಿಮರಿದ್ದಾರೆ. ನಾವು ಹಿಂದೂಗಳು 150 ಮನೆಯವರು ಇದ್ದೇವೆ. ಮುಸ್ಲಿಮರು ಐದು ಸಾವಿರ ಅಲ್ಲ, 10 ಸಾವಿರ ಆದರೂ ಅವರನ್ನು ಹೆದರಿಸಿ. ನೀವು ಸನಾತನ ಹಿಂದೂ ಧರ್ಮವನ್ನು ಪಾಲನೆ ಮಾಡಿ, ದೇವರ ಪೂಜೆ ಮಾಡಿಕೊಂಡು ಬರಬೇಕು" ಎಂದು ಹರೀಶ್ ಪೂಂಜಾ ಹೇಳುವ ಮೂಲಕ ಎರಡು ಸಮುದಾಯಗಳ ನಡುವೆ ದ್ವೇಷ ಹರಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಆ ದೂರು ಪರಿಗಣಿಸಿದ್ದ ಪೊಲೀಸರು, ಹರೀಶ್ ಪೂಂಜಾ ವಿರುದ್ಧ ಧರ್ಮದ ಆಧಾರದಲ್ಲಿ ದ್ವೇಷ ಹರಡುವುದು, ದ್ವೇಷ ಹರಡಲು ಸುಳ್ಳು ಸುದ್ದಿ ಹಂಚಿಕೆ ಮಾಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದರು. ಅದನ್ನು ರದ್ದುಪಡಿಸುವಂತೆ ಕೋರಿ ಹರೀಶ್ ಪೂಂಜಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲು - MLA HARISH POONJA