ETV Bharat / education-and-career

ನಾಳೆ ಕೆ-ಸೆಟ್​ ಪರೀಕ್ಷೆ; 11 ಜಿಲ್ಲೆಗಳ 326 ಕೇಂದ್ರದಲ್ಲಿ ಕಟ್ಟುನಿಟ್ಟಿನ ನಿಗಾ

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ 1.29 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಭಾನುವಾರ ಪರೀಕ್ಷೆ ನಡೆಯಲಿದೆ.

KEA will conduct Kset Exam for lecture post in degree colleges
ಪ್ರಾತಿನಿಧಿಕ ಚಿತ್ರ (ETV BHARAT)
author img

By ETV Bharat Karnataka Team

Published : October 10, 2026 at 3:01 PM IST

1 Min Read
Choose ETV Bharat

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯಿಂದ ಪ್ರಸಕ್ತ ಸಾಲಿನ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್​​) ಪರೀಕ್ಷೆ ಇದೇ ಭಾನುವಾರ ಅಕ್ಟೋಬರ್​ 11ರಂದು ನಡೆಯುತ್ತಿದೆ. ಪರೀಕ್ಷೆ ಹಿನ್ನೆಲೆ ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ.

ಒಟ್ಟು 37 ವಿವಿಧ ವಿಷಯಗಳಿಗೆ ನಡೆಯುವ ಕೆ ಸೆಟ್ ಪರೀಕ್ಷೆಗೆ 1,29,212 ಮಂದಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದ 11 ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರು ಉತ್ತರ ಮತ್ತು ದಕ್ಷಿಣ, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ 326 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಬೆಂಗಳೂರಿನಲ್ಲಿ ಎಲ್ಲ 37 ವಿಷಯಗಳ ಪರೀಕ್ಷೆ ನಡೆದರೆ, ಉಳಿದ ಜಿಲ್ಲೆಗಳಲ್ಲಿ 13 ವಿಷಯಗಳ ಪರೀಕ್ಷೆಗಳು ಮಾತ್ರ ನಡೆಯಲಿವೆ. ಬೆಳಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ಪರೀಕ್ಷೆ ನಡೆಯಲಿದ್ದು, ಒಮ್ಮೆಗೇ ಎರಡೂ ಪತ್ರಿಕೆಗಳ (ಪತ್ರಿಕೆ 1 ಮತ್ತು 2) ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಮೂರು ಗಂಟೆ ಅವಧಿಯಲ್ಲಿ 100 ಅಂಕಗಳ ಸಾಮಾನ್ಯ ಜ್ಞಾನ ಮತ್ತು 200 ಅಂಕಗಳ ವಿಷಯವಾರು ಪತ್ರಿಕೆಗಳಿಗೆ ಉತ್ತರಿಸಬೇಕಾಗುತ್ತದೆ. ಎರಡೂ ಪತ್ರಿಕೆಗಳಿಗೆ ಪ್ರತ್ಯೇಕ ಓಎಂಆರ್‌ ನೀಡುತ್ತಿದ್ದು, ಆಯಾಯ ಒಎಂಆರ್‌ ನಲ್ಲೇ ಅವುಗಳ ಉತ್ತರಗಳನ್ನು ಎಚ್ಚರಿಕೆಯಿಂದ ದಾಖಲಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಈ ಹಿಂದಿನ ಎಲ್ಲ ಪರೀಕ್ಷೆಗಳ ಹಾಗೆಯೇ ಈ ಪರೀಕ್ಷೆಗೂ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳ ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳನ್ನು ಮುಖ ಚಹರೆ ಪತ್ತೆ ಮೂಲಕ ತೀವ್ರ ಶೋಧ ನಡೆಸಿಯೇ ಒಳ ಬಿಡಲಾಗುತ್ತದೆ. ಇದಕ್ಕೆ ಅಗತ್ಯ ಪೊಲೀಸ್‌ ಮತ್ತು ಗೃಹ ರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: KSET 2026ರ​ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ KEA: ಇಲ್ಲಿದೆ ಸಂಪೂರ್ಣ ಮಾಹಿತಿ