ರಾಮನಗರ: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಇಂದು (ಗುರುವಾರ) ಒಪ್ಪಿಗೆ ನೀಡುತ್ತಿದ್ದಂತೆ ಜಿಲ್ಲೆಯಲ್ಲಿ ಸಂಭ್ರಮಾಚರಣೆ ಜೋರಾಗಿತ್ತು. ರಾಮನಗರದಲ್ಲಿ ಜನರು ಪಟಾಕಿ ಸಿಡಿಸಿ ಸರ್ಕರದ ನಿರ್ಧಾರವನ್ನು ಸಂಭ್ರಮಿಸಿದರು.
ಈ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಇಕ್ಬಾಲ್ ಹುಸೇಸ್, ಈ ಹೊಸ ಜಿಲ್ಲೆಗೆ ಕೇಂದ್ರ ಸರ್ಕಾರ ವಿರೋಧಿಸಿತ್ತು. ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಯಾವುದೇ ಅಧಿಕಾರ ಇರುವುದಿಲ್ಲ. ಅವರಿಗೆ ಮಾಹಿತಿ ನೀಡುವ ಉದ್ದೇಶದಿಂದ ಪ್ರಸ್ತಾವನೆ ಕಳುಹಿಸಿದ್ದೆವು. ಆದರೆ ಕೆಲವರು ರಾಜಕೀಯ ಮಾಡುವ ಪ್ರಯತ್ನ ಮಾಡಿದರು. ಇದು ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ಇನ್ನು ಮುಂದೆ ಎಲ್ಲಾ ದಾಖಲೆಗಳಲ್ಲೂ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆಯಾಗಲಿದೆ. ಈ ಜಿಲ್ಲೆ ವಿಶ್ವ ಮಟ್ಟದಲ್ಲಿ ಹೆಸರು ಪಡೆಯಲಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ರೇಷ್ಮನಗರಿ ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಮುಂದುವರಿಯಲಿದೆ. ಕೇವಲ ಜಿಲ್ಲೆಯ ಹೆಸರನ್ನು ಮಾತ್ರ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದೆ. ಈ ಹಿಂದೆ ಇದು ಬೆಂಗಳೂರು ಜಿಲ್ಲೆಯಾಗಿತ್ತು. ಆಡಳಿತಾತ್ಮಕ ದೃಷ್ಟಿಯಿಂದ ಈ ಹೆಸರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಾಗಿದೆ. ಈ ಮರುನಾಮಕರಣ ಮಾಡುತ್ತಿರುವ ವಿಚಾರವನ್ನು ತಿಳಿಸಲು ಸಂತೋಷವಾಗುತ್ತಿದೆ ಎಂದು ಹೇಳಿದರು.
ಕಾನೂನು ಚೌಕಟ್ಟಿನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ -ಡಿಕೆಶಿ: ನಮ್ಮದು ಮೊದಲು ಬೆಂಗಳೂರು ಜಿಲ್ಲೆಯಾಗಿತ್ತು. ನಾನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷನಾಗಿದ್ದೆ. ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ರಾಮನಗರ, ಕನಕಪುರ, ಮಾಗಡಿ ಇವೆಲ್ಲವೂ ಬೆಂಗಳೂರಿನ ಭಾಗವಾಗಿತ್ತು. ಆ ಹೆಸರನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ. ಹೀಗಾಗಿ ಜಿಲ್ಲೆಯನ್ನು ಕಾನೂನು ಚೌಕಟ್ಟಿನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದರು.
ಇದನ್ನೂ ಓದಿ: ರಾಮನಗರ 'ಬೆಂಗಳೂರು ದಕ್ಷಿಣ ಜಿಲ್ಲೆ'ಯಾಗಿ ಮರು ನಾಮಕರಣ: ಸಂಪುಟ ಸಭೆ ತೀರ್ಮಾನ - RAMANAGARA RENAMED BENGALURU SOUTH