ಬಿಕ್ಲು ಶಿವು ಕೊಲೆ ಪ್ರಕರಣ: ಬೈರತಿ ಬಸವರಾಜು ನಿರೀಕ್ಷಣಾ ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್ಗೆ ಮನವಿ
ಬೈರತಿ ಬಸವರಾಜು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಾದ ಅಗತ್ಯವಿದೆ. ಆದ್ದರಿಂದ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನು ರದ್ದುಪಡಿಸಬೇಕೆಂದು ಹೈಕೋರ್ಟ್ಗೆ ಮನವಿ ಮಾಡಲಾಗಿದೆ.

Published : January 6, 2026 at 4:32 PM IST
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಮಾಜಿ ಸಚಿವ ಬೈರತಿ ಬಸವರಾಜು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಾಗಿದ್ದು, ಅವರಿಗೆ ಈಗಾಗಲೇ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನನ್ನು ವಿಸ್ತರಣೆ ಮಾಡದಂತೆ ಕೋರಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮನವಿ ಮಾಡಿದೆ.
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಬೈರತಿ ಬಸವರಾಜು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ರಜಾ ಕಾಲದ ನ್ಯಾಯಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದ ಮಧ್ಯಂತರ ಆದೇಶ ರದ್ದುಪಡಿಸಬೇಕು ಎಂದು ಕೋರಿ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರಿದ್ದ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ, ಮಧ್ಯಂತರ ಜಾಮೀನು ರದ್ದುಕೋರಿ ಆಕ್ಷೇಪಣೆ ಸಲ್ಲಿಸಿದ ಸರ್ಕಾರದ ಪರ ವಕೀಲರು, ಅರ್ಜಿದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಾದ ಅಗತ್ಯವಿದೆ. ಆದ್ದರಿಂದ ಈಗಾಗಲೇ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನು ರದ್ದುಪಡಿಸಬೇಕು ಎಂದು ಕೋರಿದರು. ಇದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿದರು.
ಅರ್ಜಿದಾರರ ಪರ ವಕೀಲರು, ಕೋಕಾ ಕಾಯಿದೆ ರದ್ದಾದ ಬಳಿಕ ನಿರೀಕ್ಷಣಾ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ವೇಳೆ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಅರ್ಜಿದಾರರು ಮತ್ತು 20ನೇ ಆರೋಪಿಯನ್ನು ಹೊರತುಪಡಿಸಿ ಇತರೆ ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಈ ನಡುವೆ ಅರ್ಜಿದಾರರ ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಾಗಿದೆ ಎಂದು ತಿಳಿಸಿ ನಿರೀಕ್ಷಣಾ ಜಾಮೀನು ರದ್ದುಪಡಿಸಿತ್ತು.
ಇದನ್ನು ಪ್ರಶ್ನಿಸಿ ಹೈಕೋರ್ಟ್ ರಜಾಕಾಲದ ಪೀಠಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ವೇಳೆ, ಅರ್ಜಿಯ ಸಂಬಂಧದ ಪ್ರತಿಯನ್ನು ಸರ್ಕಾರಿ ವಕೀಲರಿಗೆ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ಇದೀಗ ನಿರೀಕ್ಷಣಾ ಜಾಮೀನಿಗೆ ಆಕ್ಷೇಪ ಸಲ್ಲಿಸಿರುವ ಪ್ರಾಸಿಕ್ಯೂಷನ್, ಅರ್ಜಿದಾರರು ಶುದ್ದಹಸ್ತರಾಗಿ ಹೈಕೋರ್ಟ್ಗೆ ಬಂದಿಲ್ಲ. ತಪ್ಪು ಮಾಹಿತಿಯನ್ನು ನೀಡಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿರುವುದಾಗಿ ತಿಳಿಸಲಾಗಿದೆ ಎಂದು ಆಕ್ಷೇಪಿಸಿದರು.
ಇದಕ್ಕೆ ಸರ್ಕಾರದ ವಕೀಲರು, ನಿರೀಕ್ಷಣಾ ಜಾಮೀನು ವಿಸ್ತರಣೆಗೆ ಆಕ್ಷೇಪವಿದೆ. ರಜಾಕಾಲದ ಪೀಠದ ಆದೇಶದಲ್ಲಿ ನಿರೀಕ್ಷಣಾ ಜಾಮೀನು ಕುರಿತ ಅರ್ಜಿಯ ಪ್ರತಿಯನ್ನು ವಿಶೇಷ ಅಭಿಯೋಜಕರಿಗೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಒಂದು ವೇಳೆ ನಮಗೆ ಅರ್ಜಿಯ ಪ್ರತಿ ಲಭ್ಯವಾಗಿರುವುದು ಸಾಬೀತಾದರೆ ಎಲ್ಲ ಆರೋಪಗಳನ್ನು ಹಿಂಪಡೆಯುವುದಾಗಿ ತಿಳಿಸಿದರು. ಅಲ್ಲದೆ, ಪ್ರಕರಣ ಸಂಬಂಧ ವಿಶೇಷ ಅಭಿಯೋಜಕರು ನೇಮಕವಾಗಿದ್ದಾಗ, ಅವರಿಗೆ ಅರ್ಜಿಯ ಪ್ರತಿ ಸಲ್ಲಿಸುವುದು ಅರ್ಜಿದಾರರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಬಳಿಕ ರಜಾಕಾಲದ ನ್ಯಾಯಪೀಠದ ಆದೇಶವನ್ನು ಅರ್ಜಿದಾರರ ಪೀಠಕ್ಕೆ ವಿವರಿಸಿದರು.
ಈ ವೇಳೆ ಪೀಠ, ಅರ್ಜಿದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವುದು ಅಗತ್ಯವಿಲ್ಲ ಎಂದಾದಲ್ಲಿ ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿ ವಿಚಾರಣೆ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿತು.
ಇದಕ್ಕೆ ಸರ್ಕಾರದ ಪರ ವಕೀಲರು, ಅರ್ಜಿದಾರರ ವಿರುದ್ಧ ತನಿಖೆ ನಡೆಯಬೇಕಾಗಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವುದು ಅಗತ್ಯವಿದೆ ಎಂದರು ಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ಪೀಠ ಮುಂದಿನ ವಿಚಾರಣೆಯನ್ನು ಜನವರಿ 12ಕ್ಕೆ ಮುಂದೂಡಿತು.
ಇದನ್ನೂ ಓದಿ: ಬಳ್ಳಾರಿ ಗಲಭೆ: ಮೃತ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮನೆಗೆ ಭೇಟಿ ನೀಡಿದ ಡಿಸಿಎಂ

