ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಕರಾವಳಿ, ಮಲೆನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಅಕ್ಟೋಬರ್ 1ರಿಂದ ಹಿಂಗಾರು ಮಳೆ: ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆ ಸುರಿಯಲಿದೆ. ಈ ಬಾರಿ ಮುಂಗಾರು ಮುಗಿಯಲು 20 ದಿನಗಳಿವೆ. ಹಂತ ಹಂತವಾಗಿ ಈಗಾಗಲೇ ಮಳೆ ಸ್ವಲ್ಪಮಟ್ಟಿಗೆ ಕ್ಷೀಣಿಸುತ್ತಿದೆ. ಅಕ್ಟೋಬರ್ 1ರಿಂದ ರಾಜ್ಯದಲ್ಲಿ ಹಿಂಗಾರು (ಈಶಾನ್ಯ ಮಾನ್ಸೂನ್) ಆರಂಭವಾಗಲಿವೆ.
ಉತ್ತರ ಒಳನಾಡು ಪ್ರದೇಶದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ರೀತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಸೆ.17ರವರೆಗೆ ಇದೇ ರೀತಿಯ ವಾತಾವರಣ ಮುಂದುವರೆಯುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.
ರಾಜಧಾನಿ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇದ್ದು, ಹೆಚ್ಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.