ETV Bharat / state

ಗ್ರಾ.ಪಂ ಕುಂದುಕೊರತೆ ದಾಖಲಿಸಲು ವಾಟ್ಸ್​ಆ್ಯಪ್ ಚಾಟ್​ಬಾಟ್: 'ಪಂಚಮಿತ್ರ ಪೋರ್ಟಲ್'​ಗೆ ಚಾಲನೆ

author img

By ETV Bharat Karnataka Team

Published : Mar 1, 2024, 5:39 PM IST

Etv Bharat
Etv Bharat

ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಲು ದೇಶದಲ್ಲೇ ಪ್ರಪ್ರಥಮ ಬಾರಿಗೆ ವಾಟ್ಸ್​ಆ್ಯಪ್ ಚಾಟ್​ಬಾಟ್​ ಅನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಅನುಷ್ಠಾನಗೊಳಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಬೆಂಗಳೂರು: ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ಪರಿಹಾರ ಪಡೆಯಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ವಾಟ್ಸ್​ಆ್ಯಪ್​ ಚಾಟ್‌ಬಾಟ್‌ (Whatsapp Chatbot) ಪಂಚಮಿತ್ರ ಪೋರ್ಟಲ್​ಗೆ ಸಚಿವ ಪ್ರಿಯಾಂಕ್ ಖರ್ಗೆ ಇಂದು ಚಾಲನೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರು ಪೋರ್ಟಲ್ ಲೋಕಾರ್ಪಣೆಗೊಳಿಸಿದರು.

ಬಳಿಕ ಮಾತನಾಡಿ, "ಸಾರ್ವಜನಿಕರು ತಮಗೆ ಅವಶ್ಯಕತೆ ಇರುವ ಗ್ರಾಮ ಪಂಚಾಯಿತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು ಮತ್ತು ಗ್ರಾಮ ಪಂಚಾಯಿತಿಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್​ಸೈಟ್‌ ಮತ್ತು ಪೋರ್ಟಲ್​ಗಳಿಗೆ ಭೇಟಿ ನೀಡಬೇಕಾಗಿತ್ತು. ಅಲ್ಲದೇ, ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್​ಸೈಟ್‌ ಅಥವಾ ಪೋರ್ಟಲ್​ಗಳು ಇರಲಿಲ್ಲ" ಎಂದರು.

Minister Priyank Kharge  launched  Panchamitra portal
ಪಂಚಮಿತ್ರ ಪೋರ್ಟಲ್

"ಸದ್ಯ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್​ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಲು, ದೇಶದಲ್ಲೇ ಪ್ರಪ್ರಥಮ ಬಾರಿಗೆ ವಾಟ್ಸ್​ಆ್ಯಪ್ ಚಾಟ್​ಬಾಟ್​ ಅನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಅಭಿವೃದ್ಧಿಪಡಿಸಿ, ಅನುಷ್ಠಾನಗೊಳಿಸಿದೆ" ಎಂದು ಮಾಹಿತಿ ನೀಡಿದರು.

"ಪಂಚಮಿತ್ರ ವಾಟ್ಸ್​ಆ್ಯಪ್ ಚಾಟ್ ಸಂಖ್ಯೆ: 8277506000 ಆಗಿದ್ದು, ಇನ್ನು ಮುಂದೆ ಗ್ರಾಮ ಪಂಚಾಯಿತಿಗಳ ಮಾಹಿತಿ ಮತ್ತು ವಿವರಗಳನ್ನು, ಸೇವೆಗಳಿಗೆ ಅರ್ಜಿ ಮತ್ತು ಕುಂದುಕೊರತೆಗಳನ್ನು ವಾಟ್ಸ್​ಆ್ಯಪ್ ಮೂಲಕ ದಾಖಲಿಸಬಹುದಾಗಿದೆ. ಗ್ರಾಮ ಪಂಚಾಯಿತಿಗಳ ಮಾಹಿತಿ ಮತ್ತು ವಿವರಗಳನ್ನು ಪಡೆಯಬಹುದಾಗಿದೆ. ಚುನಾಯಿತ ಪ್ರತಿನಿಧಿಗಳ ವಿವರಗಳು, ಸಿಬ್ಬಂದಿಗಳ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯಿತಿ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯಿತಿಗಳ ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಸೇವೆಗಳ ವಿವರಗಳು, ಸ್ವ-ಸಹಾಯ ಗುಂಪಿನ ವಿವರಗಳು 4 (1) (a) & 4 (1) (b) RTI ದಾಖಲೆಗಳು, ವಾಟ್ಸ್​ಆ್ಯಪ್ ಮೂಲಕ ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಿ, ಸೇವೆಗಳನ್ನು ಪಡೆಯಬಹುದಾಗಿದೆ. ಅರ್ಜಿಗಳ ಸ್ಥಿತಿಗತಿಯನ್ನು ಸಹ ಪರಿಶೀಲಿಸಬಹುದಾಗಿದೆ" ಎಂದು ತಿಳಿಸಿದರು.

Minister Priyank Kharge  launched  Panchamitra portal
ಸಚಿವ ಪ್ರಿಯಾಂಕ್ ಖರ್ಗೆ

"ವಾಟ್ಸ್​ಆ್ಯಪ್ ಮೂಲಕ ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದಂತೆ ಕುಡಿಯುವ ನೀರು, ರಸ್ತೆ ಮತ್ತು ಸೇತುವೆಗಳ ದುರಸ್ತಿ, ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಗೆ ಮತ್ತು ಪಂಚಾಯತ್‌ ರಾಜ್‌ ವಿಷಯಗಳಿಗೆ ಸಂಬಂಧಿತ 78 ವ‌ರ್ಗಗಳ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಬಹುದಾಗಿದೆ ಹಾಗೂ ಕುಂದುಕೊರತೆಯ ಸ್ಥಿತಿಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಬಹುದಾಗಿದೆ" ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿಗೆ ಜಲಕ್ಷಾಮ; ಹಲವೆಡೆ ಹನಿ ನೀರಿಗೂ ಹಾಹಾಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.