ETV Bharat / state

ಸಚಿವರು, ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ: ಚು.ಆಯೋಗಕ್ಕೆ ಬಿಜೆಪಿ ದೂರು - BJP Complaint

author img

By ETV Bharat Karnataka Team

Published : Mar 31, 2024, 2:26 PM IST

ಸಚಿವರು ಮತ್ತು ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ, ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ನೀಡಿದೆ.

BJP DELEGATION COMPLAINS  ELECTION COMMISSION  OFFICES OF MINISTERS AND MLA  BENGALURU
ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರು ಮತ್ತು ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ ಮುಂದುವರೆದಿರುವ ಕುರಿತು ಬಿಜೆಪಿ ನಿಯೋಗ ಇಂದು ರಾಜ್ಯದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ. ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಆಗಮಿಸಿದ ಮಾಜಿ ಸಚಿವ ಸುರೇಶ್ ಕುಮಾರ್ ನೇತೃತ್ವದ ನಿಯೋಗ ಕಾಂಗ್ರೆಸ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ದೂರು ನೀಡಿತು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿಯೆಂದು ಭಾವಿಸಿರುವಂತೆ ಕಾಣುತ್ತಿದೆ. ಮಾರ್ಚ್ 30​ರಂದು ಡಿಕೆಶಿ ವಿಧಾನಸೌಧದ ಕಚೇರಿಯಲ್ಲಿ ನಜ್ಮಾ ನಜೀರ್ ಚಿಕ್ಕನೇರಳೆ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಂಡು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

ಡಿ.ಕೆ.ಶಿವಕುಮಾರ್ ರಾಜ್ಯದ ಜವಾಬ್ದಾರಿಯುತ ಸಚಿವರು. ಅವರಿಗೆ ಸರ್ಕಾರಿ ಕಚೇರಿಯನ್ನು ಪಕ್ಷದ ಚಟುವಟಿಕೆ ಬಳಕೆ ಮಾಡಬಾರದು ಎಂದು ತಿಳಿದಿದೆ. ಹಾಗಿದ್ದರೂ ನೀತಿ ಸಂಹಿತೆಯನ್ನು ಧಿಕ್ಕರಿಸಿ ರಾಜಕೀಯ ಕಾರ್ಯಕ್ರಮವನ್ನು ನಡೆಸಿದ್ದಾರೆ. ರಾಜ್ಯದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರ ಮೂಗಿನಡಿಯಲ್ಲಿಯೇ ಇದು ನಡೆದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂಬುದನ್ನು ಆಯೋಗದ ಗಮನಕ್ಕೆ ಬಿಜೆಪಿ ತಂದಿದೆ.

ಲೋಕಸಭಾ ಚುನಾವಣೆಗಳು ಘೋಷಣೆಯಾಗಿ ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಆದರೆ ಚುನಾವಣಾ ನೀತಿ ಸಂಹಿತೆಯ ಕಟ್ಟುನಿಟ್ಟನ ಜಾರಿಯಾಗುವುದರಲ್ಲಿ ಸರಕಾರದ ಅಧಿಕಾರಿಗಳಿಂದ ಕೊರತೆ ಎದ್ದು ಕಾಣುತ್ತಿದೆ. ಹಲವಾರು ಆಡಳಿತ ಪಕ್ಷದ ಶಾಸಕರ ಕಚೇರಿಗಳಲ್ಲಿ ಪಕ್ಷದ ಚಟುವಟಿಕೆಗಳು ಇನ್ನೂ ಮುಂದುವರೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಚಿವರು ವಿಕಾಸಸೌಧದಿಂದ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಇದಕ್ಕೆ ಉದಾಹರಣೆ ಮಾರ್ಚ್ 25ರಂದು ಕಂದಾಯ ಸಚಿವ ಕೃಷ್ಣಭೈರೆಗೌಡ ಅವರು ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸರಕಾರದ ವಿರುದ್ದ ಟೀಕೆ ಮಾಡಿರುವುದು. ಚುನಾವಣಾ ಆಯೋಗ ಕೂಡಲೇ ವಿಧಾನಸೌಧ ಸಚಿವರ ಕಚೇರಿಗಳನ್ನು ಕೂಡಲೇ ಮುಚ್ಚಿಸಬೇಕು. ಸರ್ಕಾರಿ ಕಟ್ಟಡಗಳಲ್ಲಿ ಸಚಿವರಿಗೆ ಮತ್ತು ಶಾಸಕರಿಗೆ ಯಾವುದೇ ರಾಜಕೀಯ ಚಟುವಟಿಕೆ ನಡೆಸದಂತೆ ನಿರ್ಬಂಧ ಹೇರಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕುರಿತು ಸೂಕ್ತ ನಿರ್ದೇಶನ ನೀಡಲು ಕೋರಿದ್ದು, ನಿಯಮವನ್ನು ಮೀರಿ ಅವಕಾಶ ಮಾಡಿಕೊಡುತ್ತಿರುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಯಿತು.

ಬಿಜೆಪಿ ನಿಯೋಗದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರರಾದ ಪ್ರಕಾಶ್ ಶೇಷರಾಘವಾಚಾರ್, ಹೆಚ್.ಎನ್. ಚಂದ್ರಶೇಖರ್, ಬೆಂಗಳೂರು ದಕ್ಷಿಣ ಜಿಲ್ಲಾ ವಕ್ತಾರ ಟಿ.ಎಸ್.ಸಂಕೀರ್ತ್ ಅವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ - Congress Star Campaigners List

ETV Bharat Logo

Copyright © 2024 Ushodaya Enterprises Pvt. Ltd., All Rights Reserved.