ಬೆಂಗಳೂರು: ಸಾರಿಗೆ ನೌಕರರಿಗೆ ಸಮಾನ ವೇತನ ಜಾರಿ ಸೇರಿದಂತೆ ಎಲ್ಲಾ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಸರ್ಕಾರಿ ನಿವಾಸ ಕಾವೇರಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳೊಂದಿಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಿತು. ಈ ವೇಳೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಯಾವತ್ತೂ ದುಡಿಯುವ ವರ್ಗದ ಪರವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಹಿಂದಿನ ಸರ್ಕಾರ ಸಾವಿರಾರು ಕೋಟಿ ಬಾಕಿ ಬಿಲ್ಲುಗಳನ್ನು ಉಳಿಸಿ ಹೋಗಿದೆ. ಇದು ಸರ್ಕಾರದ ಮೇಲೆ ಆರ್ಥಿಕ ಹೊರೆ ಉಂಟು ಮಾಡಿದೆ. ಸರ್ಕಾರದ ಇತಿಮಿತಿಯ ಒಳಗಾಗಿ ಬೇಡಿಕೆಗಳನ್ನು ಪರಿಶೀಲಿಸಲಾಗುವುದು ಎಂದರು.
ಹಿಂದಿನ ಸರ್ಕಾರ ಬಾಕಿ ಉಳಿಸಿತ್ತು: ಸಾರಿಗೆ ನೌಕರರಿಗೆ ಸಮಾನ ವೇತನ ಜಾರಿ ಸೇರಿದಂತೆ ಎಲ್ಲಾ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಬೇಡಿಕೆಗಳ ಈಡೇರಿಕೆ ಕುರಿತಾಗಿ ಇನ್ನೊಮ್ಮೆ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆಯನ್ನು ಆದಷ್ಟು ಬೇಗನೆ ಕರೆಯಲಾಗುವುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸಂಸ್ಥೆಗೆ ರೂ. 4ಸಾವಿರ ಕೋಟಿಯಷ್ಟು ಮೊತ್ತವನ್ನು ಹಿಂದಿನ ಸರ್ಕಾರ ಬಾಕಿ ಉಳಿಸಿ ಹೋಗಿತ್ತು. ಸಂಸ್ಥೆಯನ್ನು ಬಲಪಡಿಸಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಮೆಕ್ಯಾನಿಕ್ಗಳ ನೇಮಕಾತಿಗೆ ಅನುಮತಿ: ನೌಕರರಿಗೆ ನಗದು ರಹಿತ ಚಿಕಿತ್ಸೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ವರ್ಷದ ಬಜೆಟ್ನಲ್ಲಿ 350 ಕೋಟಿ ರೂ. ಸಾಲ ಪಡೆಯಲು ಸಂಸ್ಥೆಗೆ ಅನುಮತಿ ನೀಡಲಾಗಿದೆ. ಸಂಸ್ಥೆಯನ್ನು ಇನ್ನಷ್ಟು ಬಲಪಡಿಸಲು 2 ಸಾವಿರ ಬಸ್ಗಳನ್ನು ಹೊಸದಾಗಿ ಖರೀದಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದರು. ಚಾಲಕ ಮತ್ತು ನಿರ್ವಾಹಕರ ಮಾದರಿಯಲ್ಲಿ ಮೆಕ್ಯಾನಿಕ್ಗಳ ನೇಮಕಾತಿಗೆ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಕಾರ್ಮಿಕ ಸಮಿತಿ ಪ್ರತಿನಿಧಿಗಳ ಮನವಿ ಏನು?: 1/01/2024ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳ ಮತ್ತು ನೌಕರರ ವೇತನ ಪರಿಷ್ಕರಣೆ ಮಾಡಬೇಕು. ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನವನ್ನು ಸಾರಿಗೆ ನೌಕರರಿಗೂ ಜಾರಿಗೊಳಿಸಬೇಕು. 1.01.2020ರಿಂದ ಜಾರಿಯಾಗಬೇಕಾದ ವೇತನ ಪರಿಷ್ಕರಣೆ 01.03.2023ರಿಂದ ಅನುಷ್ಠಾನಕ್ಕೆ ಬಂದಿದ್ದು, 38 ತಿಂಗಳ ಬಾಕಿ ಹಣವನ್ನು ಪಾವತಿಸಬೇಕು. ಈ ಹಿಂದೆ 2020 ಮತ್ತು 2021ರ ಸಾರಿಗೆ ಮುಷ್ಕರ ಸಂದರ್ಭದಲ್ಲಿ ನೌಕರರ ಮೇಲೆ ಹಾಕಲಾಗಿರುವ ಎಲ್ಲಾ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಬೇಕು. ಸಾರಿಗೆ ನಿಗಮದ ವಿದ್ಯುತ್ ಬಸ್ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು. ಸದರಿ ಬಸ್‌ಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ದತಿಯನ್ನು ಕೈಬಿಡಬೇಕು ಎಂದು ಕಾರ್ಮಿಕ ಸಮಿತಿಗಳ ಪ್ರತಿನಿಧಿಗಳು ಮನವಿ ಮಾಡಿದರು.
ಸಭೆಯಲ್ಲಿ ಸಚಿವರಾದ ಜಿ.ಪರಮೇಶ್ವರ್, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜ್, ನಸೀರ್ ಅಹ್ಮದ್, ಸಾರಿಗೆ ನಿಗಮಗಳ ಅಧ್ಯಕ್ಷರಾದ ಎಸ್.ಆರ್.ಶ್ರೀನಿವಾಸ್, ರಾಜು ಕಾಗೆ, ಕಾರ್ಮಿಕ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಸಿಎಂ ಜೊತೆಗಿನ ಲಾರಿ ಮಾಲೀಕರ ಸಂಘದ ಸಂಧಾನ ಸಭೆ ವಿಫಲ: ಮುಷ್ಕರ ಮುಂದುವರಿಸಲು ನಿರ್ಧಾರ