ETV Bharat / state

ಎರಡನೇ ಹಂತದ ಚುನಾವಣೆ: ಮೂರು ಪಕ್ಷಗಳ ನಾಯಕರ ಪ್ರಚಾರ ಉತ್ತರಕರ್ನಾಟಕ, ಮಧ್ಯ ಕರ್ನಾಟಕದ ಕಡೆ ಕೇಂದ್ರೀಕೃತ - LOK SABHA ELECTION 2024

author img

By ETV Bharat Karnataka Team

Published : Apr 29, 2024, 7:55 PM IST

ಎರಡನೇ ಹಂತದ ಚುನಾವಣೆ
ಎರಡನೇ ಹಂತದ ಚುನಾವಣೆ

ಎರಡನೇ ಹಂತದ ಚುನಾವಣೆಗೆ ರಾಜ್ಯ ಸಿದ್ಧವಾಗಿದ್ದು, 14 ಲೋಕಸಭಾ ಕ್ಷೇತ್ರಗಳಲ್ಲಿ ಮೂರು ಪಕ್ಷದ ನಾಯಕರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಬೆಂಗಳೂರು: ಮೇ 7 ರಂದು ರಾಜ್ಯದಲ್ಲಿ ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಸಚಿವರು, ಶಾಸಕರು, ಪಕ್ಷದ ಮುಖಂಡರ ಪ್ರಚಾರ ಉತ್ತರಕರ್ನಾಟಕ, ಮಧ್ಯ ಕರ್ನಾಟಕದ ಕಡೆ ಕೇಂದ್ರಿಕೃತವಾಗಿದೆ‌.

ಎರಡನೇ ಹಂತದಲ್ಲಿ ಸುಮಾರು 2.50 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಉತ್ತರಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ ಹಾಗೂ ಧಾರವಾಡ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ ಕಣದಲ್ಲಿ 227 ಅಭ್ಯರ್ಥಿಗಳಿದ್ದಾರೆ. ಇವರ ಪೈಕಿ 206 ಪುರುಷ ಅಭ್ಯರ್ಥಿಗಳು ಹಾಗೂ 21 ಮಹಿಳಾ ಅಭ್ಯರ್ಥಿಗಳು ಸೇರಿದ್ದಾರೆ. ಎರಡನೇ ಹಂತದ ಚುನಾವಣೆಗಾಗಿ 28,269 ಮತಗಟ್ಟೆಗಳನ್ನು ತೆರೆಯಲಾಗಿದೆ.

ನೇರ ಹಣಾಹಣಿ: 12 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಬಂಡಾಯದ ಕಾರಣ ಶಿವಮೊಗ್ಗ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಇದೆ. ಈ ನಡುವೆ ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಮತದಾನಕ್ಕಾಗಿ ಜಿಲ್ಲೆಗಳಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಮಧ್ಯ ಹಾಗೂ ಉತ್ತರ ಕರ್ನಾಟಕದತ್ತ ಲಗ್ಗೆಯಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿ.ಎಂ.ಗಳಾದ ಯಡಿಯೂರಪ್ಪ, ಹೆಚ್‌.ಡಿ. ಕುಮಾರಸ್ವಾಮಿ, ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಘಟಾನುಘಟಿ ನಾಯಕರು ಆಖಾಡಕ್ಕಿಳಿದಿದ್ದಾರೆ.

ಕುತೂಹಲ ಕೆರಳಿಸಿದ ಕ್ಷೇತ್ರಗಳು: ಶಿವಮೊಗ್ಗ, ಬೆಳಗಾವಿ, ಚಿಕ್ಕೋಡಿ, ಹಾವೇರಿ ಹಾಗೂ ದಾವಣಗೆರೆ ತೀವ್ರ ಕುತೂಹಲ ಕೆರಳಿಸಿದ ಕ್ಷೇತ್ರಗಳಾಗಿವೆ. ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ ಕಣದಲ್ಲಿದ್ದರೆ, ಚಿಕ್ಕೋಡಿಯಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಪುತ್ರಿ ಕಣದಲ್ಲಿದ್ದಾರೆ. ಅಲ್ಲದೆ ಬೀದರ್‌ನಲ್ಲಿ ಸಚಿವ ಈಶ್ವರ್‌ ಖಂಡ್ರೆ ಪುತ್ರ ಅಖಾಡಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಘಟನಾನುಘಟಿ ನಾಯಕರು ಈ ಕ್ಷೇತ್ರಗಳತ್ತ ದೌಡಾಯಿಸಿದ್ದಾರೆ. ಇನ್ನು ಬಿಜೆಪಿಗೂ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ. ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಬಂಡಾಯ ಸಾರಿದ್ದಾರೆ. ಬಿ.ವೈ ರಾಘವೇಂದ್ರ ವಿರುದ್ಧ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಎದುರಾಳಿಯಾಗಿದ್ದಾರೆ. ಹೀಗಾಗಿ ಎಲ್ಲರ ಚಿತ್ತ ಈ ಕ್ಷೇತ್ರದತ್ತ ನೆಟ್ಟಿದೆ.

ಬಿರುಸಿನ ಮತಬೇಟೆ: ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಮೂರು ಪಕ್ಷಗಳ ನಾಯಕರು ಬಿರುಸಿನ ಮತ ಬೇಟೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎರಡನೇ ಹಂತದ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದಾರೆ. ಇನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್‌ ಅವರಿಗೂ ಈ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದು ಅನಿವಾರ್ಯವಾಗಿದೆ. ಇನ್ನುಳಿದಿರುವ ಎಂಟು ದಿನಗಳ ಕಾಲ ಅವರು ಕಲ್ಯಾಣ ಕರ್ನಾಟಕ, ಉತ್ತರ ಕನ್ನಡ ಹಾಗೂ ಮಲೆನಾಡಿನ ಈ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಬೆಳಗಾವಿ ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲೂ ಬಿಜೆಪಿ ತನ್ನದೆಯಾದ ಪ್ರಭಾವ ಹೊಂದಿದೆ. ಹೀಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಈ ಬಾರಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಅವರನ್ನು ಕಣಕ್ಕಿಳಿಸಿ, ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರನ್ನು ಮಣಿಸಲು ರಣತಂತ್ರ ರೂಪಿಸಿದ್ದಾರೆ.

ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶಿವಮೊಗ್ಗ ಹಾಗೂ ಕಾಂಗ್ರೆಸ್‌ ಟಿಕೆಟ್‌ ದೊರೆಯದ ಹಿನ್ನೆಲೆಯಲ್ಲಿ ಶಿಕ್ಷಣ ತಜ್ಞ ವಿನಯ್‌ ಕುಮಾರ್‌ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದಾವಣಗೆರೆ ಬಿಟ್ಟರೆ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ.

ಇದನ್ನೂ ಓದಿ: ನಿಮ್ಮ ವೋಟು ಬೊಮ್ಮಾಯಿಯವರನ್ನು ಕೇಂದ್ರದಲ್ಲಿ ಮಂತ್ರಿ ಮಾಡುತ್ತೆ: ಸಂಸದ ಪ್ರತಾಪ್​ ಸಿಂಹ - pratap simha

ETV Bharat Logo

Copyright © 2024 Ushodaya Enterprises Pvt. Ltd., All Rights Reserved.