ETV Bharat / state

ಬೌರಿಂಗ್ ಆಸ್ಪತ್ರೆ ಅವಘಡ: ಇಂಜಿನಿಯರ್ ಅಮಾನತು

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ಪ್ರಕರಣ ಸಂಬಂಧ ಓರ್ವ ಇಂಜಿನಿಯರ್ ಅಮಾನತಾಗಿದ್ದಾರೆ.

cm-siddaramaiah-orders-to-suspend-executive-engineer-in-bowring-hospital-accident
ಸ್ಥಳಕ್ಕೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ಹಾಗೂ ಗೋಡೆ ಕುಸಿತಗೊಂಡಿರುವ ಸ್ಥಳ (ETV Bharat)
author img

By ETV Bharat Karnataka Team

Published : April 30, 2026 at 5:11 PM IST

2 Min Read
Choose ETV Bharat

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಬುಧವಾರ ಸಂಜೆ ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರನ್ನು ಅಮಾನತು ಮಾಡಲಾಗಿದೆ.

ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಜಿಬಿಎ ಆಯುಕ್ತರುಗಳ ಸಭೆ ನಡೆಯಿತು. ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ನಿನ್ನೆ ಏಳು ಜನ ಮೃತಪಟ್ಟಿರುವ ಕುರಿತಂತೆ ಜಿಬಿಎ ಆಯುಕ್ತರೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು, ಗೋಡೆಗೆ ಹಾನಿ ಆಗಲಿದೆ ಎಂದು ತಿಳಿದಿದ್ದರೂ ಕಾಮಗಾರಿ ನಡೆಯುವಾಗ ಮಣ್ಣು ಸುರಿದದ್ದು ಏಕೆ ಎಂದು ಪ್ರಶ್ನಿಸಿದರು.

ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದು ನೀವು ಏಕೆ ನೋಡಿಕೊಳ್ಳಲಿಲ್ಲ ಎಂದು ಆಸ್ಪತ್ರೆ ಮುಖ್ಯಸ್ಥರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಸೂಚಿಸಿದ ಮುಖ್ಯಮಂತ್ರಿಗಳು, ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ನಿನ್ನೆ ಬೆಂಗಳೂರಿನಲ್ಲಿ ಉಂಟಾದ ಮಳೆಯಲ್ಲಿ ಸಾಕಷ್ಟು ಹಾನಿಯಾಗಿದ್ದು, 250ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ ಸಾವನ್ನಪ್ಪಿದ್ದಾರೆ. ಈಗಾಗಲೇ ಮೃತಪಟ್ಟವರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಸಿದ್ಧತೆ ಕೈಗೊಳ್ಳಿ: ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಕತ್ತರಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ರಾಜಕಾಲುವೆಗಳಲ್ಲಿ ಹೂಳು ತೆಗೆಯುವುದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಬೇಕು. ಅಂಡರ್ ಪಾಸ್​​ಗಳಲ್ಲಿ ಮಳೆ ನೀರು ನಿಲ್ಲದಂತೆ ಹಾಗೂ ಜನರು ಅಂಡರ್​​ಪಾಸ್ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಿ ಎಂದು ಸಿಎಂ ಸೂಚಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹಾಗೂ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೌರಿಂಗ್ ಆಸ್ಪತ್ರೆ ದುರಂತ; ಜಿಬಿಎ ಆಯುಕ್ತರು ಸೇರಿ ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ, ತನಿಖೆ: ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್