ಭಾರಿ ಮಳೆ: ಇಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ, ಶಿವಮೊಗ್ಗದ 3 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಜುಲೈ 8 (ಬುಧವಾರ) ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹಾಗೆಯೇ ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

Published : July 7, 2026 at 9:43 PM IST
|Updated : July 8, 2026 at 8:45 AM IST
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದ್ದು, ಜುಲೈ 8 (ಬುಧವಾರ) ರಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಅಲ್ಲದೆ, ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿಯೂ ಬುಧವಾರ ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸಾಗರ ತಹಶೀಲ್ದಾರ್ ಪ್ರತಿಭಾ ಅವರು ತಾಲೂಕಿನಲ್ಲಿ ಮಳೆ ಮುಂದುವರೆಯುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಹೊಸನಗರ ತಹಶೀಲ್ದಾರ್ ಭರತ್ ರಾಜ್ ಅವರು ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜು ಸೇರಿದಂತೆ ಎಲ್ಲಾ ಶೈಕ್ಷಣಿಕ ತರಗತಿಗಳಿಗೆ ರಜೆ ಘೋಷಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದಲೂ ಶಾಲೆಗೆ ರಜೆಯಿದೆ. ತಾಲೂಕಿನದ್ಯಾಂತ ಬುಧವಾರವೂ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಂಜಿತ್ ಆದೇಶ ಹೊರಡಿಸಿದ್ದಾರೆ. ಈ ರಜೆಯನ್ನು ಮುಂದಿನ ದಿನಗಳಲ್ಲಿ ಹೆಚ್ಚುವರಿ ತರಗತಿ ತೆಗೆದುಕೊಂಡು ಸರಿದೂಗಿಸಬೇಕೆಂದು ಸೂಚಿಸಲಾಗಿದೆ.
ದಕ್ಷಿಣ ಕನ್ನಡ: ಪ್ರಮುಖ ಆದೇಶಗಳು ಮತ್ತು ಸುರಕ್ಷತಾ ಮಾರ್ಗಸೂಚಿಗಳು:
ಶಾಲಾ-ಕಾಲೇಜುಗಳಿಗೆ ರಜೆ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ (PUC) ಮತ್ತು ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿವರೆಗೆ) ಯಾವುದೇ ತರಗತಿಗಳನ್ನು ನಡೆಸದಂತೆ ಆದೇಶಿಸಲಾಗಿದೆ.

ಕಾನೂನು ಕ್ರಮದ ಎಚ್ಚರಿಕೆ: ಈ ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಕಲಂ 51(ಬಿ) ರ ಅನ್ವಯ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಸಾರ್ವಜನಿಕರಿಗೆ ಹಾಗೂ ಪೋಷಕರಿಗೆ ಸೂಚನೆ: ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಮತ್ತು ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು.
ಮೀನುಗಾರರಿಗೆ ಎಚ್ಚರಿಕೆ: ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಪ್ರವಾಸಿಗರಿಗೆ ನಿರ್ಬಂಧ: ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಅಧಿಕಾರಿಗಳ ಉಪಸ್ಥಿತಿ: ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯವನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸೂಚಿಸಲಾಗಿದೆ.
ಕಾಳಜಿ ಕೇಂದ್ರಗಳು: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು (ರಕ್ಷಣಾ ಕೇಂದ್ರ) ತೆರೆದು ಸನ್ನದ್ಧ ಸ್ಥಿತಿಯಲ್ಲಿಟ್ಟುಕೊಳ್ಳಬೇಕು.
ತುರ್ತು ಸಹಾಯವಾಣಿ ಸಂಖ್ಯೆಗಳು (Toll Free Numbers):
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಸಾರ್ವಜನಿಕರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:
ಟೋಲ್ ಫ್ರೀ ಸಂಖ್ಯೆ: 1077
ದೂರವಾಣಿ ಸಂಖ್ಯೆ: 0824-2442590
ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಮುಂದುವರೆಯಲಿದೆ ಮಳೆಯ ಅಬ್ಬರ: ದಕ್ಷಿಣ ಭಾರತದಾದ್ಯಂತ ಮಾನ್ಸೂನ್ ಚಟುವಟಿಕೆ ಸಕ್ರಿಯವಾಗಿರುವ ನಿರೀಕ್ಷೆಯಿದ್ದು, ಕೇರಳ, ಕರಾವಳಿ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಕೇರಳ, ಮಾಹೆ ಮತ್ತು ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾ, ತೆಲಂಗಾಣ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕರ್ನಾಟಕದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡುಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಇಂದಿನಿಂದ 5 ದಿನ ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ: ಐಎಂಡಿ ಮುನ್ಸೂಚನೆ

