ETV Bharat / state

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಪ್ರಕರಣ: ವಿಚಾರಣೆ ಫೆ. 29ಕ್ಕೆ ಮುಂದೂಡಿದ ಹೈಕೋರ್ಟ್

author img

By ETV Bharat Karnataka Team

Published : Feb 12, 2024, 3:11 PM IST

ಡಿಕೆಶಿ ಹಾಗೂ ಹೈಕೋರ್ಟ್
ಡಿಕೆಶಿ ಹಾಗೂ ಹೈಕೋರ್ಟ್​

ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಹೈಕೋರ್ಟ್​ ಫೆಬ್ರವರಿ 29ಕ್ಕೆ ಮುಂದೂಡಿದೆ.

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ, ಸಿಬಿಐ ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ಕುರಿತಂತೆ ವಾದ ಮಂಡಿಸಲು ಸರ್ಕಾರ ಕಾಲಾವಕಾಶ ಕೋರಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಉಮೇಶ್ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕಾಲಾವಕಾಶ ಕೋರಿದರು. ಇದನ್ನು ಮನ್ನಿಸಿದ ನ್ಯಾಯಪೀಠ ವಿಚಾರಣೆಯನ್ನು ಫೆಬ್ರವರಿ 29ಕ್ಕೆ ಮುಂದೂಡಿತು. ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ಡಿ. ಕೆ ಶಿವಕುಮಾರ್ ಪರ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಈ ನಡುವೆ ಲೋಕಾಯುಕ್ತ ಎಡಿಜಿಟಿ ಮಧ್ಯಪ್ರವೇಶಿಕೆ ಕೋರಿರುವ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಲೋಕಾಯುಕ್ತದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವೆಂಕಟೇಶ್ ಅರಬಟ್ಟಿ ಅವರಿಗೆ ನೋಟಿಸ್ ಪಡೆಯಲು ಸೂಚಿಸಲಾಗಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿ ಅವರಿಗೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸಲು ನ್ಯಾಯಾಲಯ ಸೂಚಿಸಿತು. ಆಕ್ಷೇಪಣೆ, ಪ್ರತ್ಯುತ್ತರ ಸಲ್ಲಿಸಲು ಕಾಲಾವಕಾಶ ನೀಡಿ, ಅಂತಿಮವಾಗಿ ವಿಚಾರಣೆಯನ್ನು ಮುಂದೂಡಿತು.

ಪ್ರಕರಣದ ಹಿನ್ನೆಲೆ ಏನು?: 2019ರಲ್ಲಿ ಬಿಜೆಪಿ ಸರ್ಕಾರವು ಡಿ ಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆ ಸಿಬಿಐಗೆ ಅನುಮತಿಸಿತ್ತು. ಇದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾ ಮಾಡಿತ್ತು. ಆನಂತರ ಇದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಮಧ್ಯೆ, ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್ 28ರಂದು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್ ಮೇಲ್ಮನವಿ ಹಿಂಪಡೆದಿದ್ದರು.

ಹೀಗಾಗಿ ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಶಾಸಕ ಯತ್ನಾಳ್ ಅವರು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದೀಗ ಸಿಬಿಐ ಸಹ ಹೈಕೋರ್ಟ್ ಮೆಟ್ಟಿಲೇರಿದೆ.

ಈ ಹಿಂದೆ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕು ಎಂದು ತಿಳಿಸಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಇರಿಸಲಾಗಿತ್ತು. ಇದೀಗ ಅರ್ಜಿ ನ್ಯಾಯಮೂರ್ತಿ ಕೆ. ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ : ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿರುವಾಗ ಜೀವನಾಂಶ ನೀಡಲು ನಿರಾಕರಿಸುವಂತಿಲ್ಲ : ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.