ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯ: ಸಮಿತಿ ನೀಡುವ ವರದಿ ಆಧರಿಸಿ ಕ್ರಮ- ಪರಮೇಶ್ವರ್
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆ ಕುರಿತು ಸಮಿತಿ ನೀಡುವ ವರದಿ ಆಧರಿಸಿ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.


Published : December 22, 2025 at 3:20 PM IST
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಇಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, "ಡಿಸೆಂಬರ್ 24ರಂದು ವಿಜಯ್ ಹಜಾರೆ ಕ್ರಿಕೆಟ್ ಪಂದ್ಯ ನಡೆಸಲು ಅನುಮತಿ ನೀಡುವಂತೆ ಕೆಎಸ್‌ಸಿಎ ಮನವಿ ಮಾಡಿದೆ. ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಪಂದ್ಯ ಮಾತ್ರ ನಡೆಸುತ್ತೇವೆ ಎಂದು ಕೆಎಸ್‌ಸಿಎ ಅವರು ಕೇಳಿದ್ದಾರೆ" ಎಂದರು.
"ಕ್ರೀಡಾಪಟುಗಳ ಸುರಕ್ಷತೆಯೆ ಹಿತದೃಷ್ಟಿಯಿಂದ ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಲೋಕೋಪಯೋಗಿ, ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ, ಆರೋಗ್ಯ ಇಲಾಖೆಯನ್ನೊಳಗೊಂಡ ಸಮಿತಿಯು ಮಧ್ಯಾಹ್ನ 3 ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಲಿದೆ. ಸಮಿತಿ ನೀಡುವ ವರದಿ ಆಧರಿಸಿ, ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ" ಎಂದು ಹೇಳಿದರು.
"ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರು 17 ಅಂಶಗಳ ಸಲಹೆ ಸೂಚನೆಗಳನ್ನು ಪಾಲಿಸುವುದು ಅಗತ್ಯ ಎಂದು ಸೂಚಿಸಿ ಪತ್ರ ಬರೆದಿದ್ದರು. ಅದರಲ್ಲಿ ಏನೆಲ್ಲ ಪೂರ್ಣಗೊಳಿಸಿದ್ದಾರೆ ಎಂಬುದನ್ನು ಪರಿಶೀಲಿಸಿ, ಇಂದು ಸಂಜೆ 5 ಗಂಟೆಯೊಳಗೆ ಸಮಿತಿಯು ಸರ್ಕಾರಕ್ಕೆ ತಿಳಿಸಲಿದೆ. ಕೆಲ ದಿನಗಳ ಹಿಂದೆಯಷ್ಟೇ ಕೆಎಸ್‌ಸಿಎ ಹೊಸ ಸಮಿತಿ ರಚನೆಯಾಗಿದೆ. ಎಲ್ಲವನ್ನು ಪೂರ್ಣಗೊಳಿಸುವುದಾಗಿ ಕೆಎಸ್‌ಸಿಎ ಅವರು ಹೇಳಿದ್ದಾರೆ" ಎಂದು ಸಚಿವರು ತಿಳಿಸಿದರು.
ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ.ಶರತ್ ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಎಡಿಜಿಪಿ ಆರ್.ಹಿತೇಂದ್ರ ಹಾಗೂ ಕೆಎಸ್‌ಸಿಎ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ನಿರ್ಬಂಧ ಹೇರಲಾಗಿತ್ತು. ಬಳಿಕ ಡಿ.12 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕೆಲ್ ಡಿಕುನ್ಹಾ ವಿಚಾರಣಾ ಆಯೋಗದ ಮಾರ್ಗಸೂಚಿಯನ್ವಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಒಮ್ಮತದ ಅಭಿಪ್ರಾಯ ಕೇಳಿಬಂದಿತ್ತು.

